ADVERTISEMENT

ಸಾಮಾಜಿಕ ಸಮಾನತೆಗಾಗಿ ಸಂಕಲ್ಪ ಸಮಾವೇಶ 14ರಿಂದ

ಜಿಲ್ಲಾ ಕೇಂದ್ರಗಳಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ 130ನೇ ಜಯಂತಿ ಆಚರಣೆಗೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2021, 13:26 IST
Last Updated 3 ಏಪ್ರಿಲ್ 2021, 13:26 IST
ಡಿ.ಜಿ.ಸಾಗರ್‌
ಡಿ.ಜಿ.ಸಾಗರ್‌   

ವಿಜಯಪುರ: ಡಾ.ಬಿ.ಆರ್‌.ಅಂಬೇಡ್ಕರ್‌ ಅವರ 130ನೇ ಜಯಂತಿ ಅಂಗವಾಗಿ ಏಪ್ರಿಲ್‌ 14ರಿಂದ 30ರ ವರೆಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಾಮಾಜಿಕ ಸಮಾನತೆಗಾಗಿ ಸಂಕಲ್ಪ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಿ.ಜಿ.ಸಾಗರ್ ತಿಳಿಸಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮಾವೇಶದಲ್ಲಿ ಪ್ರಗತಿಪರರು, ಅಂಬೇಡ್ಕರ್‌ ವಾದಿಗಳು, ವಿಚಾರವಾದಿಗಳು ಪಾಲ್ಗೊಳ್ಳಬೇಕು ಎಂದು ಅವರು ಹೇಳಿದರು.

ರಾಜ್ಯ ಬಿಜೆಪಿ ಸರ್ಕಾರವು ಬಲಿಷ್ಠ ಸಮುದಾಯಗಳಿಗೆ ಮೀಸಲಾತಿ ನೀಡುವ ಭರವಸೆ ನೀಡುವ ಮೂಲಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಾಗೂ ಹಿಂದುಳಿದ ವರ್ಗಗಳ ವಿರೋಧಿಯಾಗಿದೆ.ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡಲು ಹೊರಟಿದೆ. ಈ ಕುರಿತು ಸಮಾವೇಶದಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

ADVERTISEMENT

ಪ್ರಸಕ್ತ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಾಗೂ ಹಿಂದುಳಿದ ವರ್ಗಗಳಿಗೆ ಅಲ್ಪಮಟ್ಟದ ಅನುದಾನ ಮೀಸಲಿಟ್ಟು, ಮುಂದುವರಿದ ಸಮಾಜಗಳಿಗೆ ಯತೇಚ್ಛೆ ಅನುದಾನ ನೀಡುವ ಮೂಲಕ ತಾರತಮ್ಯ ಮಾಡಲಾಗಿದೆ ಎಂದು ಅರೋಪಿಸಿದರು.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನವದೆಹಲಿಯಲ್ಲಿ ನಿರಂತರವಾಗಿ ಪ್ರತಿಭಟನೆ, ಧರಣಿ ನಡೆಸುತ್ತಿದ್ದರೂ ಇದುವರೆಗೂ ಸ್ಪಂದಿಸದ ಕೇಂದ್ರ ಸರ್ಕಾರದ ರೈತ ವಿರೋಧಿ ನಿಲುವನ್ನು ದಸಂಸ ಖಂಡಿಸುತ್ತದೆ ಮತ್ತು ರೈತ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಹೇಳಿದರು.

ಶಾಸಕನನ್ನು ಬಂಧಿಸಿ

ಯುವತಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ, ಅತ್ಯಾಚಾರ ಗೈದಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ತಕ್ಷಣ ಬಂಧಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಸಂತ್ರಸ್ತ ಯುವತಿಗೆ ಅಗತ್ಯ ನ್ಯಾಯ ಸಿಗುವಂತಾಗಬೇಕು ಎಂದು ಆಗ್ರಹಿಸಿದರು.

ದಲಿತ ಸಂಘರ್ಷ ಸಮಿತಿ ಮುಖಂಡರ ವಿರುದ್ಧ ದಾಖಲಿಸಿದ್ದಸುಳ್ಳು ಕೇಸು ಕೈಬಿಡುವಂತೆ ಆಗ್ರಹಿಸಿ ಸಮಿತಿಯಿಂದ ಹೋರಾಟ ನಡೆಸಿದ್ದರೂ ಇದುವರೆಗೂ ಸಂಬಂಧಿಸಿದ ಪೊಲೀಸ್‌ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳದೇ ಇರುವ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಬೆಂಬಲ

ಬೆಳಗಾವಿ ಲೋಕಸಭಾ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಬೆಂಬಲಿಸಲು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ತೀರ್ಮಾನಿಸಿದೆ ಎಂದು ಹೇಳಿದರು.‌

ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಎಂ.ಬಿ.ಶ್ರೀನಿವಾಸ, ಎ.ಮಾನಯ್ಯ, ರಮೇಶ ಆಸಂಗಿ, ಜಿಲ್ಲಾ ಸಂಚಾಲಕ ವಿನಾಯಕ ಗುಣಸಾಗರ, ಸಿದ್ದು, ರಾಯಣ್ಣವರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

***

ಸಿಂದಗಿ ವಿಧಾನಸಭಾ ಉಪ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಸಮುದಾಯದವರು ಕೋಮುವಾದಿ ಬಿಜೆಪಿ ವಿರುದ್ಧ ಮತ ಚಲಾಯಿಸಬೇಕು

ಡಿ.ಜಿ.ಸಾಗರ, ರಾಜ್ಯ ಸಂಚಾಲಕ, ಡಿಎಸ್‌ಎಸ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.