
ವಿಜಯಪುರ: ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ, ಪೋಕ್ಸೋ ಕಾಯ್ದೆ, ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾನೂನು ಸೇರಿದಂತೆ ವಿವಿಧ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಲು, ಜನರಲ್ಲಿ ಸೂಕ್ತ ತಿಳಿವಳಿಕೆ ಮೂಡಿಸಲು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರತಿ ತಿಂಗಳಿಗೊಮ್ಮೆ ಕಾವಲು ಸಮಿತಿ ಸಭೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಗ್ರಾಮ ಮಟ್ಟದಲ್ಲಿ ಸಭೆಗಳಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ಶಾಲಾ ಮುಖ್ಯೊಪಾಧ್ಯಾಯರು, ಪೊಲೀಸ್ ಇಲಾಖೆ ಬೀಟ್ ಸಿಬ್ಬಂದಿ, ಗ್ರಾಮ ಪಂಚಾಯತ್ ಸದಸ್ಯರನ್ನೊಳಗೊಂಡು ಸಭೆ ನಡೆಸಿ ಕಾನೂನಿನ್ವಯ ನಿಷೇಧಕ್ಕೊಳಗಾಗಿರುವ ಕಾಯ್ದೆಗಳ ಕುರಿತು ಅರಿವು ಮೂಡಿಸಬೇಕು ಎಂದು ಸೂಚನೆ ನೀಡಿದರು.
ಬಾಣಂತಿ ಮತ್ತು ಗರ್ಭೀಣಿಯರಿಗಾಗಿ ಇರುವ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಂಡಿದ್ದು, ಈ ಯೋಜನೆಯಡಿ ಮೊದಲನೆ ಹೆರಿಗೆಗೆ ₹5 ಸಾವಿರ ನೇರ ನಗದು ವರ್ಗಾವಣೆ ಮೂಲಕ ಎರಡು ಕಂತುಗಳಲ್ಲಿ ಪಾವತಿಸಲಾಗುತ್ತದೆ ಎಂದರು.
2022ರ ಏಪ್ರಿಲ್ 1 ಅಥವಾ ನಂತರ ಜನನವಾದ ಎರಡನೇ ಮಗು ಹೆಣ್ಣು ಮಗು ಫಲಾನುಭವಿಗೆ ಒಂದೇ ಕಂತಿನಲ್ಲಿ ₹ 6 ಸಾವಿರ ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತದೆ ಎಂದರು.
ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯನ್ನು ಗುರಿ ನಿಗದಿಪಡಿಸಿಕೊಂಡು ನೂರರಕ್ಕೆ ನೂರು ಪ್ರಗತಿ ಸಾಧಿಸಬೇಕು. ಎಲ್ಲ ಇಲಾಖೆಗಳು ಮಕ್ಕಳ ಕ್ಷೇತ್ರದದಲ್ಲಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಸೌಲಭ್ಯ ಒದಗಿಸಲು ಶ್ರಮಿಸಬೇಕು ಎಂದು ಅವರು ಹೇಳಿದರು.
ರಾಷ್ಟ್ರೀಯ ಪೋಷಣ ಅಭಿಯಾನವನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಜಾರಿಗೊಳಿಸಬೇಕು. ಮಕ್ಕಳಿಗೆ ಲಾಭ ತಲುಪಿಸುವ ಮೂಲಕ ಯೋಜನೆ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಹಾಗೂ ವಿವಿಧ ಆರೋಗ್ಯ ಸಮಸ್ಯೆಯಿಂದ ಅಪೌಷ್ಠಿತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಲು ಮನೆ-ಮನೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿದ್ದಲ್ಲಿ ಅಂತಹ ಮಕ್ಕಳಿಗೆ ಎಲ್ಲ ಅಗತ್ಯ ಸೌಲಭ್ಯ ಒದಗಿಸಬೇಕು. ಜಿಲ್ಲೆಯಲ್ಲಿ ತೀವ್ರ ನಿಗಾ ವಹಿಸುವ ಮೂಲಕ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯನ್ನು ಶೂನ್ಯಕ್ಕೆ ತರಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಅನಿಮಿಯಾದಿಂದ ಬಳಲುವ ಗರ್ಭೀಣಿಯರಿಂದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆಗಳು ಎದುರಾಗಲಿದ್ದು, ಈ ಕುರಿತು ಜನರಲ್ಲಿ ಸೂಕ್ತ ತಿಳಿವಳಿಕೆ ಮೂಡಿಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಗುಣಮಟ್ಟದ ಆಹಾರ ಮತ್ತು ಮೂಲ ಸೌಲಭ್ಯಗಳನ್ನು ಒದಗಿಸಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಹಾಗರಗಿ, ಡಿವೈಎಸ್‍ಪಿ ಬಸವರಾಜ ಯಲಿಗಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿ ದೀಪಾ ಕಾಳೆ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ದೀಪಾಕ್ಷಿ ಜಾನಕಿ, ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿ ಪ್ರಶಾಂತ ಪೂಜಾರ, ಕಾರ್ಮಿಕ ಇಲಾಖೆ ಅಧಿಕಾರಿ ಉಮಾಶ್ರೀ ಕೋಳಿ ಉಪಸ್ಥಿತರಿದ್ದರು.
ಮಕ್ಕಳ ಸರ್ವಾಂಗೀಣ ಅಭಿವೃದ್ದಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿ ಅನುಷ್ಠಾನಗೊಳಿಸುತ್ತಿದೆ ಈ ಯೋಜನೆ ಲಾಭ ಮಕ್ಕಳಿಗೆ ದೊರಕಿಸಲು ಅಧಿಕಾರಿಗಳು ಕ್ರಮ ವಹಿಸಬೇಕು-ಡಾ.ಆನಂದ್ ಕೆ., ಜಿಲ್ಲಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.