ADVERTISEMENT

ವಿಜಯಪುರ: ಶಿಕ್ಷಕರ ಅರ್ಹತಾ ಪರೀಕ್ಷೆ ಅಕ್ಟೋಬರ್ 4ಕ್ಕೆ, ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 12:08 IST
Last Updated 25 ಸೆಪ್ಟೆಂಬರ್ 2020, 12:08 IST
ವಿಜಯಪುರದಲ್ಲಿ ಶುಕ್ರವಾರ ನಡೆದ ಶಿಕ್ಷಕರ ಅರ್ಹತಾ ಪೂರ್ವಭಾವಿ ಪರೀಕ್ಷೆ ಸಿದ್ಧತಾ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್‌ ಮಾತನಾಡಿದರು. ಡಿಡಿಪಿಐ ಪ್ರಸನ್ನ ಕುಮಾರ್‌ ಇದ್ದರು
ವಿಜಯಪುರದಲ್ಲಿ ಶುಕ್ರವಾರ ನಡೆದ ಶಿಕ್ಷಕರ ಅರ್ಹತಾ ಪೂರ್ವಭಾವಿ ಪರೀಕ್ಷೆ ಸಿದ್ಧತಾ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್‌ ಮಾತನಾಡಿದರು. ಡಿಡಿಪಿಐ ಪ್ರಸನ್ನ ಕುಮಾರ್‌ ಇದ್ದರು   

ವಿಜಯಪುರ: ಜಿಲ್ಲೆಯಲ್ಲಿ ನಡೆಯಲಿರುವ ಶಿಕ್ಷಕರ ಅರ್ಹತಾ ಪರೀಕ್ಷೆಯ ಮೊದಲ ಹಂತದ ಪೂರ್ವಭಾವಿ ಪರೀಕ್ಷೆಯಲ್ಲಿ ನಕಲು ಮತ್ತು ಗೊಂದಲಕ್ಕೆ ಅವಕಾಶ ಇಲ್ಲದಂತೆ ನಡೆಸಲು ಸೂಕ್ತ ಕ್ರಮಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಅಕ್ಟೋಬರ್‌ 4 ರಂದು ನಡೆಯಲಿರುವ ಪರೀಕ್ಷೆಗಾಗಿ ಸಕಲ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು.ಜಿಲ್ಲೆಯಲ್ಲಿ ಒಟ್ಟು 31 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 11,953 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ADVERTISEMENT

ಮೊದಲ ಹಂತದಲ್ಲಿ 11 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಎರಡನೇ ಹಂತದಲ್ಲಿ 20 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ನಗರ ಪ್ರದೇಶದ ವ್ಯಾಪ್ತಿಯಲ್ಲಿ 29 ಕೇಂದ್ರಗಳನ್ನು ಆಯ್ಕೆ ಮಾಡಲಾಗಿದ್ದು, ಇನ್ನುಳಿದ ಕೇಂದ್ರಗಳನ್ನು ನಗರದ ಸುತ್ತಿಲಿನ ಸ್ಥಳಗಳನ್ನು ಆಯ್ದುಕೊಳ್ಳಲಾಗಿದೆ ಎಂದರು.

ಪರೀಕ್ಷಾ ಕೇಂದ್ರದಲ್ಲಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಅಂತರವನ್ನು ವ್ಯವಸ್ಥಿತವಾಗಿ ಕಾಪಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು ಹಾಗೂ ಪರೀಕ್ಷೆ ಬರೆಯಲಿರುವ ಎಲ್ಲ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಕೈಗೊಳ್ಳಬೇಕು ಎಂದರು.

ಕೋವಿಡ್-19 ಪಾಸಿಟಿವ್ ಹೊಂದಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಅಲ್ಲಿ ಒಬ್ಬ ನರ್ಸ್, ಆರೋಗ್ಯ ಸಹಾಯಕರು ಹಾಗೂ ಅಂಬುಲೆನ್ಸ್‌ ವ್ಯವಸ್ಥೆ ಮಾಡಿಕೊಡಲಾಗುವುದು ಎಂದರು.

ಪರೀಕ್ಷೆಯ ಸಂದರ್ಭದಲ್ಲಿ ಪ್ರತಿ ಡೆಸ್ಕ್‌ಗೆ ಇಬ್ಬರಂತೆ ಅಂತರವನ್ನು ಕಾಯ್ದುಕೊಳ್ಳುವಂತೆ ಸೂಚಿಸಬೇಕು. ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷಾ ಮೇಲ್ವಿಚಾರಕರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಹಾಗೂ ಪರೀಕ್ಷೆ ಮುಗಿಯುವವರೆಗೆ ತೆಗೆಯುವಂತಿಲ್ಲ ಎಂದು ಸೂಚಿಸಿದರು.

ಪರೀಕ್ಷೆಗೆ ಜಿಲ್ಲಾ ಮಟ್ಟದ6 ಜನರನ್ನು ನೋಡೆಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಿಕೊಳ್ಳಲಾಗುವುದು. ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ಪರೀಕ್ಷೆ ಮುಗಿಯುವವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಿ ಪರೀಕ್ಷಾ ಕೇಂದ್ರದ ಸಮೀಪದ ಝರಾಕ್ಸ್ ಅಂಗಡಿ, ಕಂಪ್ಯೂಟರ್ ಸೆಂಟರ್ ಸೈಬರ್ ಕೆಫೆ, ಕೋಚಿಂಗ್ ಕೇಂದ್ರಗಳನ್ನು ತೆರೆಯದಂತೆ ನೋಡಿಕೊಳ್ಳಲು ಸೂಚಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಪ್ರಸನ್ನ ಕುಮಾರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.