ADVERTISEMENT

ಮಕ್ಕಳಿಗೆ ಲಸಿಕೆ: ಆದ್ಯತೆ ನೀಡಿ; ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಸೂಚನೆ

​ಪ್ರಜಾವಾಣಿ ವಾರ್ತೆ
Published 31 ಜುಲೈ 2021, 16:29 IST
Last Updated 31 ಜುಲೈ 2021, 16:29 IST
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಮಾತನಾಡಿದರು
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಮಾತನಾಡಿದರು   

ವಿಜಯಪುರ: ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ನಿಗದಿತ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಅವರು 5ರಿಂದ 6 ವರ್ಷದ ಹಾಗೂ 10ರಿಂದ 16 ವರ್ಷ ವಯೋಮಾನದ ಮಕ್ಕಳಿಗೆ ಅವರ ವಯೋಮಾನಕ್ಕೆ ಅನುಗುಣವಾಗಿ ನಿಗದಿತ ಲಸಿಕೆ ನೀಡಬೇಕು ಎಂದು ಹೇಳಿದರು.

ಮುಂದಿನ ತಿಂಗಳು ಈ ಕುರಿತು ಸಾಧಿಸಿದ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಕಾರಣ ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಆರೋಗ್ಯ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ADVERTISEMENT

ಮಿಜಲ್ಸ್ ಮತ್ತು ದಡಾರ 2023 ರ ವರೆಗೆ ಸಂಪೂರ್ಣ ನಿರ್ಮೂಲನೆ ಮಾಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಜಿಲ್ಲೆಯಲ್ಲಿ ಶೇ 95 ರಷ್ಟು ಈ ರೋಗಕ್ಕೆ ಲಸಿಕೆ ನೀಡಿದಾಗ ಮಾತ್ರ ಸಂಪೂರ್ಣ ನಿರ್ಮೂಲನೆ ಸಾಧ್ಯವಿದ್ದು, ಈ ದಿಸೆಯಲ್ಲಿ ಪ್ರಗತಿ ಸಾಧಿಸಲು ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋವಿಂದ ರೆಡ್ಡಿ, ಮಿಜಲ್ಸ್, ರೂಬೆಲಾ ನಿರ್ಮೂಲನೆಗೆ ಸಂವಹನ, ನಿರ್ವಹಣೆ ಹಾಗೂ ಸೂಕ್ತ ಜಾಗೃತಿ ಮೂಡಿಸುವ ಮೂಲಕ ಪ್ರಗತಿ ಸಾಧಿಸಲು ಸೂಚನೆ ನೀಡಿದರು.

ಜೂನ್‌ನಿಂದ ಡಿಸೆಂಬರ್ ಅವಧಿಯಲ್ಲಿ ಗಂಟಲು ಮಾರಿ ಹೆಚ್ಚಿನ ಪ್ರಕರಣಗಳು ಕಂಡುಬರುತ್ತಿದ್ದು, ಆ ದಿಸೆಯಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಜೊತೆಗೆ ಅಗಸ್ಟ್‌ ಮತ್ತು ಸೆಪ್ಟೆಂಬರ್‌ನಲ್ಲಿ ವಯಸ್ಸಿಗೆ ಅನುಗುಣವಾಗಿ ಲಸಿಕೆ ಹಾಕಿಸಲು ಸಲಹೆ ನೀಡಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜಕುಮಾರ ಯರಗಲ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಮಹೇಶ ನಾಗರಬೆಟ್ಟ, ಡಬ್ಲ್ಯುಎಚ್‌ಒ ಪ್ರತಿನಿಧಿ ಡಾ.ಮುಕುಂದ ಗಲಗಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಭಾರಿ ಉಪನಿರ್ದೇಶಕ ಚವ್ಹಾಣ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಎಂ.ಬಿ ಬಿರಾದಾರ, ಪೀಟರ್ ಅಲೆಕ್ಸಾಂಡರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಹೊಸಮನಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.