ADVERTISEMENT

ವಿಜಯಪುರ | ಶ್ರಮಯೋಗಿ ಮಾನ್-ಧನ್ ಯೋಜನೆಗೆ ನೋಂದಣಿ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2026, 4:26 IST
Last Updated 9 ಫೆಬ್ರುವರಿ 2026, 4:26 IST
   

ವಿಜಯಪುರ: ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಗೆ ಅರ್ಹರು ಈ ಸೌಲಭ್ಯ ಪಡೆದುಕೊಳ್ಳಲು ಜಿಲ್ಲೆಯಲ್ಲಿ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ 800 ಕಾಮನ್ ಸರ್ವಿಸ್ ಸೆಂಟರ್, ಜಿಲ್ಲಾದ್ಯಂತ ಆಯೋಜಿಸಲಾಗುವ ಶಿಬಿರಗಳಿಗೆ ತೆರಳಿ ಅರ್ಹರು ನೋಂದಣಿ ಮಾಡಿಕೊಳ್ಳಲು ಸೂಕ್ತ ಜಾಗೃತಿ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ.ಕೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಈ ಯೋಜನೆಯಡಿ ಅಸಂಘಟಿತ ವಲಯದ ಕಾರ್ಮಿಕರನ್ನು, ಬೀದಿ ಬದಿ ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳು ಸೇರಿದಂತೆ ವಿವಿಧ ಅಸಂಘಟಿತ ಕಾರ್ಮಿಕರು ನೋಂದಾಯಿಸಿಕೊಳ್ಳಲು ಮಾರ್ಚ್ 15ರ ವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ADVERTISEMENT

18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಿಕೊಳ್ಳಬಹುದು. ವಯಸ್ಸಿಗೆ ಅನುಗುಣವಾಗಿ ಮಾಸಿಕವಾಗಿ ₹55ರಿಂದ ₹200 ವರೆಗೆ ವಂತಿಕೆ ಪಾವತಿಸಬೇಕು. ಕೇಂದ್ರ ಸರ್ಕಾರದಿಂದ ಅಷ್ಟೇ ವಂತಿಕೆ ಪಾವತಿಸಿ ಬ್ಯಾಂಕ್ ಖಾತೆಯಲ್ಲಿ ಈ ಮೊತ್ತವನ್ನು ಸಂಗ್ರಹಿಸಲಾಗುತ್ತದೆ. 60 ವರ್ಷ ಪೂರ್ಣಗೊಂಡ ನಂತರ ಮಾಸಿಕ ₹3 ಸಾವಿರ ಪಿಂಚಣಿ ಸೌಲಭ್ಯ ಪಡೆಯಬಹುದಾಗಿದೆ ಎಂದರು.

ಈ ಯೋಜನೆಯಡಿ ನರೇಗಾ ಕಾರ್ಮಿಕರು, ಎಸ್‌ಜಿಎಸ್ ಸದಸ್ಯರು, ಕೃಷಿ ಕಾರ್ಮಿಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಮಧ್ಯಾಹ್ನದ ಬಿಸಿ ಊಟದ ಕೆಲಸ ನಿರ್ವಹಿಸುವವರು, ಬೀದಿ ಬದಿ ವ್ಯಾಪಾರಿಗಳು, ಗೃಹ ಕಾರ್ಮಿಕರು, ಮೀನುಗಾರರು, ಇನ್ನಿತರೆ ಅಸಂಘಟಿತ ವಲಯಗಳ ಕಾರ್ಮಿಕರು ಹಾಗೂ ವ್ಯಾಪಾರಿಗಳು ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಹಾಗೂ ಮೊದಲ ತಿಂಗಳ ವಂತಿಕೆಯೊಂದಿಗೆ ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದಾಗಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವ ನಿಟ್ಟಿನಲ್ಲಿ ವ್ಯಾಪಕ ಜಾಗೃತಿ ಮೂಡಿಸಿ, ಸೂಕ್ತ ಸ್ಥಳಗಳಲ್ಲಿ ಶಿಬಿರ ಆಯೋಜನೆಗೆ ಮುಂದಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಶಾ ಕಾರ್ಯಕರ್ತೆಯರು, ಬೀದಿ ಬದಿ ವ್ಯಾಪಾರಸ್ಥರು, ಬಿಸಿ ಊಟದ ಕಾರ್ಮಿಕರು ನೋಂದಣಿ ಮಾಡಿಕೊಳ್ಳಲು ಅನುಕೂಲ ಒದಗಿಸುವ ನಿಟ್ಟಿನಲ್ಲಿ ಶಿಬಿರಗಳನ್ನು ಆಯೋಜನೆ ಮಾಡಬೇಕು. ತಾಲ್ಲೂಕು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೋಂದಣಿ ಮಾಡಿಸುವತ್ತ ಕ್ರಮವಹಿಸುವಂತೆ ಅವರು ಸೂಚಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.