ADVERTISEMENT

ಮತದಾನ ಪ್ರಮಾಣ ಹೆಚ್ಚಿಸಲು ಜಾಗೃತಿ ಮೂಡಿಸಿ

ಸಿಂದಗಿ ಉಪಚುನಾವಣೆ: ಜಿಲ್ಲಾಧಿಕಾರಿ ಸುನೀಲ್‌ ಕುಮಾರ್‌ ಸೂನಚೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2021, 14:31 IST
Last Updated 7 ಅಕ್ಟೋಬರ್ 2021, 14:31 IST
ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಆನಂದ ಕುಮಾರ್ ಅವರು ಸಿಂದಗಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಆಲಮೇಲಕ್ಕೆ ಭೇಟಿ ನೀಡಿ ಪರಿಶೀಲಿಸಿದರು
ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಆನಂದ ಕುಮಾರ್ ಅವರು ಸಿಂದಗಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಆಲಮೇಲಕ್ಕೆ ಭೇಟಿ ನೀಡಿ ಪರಿಶೀಲಿಸಿದರು   

ವಿಜಯಪುರ: ಸಿಂದಗಿ ವಿಧಾನಸಭಾ ಚುನಾವಣೆಯಲ್ಲಿ ಶೇ 100 ರಷ್ಟು ಮತದಾನವಾಗುವಂತೆ ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಿಂದಗಿ ಪಟ್ಟಣದ ಆರ್.ಡಿ. ಪಾಟೀಲ ಕಾಲೇಜಿನಲ್ಲಿ ಗುರುವಾರ ಮತದಾನ ಜಾಗೃತಿಯ ಸ್ವೀಪ್ ಕಾರ್ಯಕ್ರಮ ಅನುಷ್ಠಾನಗೊಳಿಸುವ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ವಿವಿಧ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ವಿಶೇಷವಾಗಿ ಶಾಲಾ, ಕಾಲೇಜು ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ, ಸೈಕಲ್ ರ‍್ಯಾಲಿ, ಭಾಷಣ ಮತ್ತು ಪ್ರಬಂಧ ಸ್ಫರ್ಧೆ ಹಮ್ಮಿಕೊಳ್ಳಲು ಅವರು ಸೂಚಿಸಿದರು.

ADVERTISEMENT

ಈ ಉಪಚುನಾವಣೆಯಲ್ಲಿ ಮತದಾರರು ತಪ್ಪದೇ ಮತ ಚಲಾಯಿಸಬೇಕು. ಯಾವುದೇ ಆಮಿಷಗಳಿಗೆ ಒಳಗಾಗದೇ ಮತಚಲಾಯಿಸುವ ಬಗ್ಗೆ ಸೂಕ್ತ ಅರಿವು ಮೂಡಿಸುವಂತಾಗಬೇಕು ಎಂದರು.

ಅಕ್ಟೋಬರ್ 9 ರಿಂದ 26 ರವರೆಗೆ ಅವಶ್ಯಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾನ ಮಾಡಲು ಪ್ರೋತ್ಸಾಹಿಸಬೇಕು. ಮತದಾನ ಜಾಗೃತಿಯಲ್ಲಿ ನಿರ್ಲಕ್ಷ್ಯ ತೋರುವಂತಹ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅಸಹಕಾರ ತೋರುವ ಖಾಸಗಿ ಕಾಲೇಜುಗಳ ಬಗ್ಗೆ ಮಾಹಿತಿ ನೀಡಬೇಕು ಅಂತಹ ಕಾಲೇಜುಗಳ ವಿರುದ್ಧ ಕಾನೂನಿನ ರೀತಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದರೆಡ್ಡಿ ಮಾತನಾಡಿ, ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಮತದಾನ ಜಾಗೃತಿ ಕಾರ್ಯಕ್ರಮವನ್ನು ಪರಿಣಾಮವಾಗಿ ಹಮ್ಮಿಕೊಂಡು ಶೇ 100ರಷ್ಟು ಮತದಾನ ಆಗುವಂತೆ ಪ್ರಯತ್ನಿಸಬೇಕು ಎಂದರು.

ಜಾಗೃತಿ ಕಾರ್ಯಕ್ರಮಗಳ ಸಂದರ್ಭದಲ್ಲಿ ಮಾಸ್ಕ್, ಪರಸ್ಪರ ಅಂತರ ಹಾಗೂ ಕೋವಿಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ವ್ಯವಸ್ಥಿತವಾಗಿ ಹಮ್ಮಿಕೊಳ್ಳಬೇಕು. ಯಾವುದೇ ರೀತಿಯಲ್ಲೂ ನಿರ್ಲಕ್ಷ್ಯ ತೋರದಿರಲು ತಿಳಿಸಿದರು.

ಮತದಾರರು ಕೋವಿಡ್ ಲಸಿಕೆ ಪಡೆಯಲು ಸೂಚನೆ

ವಿಜಯಪುರ: ಸಿಂದಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿ ಅರ್ಹ ಮತದಾರರು ಕೋವಿಡ್ ಲಸಿಕೆ ಪಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಿಂದಗಿ ಪಟ್ಟಣದ ಆರ್.ಡಿ.ಪಾಟೀಲ ಕಾಲೇಜಿನಲ್ಲಿ ಪಿಡಿಒ, ಅಂಗನವಾಡಿ ಮೇಲ್ವಿಚಾರಕರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

18 ವರ್ಷ ಪೂರೈಸಿದ ಪ್ರತಿಯೊಬ್ಬ ಮತದಾರರು ಕೋವಿಡ್ ಮುನ್ನೆಚ್ಚರಿಕೆಯಾಗಿ ಕನಿಷ್ಠ ಪ್ರಥಮ ಡೋಸ್‌ ಪಡೆದಿರಬೇಕು. ಈ ದಿಸೆಯಲ್ಲಿ ಸಂಬಂಧಪಟ್ಟ ಅಧಿಕಾರಿ ಮತ್ತು ಸಿಬ್ಬಂದಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಲಸಿಕಾ ಕಾರ್ಯಕ್ರಮ ಚುರುಕುಗೊಳಿಸುವಂತೆ ಸೂಚನೆ ನೀಡಿದರು.

ಕೋವಿಡ್ ಲಸಿಕಾಕರಣದಲ್ಲಿ ಸಿಂದಗಿ ತಾಲ್ಲೂಕಿನಲ್ಲಿ ಲಸಿಕಾ ಪ್ರಮಾಣ ಕಡಿಮೆಯಾಗಿರುವುದರಿಂದ ತಕ್ಷಣ ಸಂಬಂಧಪಟ್ಟ ತಾಲ್ಲೂಕು ಆರೋಗ್ಯ ಅಧಿಕಾರಿಗಳು, ಪಿಡಿಒ, ಸಿಂದಗಿ ಹಾಗೂ ಆಲಮೇಲ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಗಳು ಕಾರ್ಯಪ್ರವೃತ್ತರಾಗಿ ಪರಸ್ಪರ ಸಮನ್ವಯತೆಯಿಂದ ಲಸಿಕಾ ಪ್ರಮಾಣ ಹೆಚ್ಚಿಸಲು ಆದ್ಯತೆ ನೀಡಬೇಕು ಎಂದರು.

ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲೆಯಾದ್ಯಂತ ಅ.8ರಂದು ಒಂದು ಲಕ್ಷ ಕೋವಿಡ್ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಸಿಂದಗಿ ತಾಲ್ಲೂಕಿನಲ್ಲಿಯೂ 20 ಸಾವಿರ ಲಸಿಕೆ ನೀಡುವ ಆರಂಭಿಕ ಗುರಿ ನೀಡಲಾಗಿದೆ ಎಂದರು.

ಸಿಂದಗಿ ಕ್ಷೇತ್ರಕ್ಕೆ ಪ್ರತಿದಿನ ಕೋವಿಡ್ ಲಸಿಕೆಗಳನ್ನು ಆದ್ಯತೆ ಮೇಲೆ ಪೂರೈಸಲಾಗುವುದು. ಆರೋಗ್ಯ ಇಲಾಖೆ ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ಸೂಕ್ತ ನಿಗಾ ವಹಿಸಬೇಕು ಎಂದರು.

ಪ್ರಚಾರಕ್ಕೆ ಸಮಯ ನಿಗದಿ

ಸಿಂದಗಿ ವಿಧಾನಸಭಾ ಮತಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಪ್ರಚಾರದ ಸಮಯವನ್ನು ಬೆಳಿಗ್ಗೆ 10ರಿಂದ ಸಂಜೆ 7ರ ವರಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪಿ.ಸುನೀಲಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.