ವಿಜಯಪುರ: 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಗುರಿ ಇದ್ದು, ಈ ನಿಟ್ಟಿನಲ್ಲಿ ಒಂದು ತಂಡವಾಗಿ ಸಂಘಟಿತ ಹೋರಾಟ ನಡೆಸುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸಲಾಗುವುದು ಎಂದು ಕೆಪಿಸಿಸಿ ಪ್ರಚಾರ ಸಮಿತಿಗೆ ನೂತನ ಅಧ್ಯಕ್ಷರಾಗಿ ನೇಮಕವಾಗಿರುವ ಶಾಸಕ ಎಂ.ಬಿ.ಪಾಟೀಲ ಹೇಳಿದರು.
‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಭರವಸೆ ಇಟ್ಟು ಪಕ್ಷ ನೀಡಿರುವ ಜವಾಬ್ದಾರಿಯನ್ನು ಗಂಭೀರವಾಗಿ ತೆಗೆದುಕೊಂಡು ನ್ಯಾಯ ಒದಗಿಸುವ ಕೆಲಸ ಮಾಡುತ್ತೇನೆ ಎಂದರು.
ಈ ಹಿಂದೆ ಸಿದ್ದರಾಮಯ್ಯ ಅವಧಿಯಲ್ಲಿ ರಾಜ್ಯಕ್ಕೆ ಒಳ್ಳೆಯ ಆಡಳಿತ ನೀಡಿದ್ದೇವೆ. ರಾಜ್ಯದ ಅಭಿವೃದ್ಧಿಗಾಗಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಿದೆ. ಈ ನಿಟ್ಟಿನಲ್ಲಿ ಪಕ್ಷದ ಹಿರಿಯ ಮುಖಂಡರ ಮಾರ್ಗದರ್ಶನ, ಯುವ ಮುಖಂಡ ಸಹಕಾರ ಹಾಗೂ ಕಾರ್ಯಕರ್ತರ ಒಗ್ಗಟ್ಟಿನೊಂದಿಗೆ ಚುನಾವಣೆ ಎದುರಿಸಲು ಆದ್ಯತೆ ನೀಡಲಾಗುವುದು ಎಂದರು.
ವಿರೋಧ ಪಕ್ಷಗಳ ವೈಫಲ್ಯವನ್ನು ಜನರಿಗೆ ತಿಳಿಸುವ ಮೂಲಕ ಮತ್ತೊಮ್ಮೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ಮಾಡಲಾಗುವುದು ಎಂದರು.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನನ್ನನ್ನು ನೇಮಕ ಮಾಡಿರುವ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಎಲ್ಲ ಹಿರಿಯ ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.