ವಿಜಯಪುರ: ನಾರಾಯಣಪುರ ಜಲಾಶಯದಿಂದ 1.50 ಟಿಎಂಸಿ ನೀರನ್ನು ಇಂಡಿ ಶಾಖಾ ಕಾಲುವೆ ಹಾಗೂ ಇಂಡಿ ಏತ ನೀರಾವರಿ ಕಾಲುವೆಗಳ ಮೂಲಕ ಜನ–ಜಾನುವಾರುಗಳಿಗೆ ಕುಡಿಯುವ ಉದ್ದೇಶಕ್ಕಾಗಿ ಜಿಲ್ಲೆಯ ಇಂಡಿ, ಸಿಂದಗಿ, ದೇವರಹಿಪ್ಪರಗಿ, ಆಲಮೇಲ ಮತ್ತು ಚಡಚಣ ತಾಲ್ಲೂಕಿನ ಕೆರೆಗಳನ್ನು ತುಂಬಿಸಲಾಗುತ್ತಿದ್ದು, ನೀರು ಪೋಲಾಗದಂತೆ ನೋಡಿಕೊಂಡು ನಿಗಾ ವಹಿಸಲು ಹಾಗೂ ಅಧಿಕಾರಿಗಳು ಸಮನ್ವಯತೆ ಸಾಧಿಸಿಕೊಂಡು ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಜನ-ಜಾನುವಾರುಗಳಿಗೆ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕೆರೆಗಳಲ್ಲಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಕುಡಿಯುವ ನೀರಿಗೆ ಪ್ರಥಮಾದ್ಯತೆ ನೀಡಬೇಕು ಎಂದರು.
ಜಲಾಶಯದಿಂದ ಹರಿಬಿಡಲಾದ ನೀರು ಉದ್ದೇಶಿತ ಸ್ಥಳಕ್ಕೆ ತಲುಪುವಂತೆಯೂ ಹಾಗೂ ನೀರು ಪೋಲಾಗದಂತೆ ತೀವ್ರ ನಿಗಾವಹಿಸಬೇಕು. ವಾಚ್ ಅಂಡ್ ವಾರ್ಡ್ ಅನ್ನು ಕಟ್ಟುನಿಟ್ಟಾಗಿ ನಿರ್ವಹಿಸಲು ಇಂಡಿ ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಕಂದಾಯ, ಪೊಲೀಸ್, ನೀರಾವರಿ, ಸ್ಥಳೀಯ ಸಂಸ್ಥೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ,ಸಿಬ್ಬಂದಿ ನೇಮಿಸಲಾಗಿದ್ದು, ಈ ನಿಟ್ಟಿನಲ್ಲಿ ತೀವ್ರ ನಿಗಾ ಇರಿಸಬೇಕು ಎಂದು ಹೇಳಿದರು.
ಅನಧಿಕೃತವಾಗಿ ಅಳವಡಿಸಲಾದ ಪಂಪ್ ಸೆಟ್‍ಗಳನ್ನು ಹೆಸ್ಕಾಂ ಇಲಾಖೆಯಿಂದ ತೆರವುಗೊಳಿಸಲು ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಅಂತಹವರ ವಿರುದ್ಧ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾಲುವೆಗಳ ಮೇಲುಸ್ತುವಾರಿಗೆ ನೇಮಿಸಿದ ಅಧಿಕಾರಿಗಳು ಪರಸ್ಪರ ಸಮನ್ವಯತೆ ಸಾಧಿಸಿಕೊಂಡು ಯಾವುದೇ ಸಮಸ್ಯೆಯಾಗದಂತೆ ಅತ್ಯಂತ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು. ವಹಿಸಿಕೊಟ್ಟ ಕಾರ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವಂತೆ ತಿಳಿಸಿದರು.
ನೀರು ಪೂರೈಕೆಯ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಎದುರಾಗುವ ಸಮಸ್ಯೆಗಳನ್ನು ಸರಿಪಡಿಸಿಕೊಂಡು ತ್ವರಿತವಾಗಿ ಇತ್ಯರ್ಥಪಡಿಸಿಕೊಂಡು ಸಕಾಲದಲ್ಲಿ ಕುಡಿಯುವ ನೀರು ಪೂರೈಸಲು ಕ್ರಮ ವಹಿಸುಂತೆ ಅವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ್, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆಗಳು ಆಗದಂತೆ ಅಗತ್ಯ ಮುಂಜಾಗ್ರತೆ ಕ್ರಮವನ್ನು ಪಿಡಿಒಗಳು ವಹಿಸಬೇಕು. ಕಾಲಕಾಲಕ್ಕೆ ಈಗಾಗಲೇ ಹಲವು ಬಾರಿ ಸಭೆ ನಡೆಸಿ, ಸೂಕ್ತ ನಿರ್ದೇಶನ ನೀಡಲಾಗಿದೆ. ಯಾವುದೇ ದೂರಿಗೆ ಆಸ್ಪದ ನೀಡದೇ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವಂತೆಯೂ, ಎದುರಾಗಬಹುದಾದ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಪರಿಹರಿಸಬೇಕು. ಯಾವುದೇ ಸಮಸ್ಯೆಗಳಿದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು, ಒಟ್ಟಾರೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಇಂಡಿ ಉಪ ವಿಭಾಗಾಧಿಕಾರಿ ಅನುರಾಧಾ ವಸ್ತ್ರದ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಬಸವರಾಜ ಕುಂಬಾರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದೀನ್ ಸೌದಾಗರ ಸೇರಿದಂತೆ ಉಪಸ್ಥಿತರಿದ್ದರು.
ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಅಧಿಕಾರಿಗಳು ಕ್ರಮ ವಹಿಸಬೇಕುಟಿ.ಭೂಲಾನ್ ಜಿಲ್ಲಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.