ADVERTISEMENT

ವಿಜಯಪುರ: ಕನ್ನಡ ನಾಮಫಲಕ ಅಳವಡಿಕೆಗೆ ಅ. 31ರ ಗಡುವು

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2025, 6:08 IST
Last Updated 29 ಅಕ್ಟೋಬರ್ 2025, 6:08 IST
ವಿಜಯಪುರದಲ್ಲಿ ಕನ್ನಡ ನಾಮಫಲಕ ಜಾಗೃತಿ ಅಭಿಯಾನ ಯಶಸ್ವಿಯಾಗಿ ನಡೆಯಿತು
ವಿಜಯಪುರದಲ್ಲಿ ಕನ್ನಡ ನಾಮಫಲಕ ಜಾಗೃತಿ ಅಭಿಯಾನ ಯಶಸ್ವಿಯಾಗಿ ನಡೆಯಿತು   

ವಿಜಯಪುರ: ಜಿಲ್ಲೆಯ ವಾಣಿಜ್ಯ, ಕೈಗಾರಿಕೆ, ವ್ಯವಹಾರ, ಉದ್ಯಮ, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯ, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ ಸೇರಿದಂತೆ ಅಂಗಡಿಗಳಲ್ಲಿ ಕನ್ನಡ ನಾಮಫಲಕ ಅಳವಡಿಸುವ ಕುರಿತು ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ನೇತೃತ್ವದಲ್ಲಿ ಜಾಗೃತಿ ಮೂಡಿಸಲಾಯಿತು.

ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಭಾಷೆ ಇರುವ ಅಭಿಯಾನಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಬೆಳಿಗ್ಗೆ ನಗರದ ಬಿ.ಎಲ್.ಡಿ.ಇ ಆಸ್ಪತ್ರೆ ಆವರಣದಿಂದ ಜಾಗೃತಿ ಅಭಿಯಾನ ಆರಂಭಗೊಂಡು, ಗಾಂಧಿ ವೃತ್ತದವರೆಗೂ ನಡೆಯಿತು.

ಜಿಲ್ಲೆಯಲ್ಲಿನ ವಿವಿಧ ಅಂಗಡಿಗಳಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಸರ್ಕಾರದ ಆದೇಶದಂತೆ ನಾಮಫಲಕಗಳು ಶೇ 60ರಷ್ಟು ಕನ್ನಡ ಭಾಷೆಯನ್ನೊಳಗೊಂಡಿರಬೇಕು. ಶೇ 40 ರಷ್ಟು ಉಳಿದ ಭಾಷೆಗಳನ್ನು ಬಳಸಬಹುದು ಎಂದು ಅಭಿಯಾನದ ಮೂಲಕ ಜಾಗೃತಿ ಮೂಡಿಸಲಾಯಿತು.

ADVERTISEMENT

ಕನ್ನಡ ನಾಮಫಲಕ ಅಳವಡಿಸದ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಿ ಅ. 31ರೊಳಗೆ ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಸೂಚಿಸಲಾಯಿತು. ನಾಮಫಲಕಗಳಲ್ಲಿ ಶೇ 60ಕ್ಕೂ ಹೆಚ್ಚು ಕನ್ನಡ ಭಾಷೆ ಬಳಸಿದ ಅಂಗಡಿ ಮಾಲೀಕರನ್ನು ಅಭಿನಂದಿಸಲಾಯಿತು.

ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಗುಣಾರಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೋಳಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಬಿ ಕುಂಬಾರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.