ADVERTISEMENT

ಅಕ್ಕಮಹಾದೇವಿ ಮಹಿಳಾ ವಿವಿ: ನೂತನ ಕುಲಪತಿ ತುಳಸಿಮಾಲಾ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 25 ಜನವರಿ 2021, 13:54 IST
Last Updated 25 ಜನವರಿ 2021, 13:54 IST
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನೂತನ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲಾ ಅವರಿಗೆ ಹಂಗಾಮಿ ಕುಲಪತಿ ಪ್ರೊ. ನಾಮದೇವ ಗೌಡಾ ಸೋಮವಾರ ಅಧಿಕಾರ ಹಸ್ತಾಂತರಿಸಿದರು
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನೂತನ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲಾ ಅವರಿಗೆ ಹಂಗಾಮಿ ಕುಲಪತಿ ಪ್ರೊ. ನಾಮದೇವ ಗೌಡಾ ಸೋಮವಾರ ಅಧಿಕಾರ ಹಸ್ತಾಂತರಿಸಿದರು   

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪ್ರೊ.ಬಿ.ಕೆ.ತುಳಸಿಮಾಲಾ ಸೋಮವಾರ ಅಧಿಕಾರ ವಹಿಸಿಕೊಂಡರು.

ಹಂಗಾಮಿ ಕುಲಪತಿ ಪ್ರೊ.ನಾಮದೇವ ಗೌಡಾ ಅವರು ಕುಲಪತಿಗಳಿಗೆ ಅಧಿಕಾರ ಹಸ್ತಾಂತರಿಸಿದರು.ಬಳಿಕ ವಿಶ್ವವಿದ್ಯಾಲಯದ ಪರವಾಗಿ ಶಾಲು ಹೊದಿಸಿ ಹೂಗುಚ್ಛ ನೀಡಿ ಸನ್ಮಾನಿಸಿದರು.

ವಿಶ್ವವಿದ್ಯಾಲಯದ ಕುಲಸಚಿವೆ ಪ್ರೊ.ಆರ್.ಸುನಂದಮ್ಮ, ಮೌಲ್ಯಮಾಪನ ಕುಲಸಚಿವ ಪ್ರೊ.ಪಿ.ಜಿ.ತಡಸದ, ಆರ್ಥಿಕ ಅಧಿಕಾರಿ ಪ್ರೊ.ವಿಜಯಾ ಕೋರಿಶೆಟ್ಟಿ ಮತ್ತು ವಿವಿಧ ವಿಭಾಗಗಳ ಪ್ರಾಧ್ಯಾಪಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ADVERTISEMENT

ಪರಿಚಯ:ಪ್ರೊ.ಬಿ.ಕೆ.ತುಳಸಿಮಾಲಾ ಅವರು ಕುಲಪತಿಯಾಗಿ ನೇಮಕಗೊಳ್ಳುವ ಮುನ್ನ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವರಾಗಿ 2018 ರಿಂದ ಸೇವೆ ಸಲ್ಲಿಸುತ್ತಿದ್ದರು.

ಒಟ್ಟು 34 ವರ್ಷಗಳ ಸುದೀರ್ಘ ಬೋಧನಾ ಅನುಭವ ಹೊಂದಿರುವ ಅವರು, ಮೈಸೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ರೀಡರ್, ಪ್ರೊಫೆಸರ್ ಹಾಗೂ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಅನೇಕ ಕೋಶಗಳ ಮತ್ತು ವಿಭಾಗಗಳ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಪ್ರೊ.ಬಿ.ಕೆ.ತುಳಸಿಮಾಲಾ ಅವರು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ 50ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದು, ಅದರಂತೆ 22 ಸಂಶೋಧನಾ ಲೇಖನಗಳನ್ನು ಸಂಪಾದಿತ ಕೃತಿಗಳಲ್ಲಿ ಪ್ರಕಟಿಸಿದ್ದಾರೆ.

130ಕ್ಕೂ ಅಧಿಕ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ, ಕಾರ್ಯಾಗಾರಗಳಲ್ಲಿ ಹಾಗೂ ಸಮ್ಮೇಳನಗಳಲ್ಲಿ ಭಾಗವಹಿಸಿದ್ದಾರೆ.

ಇವರ ಮಾರ್ಗದರ್ಶನದಲ್ಲಿ ಒಟ್ಟು 16 ವಿದ್ಯಾರ್ಥಿಗಳು ಪಿಎಚ್‍ಡಿ ಪದವಿಯನ್ನು ಹಾಗೂ 9 ವಿದ್ಯಾರ್ಥಿಗಳು ಎಂ.ಫಿಲ್ ಪದವಿ ಪಡೆದಿದ್ದಾರೆ.

ನವದೆಹಲಿಯ ಯುಜಿಸಿ, ಕರ್ನಾಟಕ ಸರ್ಕಾರದ ಯೋಜನಾ ಇಲಾಖೆ ಹಾಗೂ ಚಾಮರಾಜನಗರದ ಜಿಲ್ಲಾ ಪಂಚಾಯ್ತಿ ಅನುದಾನದಡಿಯಲ್ಲಿ ಅನೇಕ ಪ್ರೊಜೆಕ್ಟ್‌ಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.

ನವದೆಹಲಿಯ ಕೇಂದ್ರ ಲೋಕಸೇವಾ ಆಯೋಗ, ಕರ್ನಾಟಕ ಲೋಕ ಸೇವಾ ಆಯೋಗ, ಒಡಿಸ್ಸಾ ಲೋಕ ಸೇವಾ ಆಯೋಗ, ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥೆ, ಪೊಲೀಸ್ ಅಕಾಡೆಮಿ, ಆಕಾಶವಾಣಿ ಹಾಗೂ ಇನ್ನೂ ಅನೇಕ ಸಂಘ-ಸಂಸ್ಥೆಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದಾರೆ. ಜೊತೆಗೆ 50ಕ್ಕೂ ಹೆಚ್ಚು ವಿಶೇಷ ಉಪನ್ಯಾಸಗಳನ್ನು ನೀಡಿದ್ದಾರೆ.

ಪ್ರೊ.ಬಿ.ಕೆ.ತುಳಸಿಮಾಲಾ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ನೇಮಕಾತಿ ಮಂಡಳಿ, ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೇಮಕಾತಿ ಮಂಡಳಿ, ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ನೇಮಕಾತಿ ಮಂಡಳಿ, ಕರ್ನಾಟಕ ಜನಪದ ವಿಶ್ವವಿದ್ಯಾಲಯದ ನೇಮಕಾತಿ ಮಂಡಳಿ, ನವದೆಹಲಿಯ ಕೇಂದ್ರ ಲೋಕಸೇವಾ ಆಯೋಗದ ಆಯ್ಕೆ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.