ADVERTISEMENT

ಪಂಚಮಸಾಲಿ ಪ್ರತಿಭಟನಾಕಾರರು ಕಲ್ಲು ಹೊಡೆದಿರುವುದಕ್ಕೆ ಸಾಕ್ಷಿ ಇದೆ: ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2024, 6:32 IST
Last Updated 13 ಡಿಸೆಂಬರ್ 2024, 6:32 IST
<div class="paragraphs"><p>ಸಿದ್ದರಾಮಯ್ಯ, ಮುಖ್ಯಮಂತ್ರಿ</p></div>

ಸಿದ್ದರಾಮಯ್ಯ, ಮುಖ್ಯಮಂತ್ರಿ

   

– ಪ್ರಜಾವಾಣಿ ಚಿತ್ರ

ವಿಜಯಪುರ: ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ವೇಳೆ ಪಂಚಮಸಾಲಿ ಸಮುದಾಯದ ಉದ್ರಿಕ್ತರು ಪೊಲೀಸರ ಮೇಲೆ ಕಲ್ಲು ಹೊಡೆದಿರುವುದಕ್ಕೆ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ADVERTISEMENT

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ‌ ಅವರು, ಪ್ರತಿಭಟನಾಕಾರರು ಕಲ್ಲು ಹೊಡೆದಿರುವುದಕ್ಕೆ, ಬ್ಯಾರಿಕೇಡ್ ತಳ್ಳಿ ಒಳಗೆ ನುಗ್ಗುವುದಕ್ಕೆ ಸಾಕ್ಷಿಯಾಗಿ ಫೋಟೋಗಳಿವೆ ಎಂದರು.

ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು. ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ ? ಎಂದು ಪ್ರಶ್ನಿಸಿದರು.

ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ, ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದರು.

ಸಂಧಾನಕ್ಕೆ ಸಚಿವರನ್ನು ಕಳುಹಿಸಲಾಗಿತ್ತು

ಪಂಚಮಸಾಲಿ ಹೋರಾಟಗಾರರು ಟ್ರ್ಯಾಕ್ಟರ್ ತರುವ ಮೂಲಕ ಹೋರಾಟ ಮಾಡುತ್ತೇವೆ ಎಂದು ಮೊದಲೇ ತಿಳಿಸಿದ್ದರು. ಕೋರ್ಟ್ ಹೋರಾಟವನ್ನು ಶಾಂತಿಯುತವಾಗಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನಡೆಸಲು ಸೂಚನೆ ನೀಡಿತ್ತು. ಆದರೆ, ಹೋರಾಟಗಾರರು ಕಾನೂನನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದರು. ಸ್ಥಳಕ್ಕೆ ಮಹದೇವಪ್ಪ ಸೇರಿದಂತೆ ಮೂರು ಸಚಿವರನ್ನು ಕಳುಹಿಸಲಾಗಿತ್ತು ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಮುಖ್ಯಮಂತ್ರಿಗಳು ಹೃದಯಹೀನರು, ಲಿಂಗಾಯತ ವಿರೋಧಿಗಳು ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ ಎಂದರು.

ಕಾನೂನಿನ ಮುಂದೆ ಎಲ್ಲರೂ ಸಮಾನರು:

ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ.‌ ಎಲ್ಲರಿಗೂ ಕಾನೂನು ಒಂದೇ. ನನಗೂ, ಸ್ವಾಮೀಜಿಗೂ ಎಲ್ಲರಿಗೂ ಒಂದೇ. ಸಂವಿಧಾನದ 14 ನೇ ವಿಧಿಯ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಹಾಗೂ ಕಾನೂನಿನ ಸಮಾನ ರಕ್ಷಣೆಯನ್ನು ಖಾತ್ರಿಪಡಿಸುತ್ತದೆ ಎಂದರು.

ಸಂವಿಧಾನದ ಪ್ರಕಾರ ನಡೆದುಕೊಳ್ಳುತ್ತೇವೆ

ಪ್ರವರ್ಗ 2ಎ ಅಡಿಯಲ್ಲಿರುವ ಸಮುದಾಯಗಳು ಪಂಚಮಸಾಲಿ ಸಮುದಾಯವನ್ನು 2 ಎ ಗೆ ಸೇರಿಸಲು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರ ಅಭಿಪ್ರಾಯ ಹೇಳಲು ಅವರಿಗೆ ಸ್ವಾತಂತ್ರ್ಯವಿದೆ. ಸ್ವಾಮೀಜಿಗಳಿಗೂ ಅವರ ಅಭಿಪ್ರಾಯ ತಿಳಿಸಲು ಸ್ವಾತಂತ್ರ್ಯವಿದೆ. ಅಂತಿಮವಾಗಿ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತೇವೆ ಎಂದರು.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮುಂದೆ ಹೋಗಲಿ

ಪಂಚಮಸಾಲಿ ಮೀಸಲಾತಿ ಬೇಡಿಕೆ ಮುಂದೇನು ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಪಂಚಮಸಾಲಿ ಸಮಾಜದವರು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮುಂದೆ ಹೋಗಬೇಕು. ಬಿಜೆಪಿ ಕಾಲದಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗಡೆಯವರ ವರದಿಯಲ್ಲಿ ಈಗಿರುವಂತೆಯೇ ಪ್ರವರ್ಗ 2ಎ, 2ಬಿ ಇರಬೇಕು. ಇದಕ್ಕೆ ಹೊಸ ಸೇರ್ಪಡೆಯಾಗಬಾರದು ಹಾಗೂ 2ಬಿ ಯಲ್ಲಿರುವ ಶೇ4 ಮೀಸಲಾತಿಯನ್ನು ರದ್ದು ಮಾಡಬಾರದು ಎಂದು ಹೇಳಿದ್ದಾರೆ ಎಂದರು.

ಬಿಜೆಪಿ ಕುಮ್ಮಕ್ಕು: ಬಿಜೆಪಿಯವರು ಪಂಚಮಸಾಲಿ ಹೋರಾಟಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿಯವರು ಈ ಹಿಂದೆ ಮುಸಲ್ಮಾನರಿಗೆ ಇದ್ದ ಶೇ4 ರ ಮೀಸಲಾತಿಯನ್ನು ರದ್ದು ಮಾಡಿ 3ಎ ಒಕ್ಕಲಿಗರಿಗೆ ಶೇ 2 ಮತ್ತು 3ಬಿ ಪ್ರವರ್ಗಗಳಿಗೆ ಲಿಂಗಾಯತರಿಗೆ ಶೇ 2ರಷ್ಟು ಮೀಸಲಾತಿ ನೀಡಿದರು. ಇದನ್ನು ಪ್ರಶ್ನಿಸಿ ಮುಸಲ್ಮಾನರಾದ ರಸೂಲ್ ಎಂಬ ವ್ಯಕ್ತಿ ಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ಹಿಂದಿನ ಬಿಜೆಪಿ ಸರ್ಕಾರವೇ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿದ್ದಾರೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ

ಸಚಿವ ಎಚ್.ಕೆ.ಪಾಟೀಲ, ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.