
ವಿಜಯಪುರ: ರಸ್ತೆ ಸುರಕ್ಷತಾ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾಡುವ ಮೂಲಕ ಅಪಘಾತಗಳ ನಿಯಂತ್ರಣಕ್ಕೆ ಕೈಜೋಡಿಸಿ, ನಿಯಮಗಳ ಅನುಸರಣೆಯಿಂದ ಅಪಘಾತ ತಡೆಯಲು ಏಕೈಕ ಮಾರ್ಗವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ ಎ. ಹೇಳಿದರು.
ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 37ನೇ ರಸ್ತೆ ಸುರಕ್ಷತಾ ಅಭಿಯಾನ ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಮ್ಮ ದೇಶದಲ್ಲಿ ಶೇ 70ರಷ್ಟು ಅಪಘಾತಗಳು ಅತಿವೇಗದ ಚಾಲನೆಯಿಂದಲೇ ಸಂಭವಿಸಿವೆ. ಹೆಚ್ಚಿನ ಸಾವುಗಳು ಯುವ ಹಾಗೂ ಮಧ್ಯವಯಸ್ಸಿನವರಲ್ಲಿ ಸಂಭವಿಸುತ್ತಿರುವುದು ಶೋಚನೀಯವಾಗಿದೆ ಎಂದರು.
ರಸ್ತೆ ಅಪಘಾತ ತಡೆಗಟ್ಟುವುದು ಕೇವಲ ಪೊ ಲೀಸ್ ಇಲಾಖೆಯ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಅರಿತು, ಪಾಲನೆ ಮಾಡಬೇಕು ಎಂದರು.
ಜಿಲ್ಲಾಧಿಕಾರಿ ಡಾ. ಆನಂದ.ಕೆ ಮಾತನಾಡಿ, ಅತಿವೇಗದ ಚಾಲನೆ ಹಾಗೂ ಟ್ರಾಫಿಕ್ ಸಿಗ್ನಲ್ ಉಲ್ಲಂಘನೆಯೇ ಅಪಘಾತಗಳಿಗೆ ಪ್ರಮುಖ ಕಾರಣಗಳಾಗಿದ್ದು, ಸಿಗ್ನಲ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಮ್ಮ ಮನಸ್ಥಿತಿ ಬದಲಾಗದ ಹೊರತು, ಪರಿಸ್ಥಿತಿ ಬದಲಾಗುವುದಿಲ್ಲ. ರಸ್ತೆ ಸುರಕ್ಷತೆ ನಮ್ಮಿಂದಲೇ ಆರಂಭವಾಗಬೇಕು. ನಮ್ಮ ನಡೆ ಇತರರಿಗೆ ಮಾದರಿಯಾಗಬೇಕು ಎಂದು ಹೇಳಿದರು.
ಹೆಚ್ಚಾಗಿ ಅಪಘಾತಗಳು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಸಂಭವಿಸುತ್ತಿರುವುದರಿಂದ ವಾಹನ ಚಾಲಕರು ಕಡ್ಡಾಯವಾಗಿ ಲೇನ್ ನಿಯಮಗಳನ್ನು ಪಾಲನೆ ಮಾಡಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 1033ಕ್ಕೆ ಕರೆ ಮಾಡಿ ತುರ್ತು ಸಂದರ್ಭಗಳಲ್ಲಿ ತಕ್ಷಣ ನೆರವು ಪಡೆಯಬಹುದು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಅಪಘಾತ ಸಂಭವಿಸಿದಾಗ ವಿಡಿಯೋ ಮಾಡುವುದಕ್ಕಿಂತ ಗಾಯಾಳುಗಳಿಗೆ ತಕ್ಷಣ ನೆರವು ನೀಡಬೇಕು. ಸರ್ಕಾರ ಗುರುತಿಸಿರುವಂತೆ ಸಹಾಯಕ್ಕೆ ಹೋದವರಿಗೆ ಕಾನೂನು ತೊಂದರೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಅಪಘಾತದ ಬಳಿಕದ ಗೋಲ್ಡನ್ ಹವರ್ ಅತಿ ಮಹತ್ವದ ಸಮಯವಾಗಿದ್ದು, ಒಂದು ಗಂಟೆಯೊಳಗೆ ಸೂಕ್ತ ಚಿಕಿತ್ಸೆ ದೊರೆತರೆ ಪ್ರಾಣ ಉಳಿಸುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್. ಹಾಗರಗಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂಬಾಬಾ ಮುದ್ದೇಬಿಹಾಳ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾರ್ಯಪಾಲಕ ಎಂಜಿನಿಯರ್ ವಿಜಯ ಪಾಟೀಲ, ಬಾಗಲಕೋಟೆ ವಿಭಾಗ-1ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪವನ ಗುರುವೆ, ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ ಹೊಸಮನಿ, ವಿಜಯಪುರ ವಿಭಾಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ, ಜಿಲ್ಲಾ ವಕೀಲರ ಸಂಘ ಅಧ್ಯಕ್ಷ ಡಿ.ಜಿ.ಬಿರಾದಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರು ಅಮರೇಶ ದೊಡಮನಿ, ಪೀಟರ್ ಅಲೆಕ್ಸಾಂಡರ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ರಾಜಶೇಖರ ಧೈವಾಡಿ ಉಪಸ್ಥಿತರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.