ADVERTISEMENT

ನೀತಿ ಸಂಹಿತೆ ಉಲ್ಲಂಘನೆ; ಎಚ್ಚರವಹಿಸಲು ಸೂಚನೆ

ಸಿಂದಗಿ ವಿಧಾನಸಭಾ ಉಪಚುನಾವಣೆ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2021, 14:27 IST
Last Updated 12 ಅಕ್ಟೋಬರ್ 2021, 14:27 IST
ಸಿಂದಗಿ ಉಪ ಚುನಾವಣೆ ಅಂಗವಾಗಿ ಸ್ಥಾಪಿಸಲಾಗಿರುವ ಮಾಧ್ಯಮ ನಿರ್ವಹಣಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು
ಸಿಂದಗಿ ಉಪ ಚುನಾವಣೆ ಅಂಗವಾಗಿ ಸ್ಥಾಪಿಸಲಾಗಿರುವ ಮಾಧ್ಯಮ ನಿರ್ವಹಣಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು   

ವಿಜಯಪುರ: ಸಿಂದಗಿ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ಸುದ್ದಿ ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ತಕ್ಷಣ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿನ ದೂರು ಸ್ವೀಕಾರ ಕೇಂದ್ರಕ್ಕೆ ಮಾಹಿತಿ ರವಾನಿಸುವಂತೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಡಾ. ರಾಜಶೇಖರ್ ಅವರು ಸಂಬಂಧಿಸಿದ ಅಧಿಕಾರಿ ಮತ್ತು ಸಿಬ್ಬಂದಿಗೆ ಸೂಚಿಸಿದರು.

ಮಾಧ್ಯಮ ನಿರ್ವಹಣಾ ಕೇಂದ್ರದಲ್ಲಿ ಮಂಗಳವಾರ ಅಧಿಕಾರಿಗಳು ಮತ್ತು ಮೀಡಿಯಾ ಮಾನಿಟರಿಂಗ್ ಸೆಲ್‌ನಲ್ಲಿ ನಿಯೋಜಿಸಲಾದ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿದ ಅವರು, ಸಿಂದಗಿ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಉಲ್ಲಂಘನೆ, ಕೋವಿಡ್ ನಿಯಮಾವಳಿ ಉಲ್ಲಂಘನೆ ಸೇರಿದಂತೆ ಯಾವುದೇ ರೀತಿಯ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳ ಕಾರ್ಯಾಲಯದ ಮೂಲಕವೂ ಬೆಂಗಳೂರಿನಲ್ಲಿ ಮಾಧ್ಯಮ ನಿರ್ವಹಣಾ ಕೇಂದ್ರ ಸ್ಥಾಪಿಸಿ ಸೂಕ್ತ ನಿಗಾ ಇಡಲಾಗಿದೆ. ಕಾರಣ, ಈ ಮಾಧ್ಯಮ ನಿರ್ವಹಣಾ ಕೇಂದ್ರದಲ್ಲಿ ನೇಮಿಸಲಾಗಿರುವ ಅಧಿಕಾರಿ, ಸಿಬ್ಬಂದಿ ದಿನದ 24X7 ಗಂಟೆಗಳ ಕಾಲ ಜಾಗೃತರಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಿದರು.

ADVERTISEMENT

ಉಪಚುನಾವಣೆ ಪ್ರಚಾರಕ್ಕೆ ಸಂಬಂಧಪಟ್ಟಂತೆ ಎಲೆಕ್ಟ್ರಾನಿಕ್ ಮಾಧ್ಯಮದ ಮೂಲಕ ಪ್ರಚಾರ ಮಾಡಲು ಸಂಬಂಧಪಟ್ಟ ಅಭ್ಯರ್ಥಿಗಳು ಜಿಲ್ಲಾ ಮಾಧ್ಯಮ ದೃಢೀಕರಣ ಹಾಗೂ ಕಣ್ಗಾವಲು ಸಮಿತಿಯಿಂದ ನಿಗದಿತ ನಮೂನೆಯಲ್ಲಿ ಅನುಮತಿ ಪಡೆಯಬೇಕು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರ ಕಚೇರಿಯಲ್ಲಿ ಸ್ಥಾಪಿಸಲಾದ ಮಾಧ್ಯಮ ನಿರ್ವಹಣಾ ಕೇಂದ್ರದಲ್ಲಿ ಅರ್ಜಿ ಪಡೆದು, ನಿಯಮಾವಳಿ ಅನ್ವಯ ಸಲ್ಲಿಸಿ ಅನುಮತಿ ಪಡೆಯಬಹುದಾಗಿದೆ. ಮುದ್ರಣ ಮಾಧ್ಯಮಕ್ಕೆ ಸಂಬಂಧಪಟ್ಟಂತೆ ಜಾಹೀರಾತು ನೀಡುವ ಮುಂಚಿತವಾಗಿ ಆಯಾ ಪಕ್ಷಗಳ ಪ್ರತಿನಿಧಿಗಳಾದಲ್ಲಿ ಆಯಾ ಪಕ್ಷದ ಅಭ್ಯರ್ಥಿಯ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದರು.

ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ:

ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಟ್ವಿಟರ್, ವ್ಯಾಟ್ಸ್‌ ಆ್ಯಪ್‌ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಹಿತಿಯನ್ನು ಪೋಸ್ಟ್ ಮಾಡಿದ್ದಲ್ಲಿ ಸಂಬಂಧಪಟ್ಟ ಅಡ್ಮಿನ್‌ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಕಾರಣ, ಸಾಮಾಜಿಕ ಜಾಲ ತಾಣಗಳ ಮೂಲಕ ಯಾವುದೇ ರೀತಿಯ ಪ್ರಚಾರ ಕೈಗೊಳ್ಳುವ ಇಂತಹ ಜಾಲತಾಣಗಳ ಮೇಲೆ ತಂಡದ ಮೂಲಕ ನಿಗಾ ಸಹ ಇಡಲು ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.

ಮಾಧ್ಯಮ ನಿರ್ವಹಣಾ ಕೇಂದ್ರಕ್ಕೆ ಚುನಾವಣಾ ವೀಕ್ಷಕರಾದ ಅನಿಲ್ ಭಂಡಾರಿ, ಪೊಲೀಸ್ ವೀಕ್ಷಕರಾದ ಶಹಾಜಿ ಉಮಾಪ್ ಹಾಗೂ ವೆಚ್ಚ ವೀಕ್ಷಕರಾದ ಅನ್ವರ್ ಅಲಿ, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ್ ಕಳಸದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಈರಪ್ಪ ಆಶಾಪುರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಸುಲೇಮಾನ್ ನದಾಫ್, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಬಜಂತ್ರಿ, ನಗರಾಭಿವೃದ್ಧಿ ಕೋಶದ ವ್ಯವಸ್ಥಾಪಕ ಬಾಗೇವಾಡಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.