ADVERTISEMENT

ನಕಲು ಮುಕ್ತ ಪರೀಕ್ಷೆ ನಡೆಸಲು ಸೂಚನೆ

ಮಾರ್ಚ್‌ 21ರಿಂದ ಏ.4ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2019, 14:25 IST
Last Updated 12 ಮಾರ್ಚ್ 2019, 14:25 IST
ವಿಜಯಪುರ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯಲ್ಲಿ ಸಿಇಓ ವಿಕಾಸ್ ಕಿಶೋರ್ ಸುರಳ್‌ಕರ್, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಡಿಡಿಪಿಐ ಪ್ರಸನ್ನಕುಮಾರ ಇದ್ದಾರೆ
ವಿಜಯಪುರ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯಲ್ಲಿ ಸಿಇಓ ವಿಕಾಸ್ ಕಿಶೋರ್ ಸುರಳ್‌ಕರ್, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಡಿಡಿಪಿಐ ಪ್ರಸನ್ನಕುಮಾರ ಇದ್ದಾರೆ   

ವಿಜಯಪುರ:‘ಮಾರ್ಚ್‌ 21ರಿಂದ ಏ.4ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜಿಲ್ಲೆಯಾದ್ಯಂತ ನಡೆಯಲಿದ್ದು, ಪಾರದರ್ಶಕ ಹಾಗೂ ನಕಲು ಮುಕ್ತ ಪರೀಕ್ಷೆ ನಡೆಸಿ’ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ-2019ರ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷಾ ವೇಳೆಯಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡಬೇಡಿ ಎಂದು ಕಟ್ಟುನಿಟ್ಟಿನ ಆದೇಶ ನೀಡಿದರು.

‘ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಇದಕ್ಕೆ ತಪ್ಪಿದಲ್ಲಿ ಸರ್ಕಾರದ ನಿಯಮಾವಳಿಯನ್ವಯ, ಆ ಶಾಲೆಯ ಪರೀಕ್ಷಾ ಕೇಂದ್ರವನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು’ ಎಂಬ ಎಚ್ಚರಿಕೆ ನೀಡಿದರು.

‘ಸುಗಮ ಪರೀಕ್ಷೆಗಾಗಿ 103 ಪರೀಕ್ಷಾ ಕೇಂದ್ರಗಳನ್ನು ಜಿಲ್ಲೆಯಾದ್ಯಂತ ತೆರೆಯಲಾಗಿದೆ. ಈ ಪೈಕಿ 2 ಸೂಕ್ಷ್ಮ ಪರೀಕ್ಷಾ ಕೇಂದ್ರಗಳೆಂದು ಗುರುತಿಸಲಾಗಿದೆ. ವಿಜಯಪುರ ನಗರದಲ್ಲಿ 16, ವಿಜಯಪುರ ಗ್ರಾಮೀಣ 18, ಬಸವನಬಾಗೇವಾಡಿ 14, ಚಡಚಣ 8, ಇಂಡಿ 11, ಮುದ್ದೇಬಿಹಾಳ 17, ಸಿಂದಗಿ ತಾಲ್ಲೂಕಿನಲ್ಲಿ 19 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷಾ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಹಾಗೂ ಯಾವುದೇ ಅಡಚಣೆ ಎದುರಾಗದಂತೆ ಸುಗಮವಾಗಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ, ಪರೀಕ್ಷಾ ಕೇಂದ್ರವಾರು ಜಾಗೃತ ದಳವನ್ನು ರಚಿಸಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ’ ಎಂಬ ಮಾಹಿತಿ ನೀಡಿದರು.

ADVERTISEMENT

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 33,472 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 30,897 ವಿದ್ಯಾರ್ಥಿಗಳು ಪ್ರಥಮ ಬಾರಿಗೆ ಪರೀಕ್ಷೆ ಎದುರಿಸುತ್ತಿದ್ದಾರೆ. 945 ಪುನರಾವರ್ತಿತ ವಿದ್ಯಾರ್ಥಿಗಳು, 1322 ಖಾಸಗಿ ನೋಂದಾಯಿತ ಹಾಗೂ 308 ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದಂತೆ, ಒಟ್ಟು 33,472 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಹೇಳಿದರು.

ನಿಷೇಧಾಜ್ಞೆ:

ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಮಾರ್ಚ್‌ 21ರಿಂದ ಏ.4ರವರೆಗೆ ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ 144ರ ಕಲಂ ಅನ್ವಯ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಈ ಪ್ರದೇಶದಲ್ಲಿ ಪರೀಕ್ಷೆ ಬರೆಯುವವರು, ಪರೀಕ್ಷೆಗೆ ನಿಯೋಜಿತ ಕಡ್ಡಾಯ ಗುರುತಿನ ಚೀಟಿ ಹೊಂದಿದ ಸಿಬ್ಬಂದಿಗಳನ್ನು ಹೊರತುಪಡಿಸಿ ಯಾರೂ ಪ್ರವೇಶಿಸುವಂತಿಲ್ಲ.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಸ್‌ ಕಿಶೋರ್ ಸುರಳಕರ್ ಮಾತನಾಡಿ, ’ರ‍್ಯಾಂಕಿಂಗ್‌ಗಾಗಿ ಅಕ್ರಮಕ್ಕೆ ಅವಕಾಶ ನೀಡದಂತೆ ಪರೀಕ್ಷೆ ನಡೆಸಬೇಕು’ ಎಂದು ಸೂಚಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪ್ರಸನ್ನಕುಮಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿ ಎಸ್.ಎ.ಮುಜಾವರ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷೆಗೆ ನಿಯೋಜಿತ ಮುಖ್ಯ ಅಧೀಕ್ಷಕರು ಸೇರಿದಂತೆ ವಿವಿಧ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.