ವಿಜಯಪುರ: ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ವಿರೋಧಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಷ್ಟ್) ಪಕ್ಷದಿಂದ ಮೇ 14ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಮಟ್ಟದ ಜನ ಹೋರಾಟ ಹಮ್ಮಿಕೊಳ್ಳಲಾಗಿದೆ’ ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ.ಭಗವಾನರೆಡ್ಡಿ ಹೇಳಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಲೆ ಏರಿಕೆಯಲ್ಲಿ ಪೈಪೋಟಿ ನೀಡುತ್ತಿದ್ದು, ಸಾಮಾನ್ಯ ನಾಗರಿಕರನ್ನು ದೋಚುತ್ತಿದೆ. ಜನ ಹೋರಾಟದಲ್ಲಿ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಿಂದ ನೂರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ’ ಎಂದರು.
‘ಬೆಲೆ ಏರಿಕೆಯ ಬಿಸಿ ಜನಸಾಮಾನ್ಯರ ಬದುಕನ್ನು ದುರ್ಬಲಗೊಳಿಸಿದೆ. ಆರೋಗ್ಯ ವಲಯ ಸಹ ಹದಗೆಟ್ಟಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಮೂಲ ಸೌಕರ್ಯಗಳಿಲ್ಲದೇ ಖಾಸಗಿ ಪ್ರಯೋಗಾಲಯಕ್ಕೆ ಹೋಗಿ ದುಬಾರಿ ಹಣ ತೆರುವಂತಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿಯೇ ಎಲ್ಲ ತೆರನಾದ ಪರೀಕ್ಷೆ ನಡೆಸುವ ವ್ಯವಸ್ಥೆಯಾಗಬೇಕು. ಈ ಬೇಡಿಕೆಯನ್ನು ಸಹ ಸಮಾವೇಶದಲ್ಲಿ ಒತ್ತಾಯಿಸಲಾಗುವುದು’ ಎಂದರು.
‘ಪ್ರೀಪೇಡ್ ಕರೆನ್ಸಿ ಮಾದರಿಯಲ್ಲಿ ಸ್ಮಾರ್ಟ್ ಮೀಟರ್ ವ್ಯವಸ್ಥೆ ಅಳವಡಿಸಿ ವಿದ್ಯುತ್ ಶುಲ್ಕ ಆಕರಣೆ ಮಾಡುವುದು ಸರಿಯಲ್ಲ. ಈ ವ್ಯವಸ್ಥೆ ಅತ್ಯಂತ ಅಪಾಯಕಾರಿ, ರೈತರ ಉಚಿತ ವಿದ್ಯುತ್ ವ್ಯವಸ್ಥೆಯಿಂದ ವಂಚಿತವಾಗುವ ಷಡ್ಯಂತ್ರದ ಭಾಗವಾಗಿ ಈ ವ್ಯವಸ್ಥೆ ಅಳವಡಿಸಲಾಗುತ್ತಿದೆ’ ಎಂದು ದೂರಿದರು.
‘ರೈತರ ಬದುಕು ದುಸ್ತರವಾಗಿದೆ, ಡಾ.ಎಂ.ಎಸ್. ಸ್ವಾಮಿನಾಥನ್ ಅವರ ವರದಿ ಜಾರಿಗೊಳಿಸಿ ಬೆಂಬಲ ಬೆಲೆ ನೀಡುವ ಕೇಂದ್ರ ಸರ್ಕಾರ ಭರವಸೆ ಇನ್ನೂ ಭರವಸೆಯಾಗಿಯೇ ಉಳಿದಿದೆ’ ಎಂದರು.
‘ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವ ಗ್ರಾಮೀಣ ಕೃಷಿ ಕಾರ್ಮಿಕರಿಗೆ ಕೆಲಸದ ದಿನಗಳನ್ನು 200ಕ್ಕೆ ಹೆಚ್ಚಿಸಿ, ಅವರ ಕೂಲಿಯನ್ನು ₹600ಕ್ಕೆ ಹೆಚ್ಚಿಸಬೇಕು. 6,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುವ ಸರ್ಕಾರದ ನಿರ್ಧಾರವನ್ನು ಕೂಡಲೇ ಕೈಬಿಡಬೇಕು’ ಎಂದು ಒತ್ತಾಯಿಸಿದರು.
‘ಆಶಾ, ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಘೋಷಿಸುವುದು, ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಣೆ, ರೈತರಿಗೆ ಬೆಂಬಲ ಬೆಲೆ ನೀಡುವುದು ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಹಕ್ಕೊತ್ತಾಯ ಮಂಡಿಸಲಾಗುವುದು’ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಮಲ್ಲಿಕಾರ್ಜುನ ಎಚ್.ಟಿ, ಸಿದ್ದಲಿಂಗ ಬಾಗೇವಾಡಿ, ಶ್ರೀಕಾಂತ ಕೊಂಡಗೂಳಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.