ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗದ 41 ವಿಧಾನಸಭಾ ಕ್ಷೇತ್ರಗಳಲ್ಲಿ 88 ಅಭಿವೃದ್ಧಿ ಕಾಮಗಾರಿಗಳಿಗೆ ಜೂನ್ 14ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ. ಆ ಮೂಲಕ ಕಲ್ಯಾಣ ಭಾಗದ ಆರೋಗ್ಯಕ್ಕೆ ಹೆಚ್ಚಿನ ಪ್ರೋತ್ಸಾಹ ಸಿಗಲಿದೆ ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ತಿಳಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಡಿಯಲ್ಲಿ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ ಮತ್ತು ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸುವುದು ಸೇರಿದಂತೆ ₹400 ಕೋಟಿ ವೆಚ್ಚದ ‘ಆರೋಗ್ಯ ಆವಿಷ್ಕಾರ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಪಿಎಚ್‌ಸಿ, ಸಮುದಾಯ ಆರೋಗ್ಯ ಕೇಂದ್ರಗಳ ಸೇವೆ ಬಲಗೊಂಡರೆ ಹಳ್ಳಿ ಜನರ ಆರೋಗ್ಯ ಸುಧಾರಣೆಯಾಗಲಿದೆ. ಈ ಹಿನ್ನಲೆಯಲ್ಲಿ ದೊಡ್ಡ ಮಟ್ಟದ ಆರೋಗ್ಯ ಯೋಜನೆ ರೂಪಿಸಲಾಗಿದೆ ಎಂದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ, ಕಲ್ಯಾಣ ಭಾಗದ ಸಚಿವರು, ಶಾಸಕರು, ಮುಖಂಡರು ಪಾಲ್ಗೊಳ್ಳುವರು. ಡಾ.ನಂಜುಂಡಪ್ಪ ವರದಿ ಅನ್ವಯ, ಆರೋಗ್ಯ, ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವಂತೆ ಶಿಫಾರಸು ಮಾಡಿದ್ದು, ಅದರನ್ವಯ ಸರ್ಕಾರ ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಪ್ರತಿಪಕ್ಷದವರು ಕಲ್ಯಾಣದ ಅಭಿವೃದ್ಧಿ ನೋಡಿ ಮಾತನಾಡಬೇಕು ಎಂದು ಹೇಳಿದರು.
24 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 7 ನಗರ ಆರೋಗ್ಯ ಕೇಂದ್ರಗಳು, 10 ಸಮುದಾಯ ಆರೋಗ್ಯ ಕೇಂದ್ರಗಳು, 4 ನಗರ ಸಮುದಾಯ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರವನ್ನು ಹಾಸಿಗೆಗಳಿಂದ 30ರಿಂದ 50 ಹಾಸಿಗೆಗೆ ಮೇಲ್ದರ್ಜೆಗೆ ಏರಿಸುವುದು. 25 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 100 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸುವುದು, ಸಮುದಾಯ ಆರೋಗ್ಯ ಕೇಂದ್ರವನ್ನು 30 ಹಾಸಿಗೆಗಳಿಂದ 100 ಹಾಸಿಗೆಗೆ ಮೇಲ್ದರ್ಜೆಗೆ ಏರಿಸುವುದು: 6 ತಾಲ್ಲೂಕು ಆರೋಗ್ಯ ಕೇಂದ್ರವನ್ನು 100 ಹಾಸಿಗೆಗಳಿಂದ 150 ಹಾಸಿಗೆಗೆ ಮೇಲ್ದರ್ಜೆಗೆ ಏರಿಸುವುದು, 9ಉಪ ವಿಭಾಗೀಯ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಹೇಳಿದರು.
ಈ ವೇಳೆ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ, ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ, ಕೆಕೆಆರ್‌ಡಿಬಿ ಕಾರ್ಯದರ್ಶಿ ಎಂ.ಸುಂದರೇಶ್ ಬಾಬು, ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.