ADVERTISEMENT

ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ: 18,741 ವಿದ್ಯಾರ್ಥಿಗಳು ನೋಂದಣಿ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2026, 4:52 IST
Last Updated 28 ಫೆಬ್ರುವರಿ 2026, 4:52 IST
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಔದ್ರಾಮ್ ಮಾತನಾಡಿದರು.
ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಔದ್ರಾಮ್ ಮಾತನಾಡಿದರು.   

ವಿಜಯಪುರ: ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ ಪರೀಕ್ಷೆ ಮಾರ್ಚ್ 1ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಜಿಲ್ಲೆಯ 13 ತಾಲೂಕಿನ 45 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಪರೀಕ್ಷೆಗೆ ಒಟ್ಟು 18,741 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಯಾವುದೇ ಲೋಪವಿಲ್ಲದೇ ಸುಸೂತ್ರ ಹಾಗೂ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸಲು ಸಂಬಂಧಿತ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ಪರೀಕ್ಷೆ ಬರೆಯುವ ಮಕ್ಕಳು ಚಿಕ್ಕವರಾಗಿರುವುದರಿಂದ ಕೊಠಡಿಗಳ ಸುವ್ಯವಸ್ಥೆ, ಶುದ್ಧ ಕುಡಿಯುವ ನೀರು, ಶೌಚಾಲಯ ಸೌಲಭ್ಯ, ಸಮರ್ಪಕ ಬೆಳಕು ಮತ್ತು ವಿದ್ಯುತ್ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.

ADVERTISEMENT

ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್, ಕ್ಯಾಲ್ಕುಲೇಟರ್, ಬ್ಲೂಟೂತ್, ವೈರ್‌ಲೆಸ್ ಸೆಟ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಸಾಮಗ್ರಿಗಳ ಹಸ್ತಾಂತರಕ್ಕಾಗಿ ಅಪರ ಜಿಲ್ಲಾಧಿಕಾರಿ, ಜಿಲ್ಲಾ ಖಜಾನೆ ಉಪ ನಿರ್ದೇಶಕರು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರನ್ನೊಳಗೊಂಡ ತ್ರಿಸದಸ್ಯ ಸಮಿತಿ ರಚಿಸಲಾಗಿದೆ ಎಂದರು.

ಒಟ್ಟು 18 ಪರೀಕ್ಷಾ ಕೇಂದ್ರದ ಮಾರ್ಗಗಳಿದ್ದು, ತ್ರಿಸದಸ್ಯ ಸಮಿತಿ ರಚಿಸಲಾಗಿದೆ. ತಂಡಕ್ಕೆ ತಲಾ ಒಬ್ಬ ಸಶಸ್ತ್ರ ಪೊಲೀಸ್ ಸಿಬ್ಬಂದಿ ಹಾಗೂ ಜಿಲ್ಲೆಯ 45 ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತಿಗಾಗಿ ಅವಶ್ಯಕತೆ ಅನುಗುಣವಾಗಿ ಪೊಲೀಸ್ ಸಿಬ್ಬಂದಿ ಮತ್ತು ಪರೀಕ್ಷೆ ಮುಕ್ತಾಯದ ನಂತರ ಉತ್ತರ ಪತ್ರಿಕೆ ಬಂಡಲ್‌ಗಳನ್ನು ಸಾಗಿಸಲು ಪೊಲೀಸ್ ಸಿಬ್ಬಂದಿ ನೇಮಕ ಮಾಡಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಯಿತು.

ಖಜಾನೆ ಇಲಾಖೆಯ ಉಪ ನಿರ್ದೇಶಕರಾದ ಹಣಮಂತ ಕಾಲತಿಪ್ಪಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಶೇಖರ ಹೊಸಮನಿ, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಮಾರ್ಗಾಧಿಕಾರಿ ಸೇರಿದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.