ADVERTISEMENT

ಅನಂತಕುಮಾರ ಹೆಗಡೆ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2017, 6:34 IST
Last Updated 29 ಡಿಸೆಂಬರ್ 2017, 6:34 IST

ಯಾದಗಿರಿ: ‘ಸಂವಿಧಾನವನ್ನು ಬದಲಿಸುವ ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈ ಬಿಡಬೇಕು’ ಎಂದು ಆಗ್ರಹಿಸಿ ಗುರುವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸುಭಾಶ್ಚಂದ್ರ ಭೋಸ್ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದ್ಧವಾಗಿ ಗೆದ್ದು, ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿರುವ ಅನಂತಕುಮಾರ ಹೆಗಡೆ ಈ ಸಂವಿಧಾನದ ಬದಲಾವಣೆ ಮಾಡುವುದಾಗಿ ಹೇಳಿಕೆ ನೀಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಅನಂತಕುಮಾರ್ ಹೆಗಡೆ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿದರು.

‘ಕಾಡಾ’ ಮಾಜಿ ಅಧ್ಯಕ್ಷ ಶ್ರೀನಿವಾಸರೆಡ್ಡಿ ಕಂದಕೂರ ಮಾತನಾಡಿ, ‘ ಪ್ರಧಾನಮಂತ್ರಿ ಮೋದಿ ಅವರು ಸಂವಿಧಾನವೇ ನಮ್ಮ ದೇಶದ ಗ್ರಂಥ ಎಂದು ಒಂದೆಡೆ ಹೇಳಿದರೆ; ಅವರದೇ ಸರ್ಕಾರದ  ಸಚಿವ  ಅನಂತಕುಮಾರ ಹೆಗಡೆ ಅವರು ಸಂವಿಧಾನ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ರಾಜ್ಯದಲ್ಲಿ ಬೆಂಕಿ ಹಚ್ಚಲು ಇಂತಹ ಹೇಳಿಕೆ ನೀಡುವ ವ್ಯಕ್ತಿಯನ್ನು ಕೇಂದ್ರದ ಮಂತ್ರಿಯನ್ನಾಗಿ ಮಾಡಲಾಗಿದೆ’ ಎಂದು ಕಿಡಿ ಕಾರಿದರು.

ADVERTISEMENT

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಮರಿಗೌಡ ಹುಲಕಲ್ ಮಾತನಾಡಿ, ‘ಜವಾಬ್ದಾರಿ ಸ್ಥಾನದಲ್ಲಿರುವ ಅನಂತಕುಮಾರ್ ಹೆಗಡೆ ಅವರು ಸಂವಿಧಾನ ವಿರುದ್ಧ ಹೇಳಿಕೆ ನೀಡುವ ಮೂಲಕ ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ.

ದೇಶದ್ರೋಹಿ ಅನಂತಕುಮಾರ ಹೆಗಡೆ ಅವರನ್ನು ದೇಶದ್ರೋಹದ ಮೊಕದ್ದಮೆ ದಾಖಲಿಸಿ ದೇಶದಿಂದ ಗಡೀಪಾರು ಮಾಡಬೇಕು’ ಎಂದು ಆಗ್ರಹಿಸಿದರು. ಶಿವಲಿಂಗಪ್ಪ ಪುಟಗಿ, ಮಲ್ಲಣ್ಣ ದಾಸನಕೇರಿ, ರಾಘವೇಂದ್ರ ಮಾನಸಗಲ್, ವಿಶ್ವನಾಥ ನಿಲಹಳ್ಳಿ, ಮರೆಪ್ಪ ಬಿಳ್ಹಾರ, ಮಹಿಪಾಲರೆಡ್ಡಿ ಹತ್ತಿಕುಣಿ, ಗುಲಾಮ್ ಜಿಲಾನಿ, ಸುರೇಶ ಜೈನ್, ಸರ್ದಾರ್ ಪಯಾಜ್, ಸಂಜೀವಕುಮಾರ ಕಾವಲಿ, ಮಲ್ಲಿಕಾರ್ಜುನ ಬೆಳಿಗೇರಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.