ADVERTISEMENT

ಬಾಲ್ಯವಿವಾಹ ಪ್ರಕರಣ ಗಂಭೀರವಾಗಿ ಪರಿಗಣಿಸಿ: ಪಿ.ಸುನೀಲಕುಮಾರ್

ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಸೂಚನೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2022, 16:04 IST
Last Updated 18 ಜನವರಿ 2022, 16:04 IST
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕೇಂದ್ರ ಸರ್ಕಾರದ ಭೇಟಿ ಬಚಾವೋ, ಭೇಟಿ ಫಡಾವೋ ಯೋಜನೆಯ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ಮಾತನಾಡಿದರು
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕೇಂದ್ರ ಸರ್ಕಾರದ ಭೇಟಿ ಬಚಾವೋ, ಭೇಟಿ ಫಡಾವೋ ಯೋಜನೆಯ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ಮಾತನಾಡಿದರು   

ವಿಜಯಪುರ: ಜಿಲ್ಲೆಯಲ್ಲಿ ದಾಖಲಾಗುವ ಯಾವುದೇ ಬಾಲ್ಯವಿವಾಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೂಡಲೇ ಕ್ರಮವಹಿಸಬೇಕು. ಈ ವಿಷಯದಲ್ಲಿ ಅನಗತ್ಯ ವಿಳಂಬ ಮಾಡಬಾರದು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕೇಂದ್ರ ಸರ್ಕಾರದ ಭೇಟಿ ಬಚಾವೋ, ಭೇಟಿ ಫಡಾವೋ ಯೋಜನೆಯ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಬಾಲ್ಯವಿವಾಹ ಪ್ರಕರಣಗಳ ಕುರಿತು ದೂರುಗಳು ಬಂದಲ್ಲಿ, ಕೂಡಲೇ ಕ್ರಮವಹಿಸಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

ಬಾಲ್ಯ ವಿವಾಹ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳುವಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರ ಪಾತ್ರವೂ ಬಹಳ ಮುಖ್ಯವಾಗಿದ್ದು, ಶಿಕ್ಷಕರು ಹಾಗೂ ಅಧಿಕಾರಿಗಳು ಈ ನಿಟ್ಟಿನಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಬಾಲ್ಯವಿವಾಹ ಸೇರಿದಂತೆ ಹೆಣ್ಣು ಮಕ್ಕಳು ಕಾಣೆಯಾದ ಪ್ರಕರಣಗಳ ಬಗ್ಗೆಯೂ ಹೆಚ್ಚಿನ ಗಮನ ವಹಿಸಿ, ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಸಂಬಂಧಪಟ್ಟ ಅಧಿಕಾರಿಗಳು ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.

ಹೆಣ್ಣು ಮಕ್ಕಳು ಕಾಣೆಯಾದ ವಿಷಯಕ್ಕೆ ಸಂಬಂಧಪಟ್ಟಂತೆ ಕೂಡಲೇ ಪ್ರಕರಣ ದಾಖಲಾಗಬೇಕು. ಈ ಕುರಿತು ನಿಗದಿತ ಸಮಯದೊಳಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ಪ್ರಕರಣದಲ್ಲಿ ಸಂತ್ರಸ್ತರಾದವರನ್ನು ಪೊಲೀಸ್ ಠಾಣೆಗೆ ಕರೆದೊಯ್ದು, ದೂರು ದಾಖಲಿಸುವುದಕ್ಕಿಂತ ಅವರು ಇದ್ದ ಸ್ಥಳದಿಂದಲೇ ದೂರು ದಾಖಲಿಸಿಕೊಂಡು ಮುಂದಿನ ಅಗತ್ಯ ಕಾನೂನು ಕ್ರಮಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದರು.

ಬಾಲ್ಯವಿವಾಹಗಳ ಪ್ರಕರಣದ ಕುರಿತು ಸಂಬಂಧಪಟ್ಟ ಎಲ್ಲರಿಗೂ ವಿಷಯ ತಲುಪುವ ನಿಟ್ಟಿನಲ್ಲಿ ವಾಟ್ಸ್‌ ಆ್ಯಪ್‌ ಗ್ರೂಪ್‍ನಲ್ಲಿ ಸಂಬಂಧಪಟ್ಟ ಎಲ್ಲ ಅಧಿಕಾರಿಗಳನ್ನು ಸೇರ್ಪಡೆಗೊಳಿಸಿ, ಈ ಮೂಲಕವೂ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಎಂದು ಸಲಹೆ ನೀಡಿದರು.

ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುವ ಮೂಲಕ ಮಕ್ಕಳ ಹಿತ ಕಾಯಲು ಸರ್ವಸನ್ನದ್ಧರಾಗಬೇಕು. ಈ ವಿಷಯದಲ್ಲಿ ಯಾರೂ ಕೂಡ ಬೇಜವಾಬ್ದಾರಿಯುತವಾಗಿ ವರ್ತಿಸಬಾರದು ಎಂದು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಣ್ಣ ಹೊಸಮನಿ, ಮಕ್ಕಳ ಸಮಸ್ಯೆಗಳನ್ನು ಗುರುತಿಸಿ, ಅವುಗಳನ್ನು ಕೂಡಲೇ ಪರಿಹರಿಸಿ, ಈ ವಿಷಯದಲ್ಲಿ ವಿಳಂಬ ಮಾಡಬಾರದು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ ಚವ್ಹಾಣ ಸೇರಿದಂತೆ ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ, ಸಂಘ, ಸಂಸ್ಥೆಗಳ ಮುಖ್ಯಸ್ಥರುಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.