ADVERTISEMENT

ವಸತಿ ನಿಲಯದಲ್ಲಿ ಪಾಠಕ್ಕೆ ವ್ಯವಸ್ಥೆ: ಹನುಮೆಗೌಡ ಮರಕಲ್

​ಪ್ರಜಾವಾಣಿ ವಾರ್ತೆ
Published 16 ಜೂನ್ 2011, 11:05 IST
Last Updated 16 ಜೂನ್ 2011, 11:05 IST

ಯಾದಗಿರಿ: ತಾಲ್ಲೂಕಿನ ಹತ್ತಿಕುಣಿ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ನಿವೇಶನದ ಕೊರತೆಯಿದ್ದು, ಕಟ್ಟಡ ಇಲ್ಲದೇ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಇದಕ್ಕೆ ತಾತ್ಕಾಲಿಕ ಪರಿಹಾರ ಕಲ್ಪಿಸಲು ಗ್ರಾಮದ ಪರಿಶಿಷ್ಟ ಪಂಗಡದ ವಿದ್ಯಾರ್ಥಿ ವಸತಿ ನಿಲಯದ ಎರಡು ಕೋಣೆಗಳಲ್ಲಿ ಪಾಠ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮೇಗೌಡ ಮರಕಲ್ ತಿಳಿಸಿದರು.

ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಟ್ಟಡವಿಲ್ಲದೇ ಗಿಡದ ಕೆಳಗೆ ಕುಳಿತು ಪಾಠ ಕೇಳುತ್ತಿರುವ ವಿಷಯ ತಿಳಿದ ಹನುಮೇಗೌಡ ಮರಕಲ್ ಬುಧವಾರ ಗ್ರಾಮಕ್ಕೆ ಭೇಟಿ ನೀಡಿ, ಕಟ್ಟಡ ಪರಿಶೀಲಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.

ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳು ಒಂದೇ ಕಟ್ಟಡದಲ್ಲಿ ನಡೆಯುತ್ತಿದ್ದು, ಇದರಿಂದಾಗಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಗ್ರಾಮದಲ್ಲಿ ಸೂಕ್ತ ನಿವೇಶನ ಲಭ್ಯವಿಲ್ಲದ್ದರಿಂದ ಪದವಿಪೂರ್ವ ಕಾಲೇಜು ಕಟ್ಟಡ ನಿರ್ಮಿಸಲು ಆಗುತ್ತಿಲ್ಲ ಎಂದ ಅವರು, ಬರುವ ದಿನಗಳಲ್ಲಿ ಶಿಕ್ಷಣ ಸಚಿವರನ್ನು ಭೇಟಿ ಮಾಡಿ, ಕಾಲೇಜಿಗೆ ಕಟ್ಟಡ ನಿರ್ಮಾಣಕ್ಕೆ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.

ಅಲ್ಲಿಯವರೆಗೂ ತಾತ್ಕಾಲಿಕವಾಗಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿ ನಿಲಯದ ಎರಡು ಕೋಣೆಗಳಲ್ಲಿ ಪಾಠ ಮಾಡಲು ವ್ಯವಸ್ಥೆ ಮಾಡುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.

ಯಾದಗಿರಿ ತಾಲ್ಲೂಕಿನ ಬಹುತೇಕ ಶಾಲೆಗಳಲ್ಲಿ ಬಾಲಕಿಯರ ಶೌಚಾಲಯಕ್ಕೆ ಸೂಕ್ತ ವ್ಯವಸ್ಥೆ ಇಲ್ಲ ಎಂಬ ದೂರುಗಳು ಕೇಳಿ ಬಂದಿವೆ. ಈ ಬಗ್ಗೆ ಮೂರು ತಿಂಗಳೊಳಗಾಗಿ ಕ್ರಮ ಕೈಗೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ಹತ್ತಿಕುಣಿ ಗ್ರಾಮಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ತಮ್ಮ ಜೊತೆಗೆ ಬಾರದ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹನುಮೇಗೌಡ ಮರಕಲ್, ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಭಿವೃದ್ಧಿ ಕುಂಠಿತವಾಗಿದೆ.
 
ಸಮಸ್ಯೆ ತಮ್ಮ ಇಲಾಖೆಯ ವ್ಯಾಪ್ತಿಗೆ ಬರುತ್ತದೆ ಎಂದು ತಿಳಿದ ಮೇಲೂ ಸೂಕ್ತ ಮಾಹಿತಿ ನೀಡದ ಇಲಾಖೆ ಉಪನಿರ್ದೇಶಕರು ನಾಳೆ ಬರುವುದಾಗಿ ಬೇಜವಾಬ್ದಾರಿ ಉತ್ತರ ನೀಡುತ್ತಾರೆ. ಇಂತಹ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಜರ್ ಹುಸೇನ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಪ್ರಗತಿ ಪರಿಶೀಲನಾ ಸಭೆ ಇಂದು
ಯಾದಗಿರಿ: ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಗುರುವಾರ (ಜೂ.16) ಬೆಳಿಗ್ಗೆ 11 ಕ್ಕೆ ಇಲ್ಲಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದೆ.

ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆ ವಹಿಸಲಿದ್ದರು, ಸಂಬಂಧಿಸಿದ ಅಧಿಕಾರಿಗಳು ಸಮಗ್ರ ಮಾಹಿತಿಯೊಂದಿಗೆ ಸಭೆಗೆ ಖುದ್ದಾಗಿ ಹಾಜರಾಗುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸಿಇಓ ಗುರನೀತ್ ತೇಜ್ ಮೆನನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.