ವಿಜಯಪುರ:ಸಿಂದಗಿ ವಿಧಾನಸಭಾ ಉಪ ಚುನಾವಣೆಯನ್ನು ಪಾರದರ್ಶಕ, ನ್ಯಾಯಸಮ್ಮತ ಹಾಗೂ ಸುವ್ಯವಸ್ಥಿತವಾಗಿ ನಡೆಯುವಂತೆ ಅಧಿಕಾರಿಗಳು ನೋಡಿಕೊಳ್ಳುವ ಮೂಲಕ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೂಚಿಸಿದರು.
ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ಸಿಂದಗಿ ಚುನಾವಣೆಗೆ ನೇಮಕವಾಗಿರುವ ಸೆಕ್ಟರ್ ಅಧಿಕಾರಿಗಳು, ಪೋಲಿಸ್ ಸೆಕ್ಟರ್ ಅಧಿಕಾರಿಗಳು, ಫ್ಲೈಯಿಂಗ್ ಸ್ಕ್ವಾಡ್, ಸ್ಟ್ಯಾಟಿಕ್ ಸರ್ವೇಲೆನ್ಸ್ ಅಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳಿಗೆ ಏರ್ಪಡಿಸಿದ್ದ ಚುನಾವಣಾ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಚುನಾವಣಾ ಅಕ್ರಮ ನಡೆಯುವ ಸ್ಥಳಗಳು ಹಾಗೂ ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಚುನಾವಣಾ ಮತಗಟ್ಟೆಗಳ ಬಗ್ಗೆ ಪರಿಶೀಲಿಸಿ ಪಟ್ಟಿ ನೀಡುವಂತೆ ಅವರು ಸೂಚಿಸಿದರು.
ಈಗಾಗಲೇ ಚೆಕ್‌ಪೋರ್ಸ್‌ಗಳನ್ನು ಸ್ಥಾಪಿಸಿದ್ದು, ಸಿಸಿ ಕ್ಯಾಮೆರಾ ಅಳವಡಿಸಿ ತೀವ್ರ ನಿಗಾ ಇಡಲಾಗಿದೆ. ವಿವಿಧ ತಂಡಗಳ ವಾಹನಗಳಿಗೆ ಜಿಪಿಎಸ್ ಅಳವಡಿಸಿ ಸಿಂದಗಿ ಚುನಾವಣಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಿಂದ ಸೂಕ್ತ ನಿಗಾ ಇಡಲಾಗಿದೆ. ಅಧಿಕಾರಿಗಳು ನಿರ್ಲಕ್ಷ್ಯ ತೋರದಿರಲು ಎಚ್ಚರಿಕೆ ನೀಡಿದರು.
ತರಬೇತಿದಾರ ಎನ್. ಎಸ್. ಶ್ರೀಗಾವ್ಕರ್ ಮಾತನಾಡಿ, ಚುನಾವಣಾ ಪ್ರಕ್ರಿಯೆಯಲ್ಲಿ ಅಚಾತುರ್ಯಗಳು ನಡೆಯದಂತೆ ಹಾಗೂ ಮತ ಯಂತ್ರಗಳ ನಿರ್ವಹಣೆ, ಅಕ್ರಮ ಹಣ ರವಾನೆ, ಅಕ್ರಮ ಮದ್ಯ ಮಾರಾಟ ಸೇರಿದಂತೆ ಯಾವುದೇ ಲೋಪದೋಷವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಮಹಾನಗರ ಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.