ADVERTISEMENT

ಯಾದಗಿರಿ ಜಿಲ್ಲೆಗೂ ಭೇಟಿ ನೀಡಿ: ಸಚಿವರಿಗೆ ಜಿ.ಪಂ. ಸದಸ್ಯರ ಮನವಿ

​ಪ್ರಜಾವಾಣಿ ವಾರ್ತೆ
Published 9 ಜೂನ್ 2011, 6:55 IST
Last Updated 9 ಜೂನ್ 2011, 6:55 IST

ಯಾದಗಿರಿ: `ರಾಜ್ಯ ಸಚಿವ ಸಂಪುಟ ಯಾವ ಸದಸ್ಯರೂ ಇದುವರೆಗೆ ಯಾದಗಿರಿ ಜಿಲ್ಲೆಗೆ ಭೇಟಿ ನೀಡಿಲ್ಲ. ಇದರಿಂದಾಗಿ ಜಿಲ್ಲೆಯ ಜನರಲ್ಲಿ ಬೇಸರ ಮೂಡಿಸಿದೆ. ನಮ್ಮ ಜಿಲ್ಲೆಗೂ ಒಮ್ಮೆ ಭೇಟಿ ನೀಡಿ~
ಯಾದಗಿರಿ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯರು, ಬುಧವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಜಗದೀಶ ಶೆಟ್ಟರಿಗೆ ಮಾಡಿದ ಮನವಿ ಇದು.

ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ದೇವರಾಜ ನಾಯಕ ನೇತೃತ್ವದ ನಿಯೋಗ, ಜಿಲ್ಲೆಯ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡಿತು.

ನಿಯೋಗದಲ್ಲಿದ್ದ ಜಿಲ್ಲಾ ಪಂಚಾಯಿತಿ ಸದಸ್ಯ ಬಸವರಾಜ ಖಂಡ್ರೆ, ಯಾವ ಸಚಿವರು ಜಿಲ್ಲೆಗೆ ಭೇಟಿ ನೀಡುತ್ತಿಲ್ಲ. ಇದರಿಂದ ಯಾದಗಿರಿ ಜಿಲ್ಲೆಯ ಜನರಿಗೆ ತೀರ ಬೇಸರ ಉಂಟಾಗಿದೆ. ಈ ಭಾಗಕ್ಕೆ ಭೇಟಿ ನೀಡಬೇಕು ಎಂದು ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ಸಚಿವ ಜಗದೀಶ ಶೆಟ್ಟರ, ವಿಧಾನ ಮಂಡಲದ ಅಧಿವೇಶನ ಮುಗಿದ ನಂತರ ಯಾದಗಿರಿಗೆ ಭೇಟಿ ನೀಡುವುದಾಗಿ ಭರವಸೆ ನೀಡಿದರು.

ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯಗಳಾದ ಕುಡಿಯುವ ನೀರು, ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. ಶಹಾಪುರ ತಾಲ್ಲೂಕಿನ ಗೋಗಿ ಗ್ರಾಮದಲ್ಲಿ ಕುಡಿಯುವ ನೀರಿನಲ್ಲಿ ಯುರೇನಿಯಂ ಅಂಶ ಹೆಚ್ಚಾಗಿದ್ದು, ಕೆಲದಿನಗಳ ಹಿಂದಷ್ಟೇ 60ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ತಾಲ್ಲೂಕು ಪಂಚಾಯಿತಿ ಸದಸ್ಯರಾದ ಶರಣಭೂಪಾಲರೆಡ್ಡಿ, ಲಕ್ಷ್ಮಣ ನಾಯಕ, ವಸಂತಕುಮಾರ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ಧಾರೆಡ್ಡಿ ಬಲಕಲ್ ಮುಂತಾದವರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.