
ವಿಜಯಪುರ: ‘ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣ ದೊರಕಿಸಲು ಶಿಕ್ಷಕರು ಯೋಜನಾ ಬದ್ಧವಾಗಿ ಪಾಠ ಬೋಧನೆಗೆ ಆದ್ಯತೆ ನೀಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ನಗರದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ ಪುನಶ್ಚೇತನ ಕಾರ್ಯಾಗಾರ ಹಾಗೂ ತಾಲ್ಲೂಕು ಮಟ್ಟದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅವರು ಮಾತನಾಡಿದರು.
‘ಜಿಲ್ಲೆಯಲ್ಲಿ ಶಿಕ್ಷಣಕ್ಕಾಗಿ ಒತ್ತು ನೀಡಿ ಅವಶ್ಯಕ ವಾತಾವರಣ ನಿರ್ಮಿಸಲಾಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವತ್ತ ಎಲ್ಲರೂ ಶ್ರಮಿಸಬೇಕು. ಕಲಿಕಾಮಟ್ಟ ಹೆಚ್ಚಿಸಲು ಶ್ರಮಿಸಬೇಕು. ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಮಕ್ಕಳ ಶೈಕ್ಷಣಿಕ ಬೆಳವಣಿಗೆಯ ದೃಷ್ಟಿಯಿಂದ ಜವಾಬ್ದಾರಿ ತೆಗೆದುಕೊಂಡು ಶಿಕ್ಷಕರು, ಅಧಿಕಾರಿಗಳು ಶ್ರಮಿಸುವ ಮೂಲಕ ಶೈಕ್ಷಣಿಕ ಗುಣಮಟ್ಟ ಹಾಗೂ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಕೈ ಜೋಡಿಸಬೇಕು’ ಎಂದು ಹೇಳಿದರು.
‘ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡಿ, ಅವರು ಉನ್ನತ ಶಿಕ್ಷಣ ಪಡೆದು ಸಾಧಕರಾಗಿ ಹೊರ ಹೊಮ್ಮಲು ಉತ್ತಮ ಕಲಿಕಾ ಅವಕಾಶ ಕಲ್ಪಿಸಿಕೊಟ್ಟು, ಉತ್ತಮ ಬೋಧನಾ ಕ್ರಮ ಅನುಸರಿಸಿ ಅವರಲ್ಲಿ ಅಧ್ಯಯನಶೀಲತೆ ಪ್ರೇರೇಪಿಸಬೇಕು’ ಎಂದು ಹೇಳಿದರು.
ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಮಾತನಾಡಿ, ‘ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುವ ಸಚಿವರ ಆಶಯದಂತೆ ಸಿಎಸ್‌ಆರ್ ಅನುದಾನ ಬಳಸಿಕೊಂಡು ಸುಸಜ್ಜಿತ ಸ್ಮಾರ್ಟ್‌ಕ್ಲಾಸ್ ಕೊಠಡಿಗಳನ್ನು ನಿರ್ಮಾಣ ಮಾಡಿ, ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸಿ ಪ್ರೋತ್ಸಾಹಿಸಲಾಗುತ್ತಿದೆ’ ಎಂದು ಹೇಳಿದರು.
ಚಾಣಕ್ಯ ಕರಿಯರ್ ಅಕಾಡೆಮಿ ಮುಖ್ಯಸ್ಥ ಎನ್.ಎಂ. ಬಿರಾದಾರ ಮಾತನಾಡಿ, ‘ವಿದ್ಯಾರ್ಥಿಗಳು ಆಸಕ್ತಿ ಮೈಗೂಡಿಸಿಕೊಂಡು ಏಕಾಗ್ರತೆ ಸಾಧಿಸಿಕೊಳ್ಳುವ ಮೂಲಕ ನೆನಪಿನಶಕ್ತಿ ಹೆಚ್ಚಿಸಿಕೊಳ್ಳಬೇಕು’ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೀರಯ್ಯ ಸಾಲಿಮಠ, ವಿಜಯಪುರದ ಡಯಟ್ ಪ್ರಾಂಶುಪಾಲರಾದ ಉಮಾದೇವಿ ಸೊನ್ನದ, ಅಶೋಕ ಮಲಘಾಣ, ಮಾಚಪ್ಪನವರ, ಕೆ.ಬಿ. ಪಾಟೀಲ ಇದ್ದರು.
ಎಲ್ಲ ವಿಷಯಗಳನ್ನು ಕರಗತ ಮಾಡಿಕೊಳ್ಳಿ ಜೀವನದಲ್ಲಿ ಉತ್ತಮ ಸಾಧನೆ ಮಾಡಿ ಸಿಎಸ್ಆರ್ ಅನುದಾನದಡಿ ಸ್ಮಾರ್ಟ್‌ಕ್ಲಾಸ್
ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಗುಣಮಟ್ಟದ ಶಿಕ್ಷಣ ಒದಗಿಸುವ ಮೂಲಕ ಮಕ್ಕಳ ಶೈಕ್ಷಣಿಕ ಮಟ್ಟದ ಬೆಳವಣಿಗೆಗಾಗಿ ಪಾಲಕರು ಶಿಕ್ಷಕರು ವಿಶೇಷ ಗಮನ ಹರಿಸಬೇಕುಎಂ.ಬಿ.ಪಾಟೀಲ ಜಿಲ್ಲಾ ಉಸ್ತುವಾರಿ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.