ಯಾದಗಿರಿ: ‘ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಯುಟಿಯುಸಿ ಸಂಯೋಜಿತ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘಟನೆ ವತಿಯಿಂದ ಆಗಸ್ಟ್ 12ರಿಂದ 14ರವರೆಗೆ ಮೂರು ದಿನಗಳ ಅಹೋರಾತ್ರಿ ಧರಣಿ ನಡೆಸಲಾಗುವುದು’ ಎಂದು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ ಕೆ. ಸೋಮಶೇಖರ ತಿಳಿಸಿದರು.
‘ಅಂದು ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಮೂರು ದಿನ ಅಹೋರಾತ್ರಿ ಪ್ರತಿಭಟನೆ ಮಾಡುವರು. ಪ್ರತಿಭಟನೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹ 15 ಸಾವಿರ ನಿಶ್ಚಿತ ಗೌರವ ಧನ ನೀಡುವಂತೆ ಆಗ್ರಹಿಸಿ ಜನವರಿಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಮಾತುಕತೆ ನಡೆಸಿದ್ದ ಮುಖ್ಯಮಂತ್ರಿ, ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳು, ಮಾಸಿಕ ₹ 10 ಸಾವಿರ ಗೌರವ ಧನ ನೀಡುವುದಾಗಿ ಘೋಷಿಸಿದ್ದರು. ಆದರೆ, ಈ ಬಗ್ಗೆ ಇದುವರೆಗೂ ಆದೇಶ ಹೊರಡಿಸಿಲ್ಲ’ ಎಂದರು.
‘ಬಜೆಟ್‌ನಲ್ಲಿ ಘೋಷಿಸಿದಂತೆ ಎಲ್ಲಾ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ₹ 1,000 ಪ್ರೋತ್ಸಾಹ ಧನ ಹೆಚ್ಚಳ ಮಾಡಿದ್ದಾರೆ. ಆದರೆ, ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಹೆಚ್ಚಿಸದೆ ಅನ್ಯಾಯ ಮಾಡಿದ್ದಾರೆ. ಆಶಾ ಕಾರ್ಯಕರ್ತೆಯರಿಗೂ ಕೈಹಿಡಿದಿದ್ದೇವೆ ಎಂದು ಪ್ರಚಾರ ಪಡೆಯುತ್ತಿದ್ದಾರೆ’ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
‘ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಪಾಲು ಸೇರಿ ಮಾಸಿಕ ₹ 10 ಸಾವಿರ ಗೌರವ ಧನ ನೀಡಬೇಕು. ಆಶಾ ಕಾರ್ಯಕರ್ತೆಯರ ಕೆಲಸದ ವ್ಯಾಪ್ತಿಯನ್ನು ಹೆಚ್ಚಳ ಮಾಡುತ್ತಿರುವ ಪ್ರಕ್ರಿಯೆಯನ್ನು ಕೈಬಿಡಬೇಕು. ಕಾರ್ಯನಿರ್ವಹಣೆ ಮೌಲಮಾಪನದ ವ್ಯವಸ್ಥೆಯು ಅವೈಜ್ಞಾನಿಕವಾಗಿದ್ದು, ಅದನ್ನು ರದ್ದುಪಡಿಸಬೇಕು’ ಎಂದು ಆಗ್ರಹಿಸಿದರು.
‘ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರಿಸಬೇಕು. ಪಶ್ಚಿಮ ಬಂಗಾಳ ಮಾದರಿಯಲ್ಲಿ ಕರ್ನಾಟಕದ ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ₹ 5 ಲಕ್ಷ ಇಡಿಗಂಟು ನೀಡಬೇಕು. ನಗರ ಪ್ರದೇಶದ ಆಶಾ ಕಾರ್ಯಕರ್ತೆಯರಿಗೆ ಹೆಚ್ಚುರಿಯಾಗಿ ಮಾಸಿಕ ₹ 2,000 ಗೌರವ ಧನವೂ ಕೊಡಬೇಕು’ ಎಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾ ಅಧ್ಯಕ್ಷೆ ಡಿ.ಉಮಾದೇವಿ, ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ರಾಮಲಿಂಗಪ್ಪ ಬಿ.ಎನ್. ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.