ADVERTISEMENT

ಬೆಂಬಲ ಬೆಲೆ: ಉದ್ದಿನ ಕಾಳು ಖರೀದಿ ಆರಂಭ

ಖರೀದಿ ಕಾಲಾವಧಿ 90 ದಿನಗಳ ವರೆಗೆ ನಿಗದಿ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2022, 16:11 IST
Last Updated 2 ಸೆಪ್ಟೆಂಬರ್ 2022, 16:11 IST
ವಿಜಯಮಹಾಂತೇಶ
ವಿಜಯಮಹಾಂತೇಶ   

ವಿಜಯಪುರ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ವಿಜಯಪುರ, ಬಸವನಬಾಗೇವಾಡಿ, ಮುದ್ದೇಬಿಹಾಳ, ಇಂಡಿ, ಚಡಚಣ, ಸಿಂದಗಿ ಮತ್ತು ತಾಳಿಕೋಟೆ ಸೇರಿದಂತೆ 7 ಕಡೆ ಉದ್ದಿನ ಕಾಳು ಖರೀದಿ ಕೇಂದ್ರಗಳನ್ನು ಟಿಎಪಿಸಿಎಂಎಸ್ ಸಂಸ್ಥೆಗಳ ಮೂಲಕ ಖರೀದಿ ಪ್ರಕ್ರಿಯೆ ಪ್ರಾರಂಭಿಸಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಜಿಲ್ಲಾಧಿಕಾರಿ ವಿಜಯಮಹಾಂತೇಶ ಮಾತನಾಡಿ, ಪ್ರತಿ ಎಕರೆಗೆ 3 ಕ್ವಿಂಟಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 6 ಕ್ವಿಂಟಲ್‌ ಉದ್ದಿನ ಕಾಳನ್ನು ಖರೀದಿಸಲು ಕ್ರಮವಹಿಸಬೇಕು ಎಂದು ಸೂಚಿಸಿದರು.

ನೋಂದಣಿ ಕಾಲಾವಧಿಯನ್ನು ಆದೇಶ ಹೊರಡಿಸಿದ ದಿನಾಂಕದಿಂದ 45 ದಿನಗಳ ವರೆಗೆ ನೋಂದಣಿ ಹಾಗೂ ಖರೀದಿ ಕಾಲಾವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಿರುವುದರಿಂದ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆಯನ್ನು ಒಟ್ಟಾಗಿ ಪ್ರಾರಂಭಿಸಬೇಕು ಎಂದು ಹೇಳಿದರು.

ADVERTISEMENT

ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಉದ್ದಿನ ಕಾಳು ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳ ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲಾ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

ಬೆಂಬಲ ಬೆಲೆ ಯೋಜನೆ ಮಾರ್ಗಸೂಚಿ ಹಾಗೂ ಆವರ್ತನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸುವ ಪ್ರಗತಿಯ ವಿವರವನ್ನು ಪ್ರತಿದಿನ ಸರ್ಕಾರಕ್ಕೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಇ-ಮೇಲ್ ಮೂಲಕ ಸಲ್ಲಿಸಬೇಕು ಎಂದು ತಿಳಿಸಿದರು.

ಪಹಣಿಯಲ್ಲಿರುವ ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯವನ್ನು ಡಿಬಿಟಿ ಮೂಲಕ ಜಮಾ ಆಗುವಂತೆ ಪಾವತಿ ಮಾಡಬೇಕು ಎಂದು ತಿಳಿಸಿದರು.

ಈ ಖರೀದಿ ಕೇಂದ್ರಗಳ ಮೇಲ್ವಿಚಾರಣೆಗಾಗಿ ಎಪಿಎಂಸಿ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಬೇಕು. ಖರೀದಿ ಕೇಂದ್ರಗಳಲ್ಲಿ ಯಾವುದೇ ಸಮಸ್ಯೆಗಳು ಬಾರದಂತೆ ಪ್ರತಿ ದಿನ ಅಧಿಕಾರಿಗಳಿಂದ ವರದಿ ಪಡೆದುಕೊಳ್ಳಲು ತಿಳಿಸಿದರು.‌

ಈ ಖರೀದಿ ಕೇಂದ್ರಗಳಲ್ಲಿ ರೈತರ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಬೇಕಾಗುವ ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಕೆಎಸ್‌ಸಿಎಂಎಫ್ ಶಾಖಾ ವ್ಯವಸ್ಥಾಪಕರಿಗೆ ಸೂಚಿಸಿದರು.

2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಉದ್ದಿನ ಕಾಳನ್ನು ಖರೀದಿಸಲು ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್‌ಗೆ ಬೆಂಬಲ ಬೆಲೆ ₹ 6600 ನಿಗದಿಪಡಿಸಿದೆ. ಇದರ ಖರೀದಿಗೆ ನ್ಯಾಪೆಡ್ ಸಂಸ್ಥೆಯನ್ನು ಕೇಂದ್ರ ಸರ್ಕಾರದ ಏಜೆನ್ಸಿಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳವನ್ನು ರಾಜ್ಯದಿಂದ ಖರೀದಿ ಏಜೆನ್ಸಿಯನ್ನಾಗಿ ಗುರುತಿಸಲಾಗಿದೆ ಎಂದರು.

ವಿಜಯಪುರ ಜಿಲ್ಲೆಯಲ್ಲಿ ಉದ್ದಿನಕಾಳು 1082 ಹೆಕ್ಟೇರು ಕ್ಷೇತ್ರದಲ್ಲಿ ಬಿತ್ತನೆಯಾಗಿದ್ದು ಅಂದಾಜು 1,29,84 ಕ್ವಿಂಟಲ್ ಇಳುವರಿ ಬರಬಹುದು ಎಂದು ಕೃಷಿ ಮಾರುಕಟ್ಟೆ ಅಧಿಕಾರಿಗಳು ಸಭೆಗೆ ತಿಳಿಸಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ರೂಪಾ ಎಲ್., ಸಹಕಾರಿ ಸಂಘಗಳ ಉಪ ನಿಬಂಧಕ ಚಿದಾನಂದ ನಿಂಬಾಳ, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಸಿದ್ಧರಾಮ ಬರಗೀಮಠ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ರಾಣಿ ಎಚ್‌ಸಿಎಂ, ಕೆಎಸ್‌ಸಿಎಂಎಫ್‌ದ ಶಾಖಾ ವ್ಯವಸ್ಥಾಪಕ ಡಿ.ಎಂ.ಲಿಂಗರಾಜು, ಕನಿಷ್ಠ ಬೆಂಬಲ ಬೆಲೆ ಯೋಜನೆ ಜಿಲ್ಲಾ ಕಾರ್ಯಪಡೆ ಸಮಿತಿಯ ಸದಸ್ಯ ಕಾರ್ಯದರ್ಶಿ ಎಂ.ಡಿ.ಚಬನೂರ ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.