ADVERTISEMENT

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 43 ಸಾವಿರ ಕ್ಯುಸೆಕ್ ನೀರು

ಹೆಚ್ಚಿದ ಒಳಹರಿವು; ಗ್ರಾಮಸ್ಥರಿಗೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2021, 13:48 IST
Last Updated 23 ಜೂನ್ 2021, 13:48 IST
ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 43 ಸಾವಿರ ಕ್ಯುಸೆಕ್ ನೀರು ಹರಿಸುತ್ತಿರುವುದು
ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 43 ಸಾವಿರ ಕ್ಯುಸೆಕ್ ನೀರು ಹರಿಸುತ್ತಿರುವುದು   

ಹುಣಸಗಿ: ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 42,960 ಸಾವಿರ ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ ಎಂದು ಡ್ಯಾಂ ಡಿವಿಜನ್ ಮೂಲಗಳು ತಿಳಿಸಿವೆ.

ಆಲಮಟ್ಟಿ ಲಾಲ್ ಬಹದ್ದೂರ ಶಾಸ್ತ್ರಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದರಿಂದಾಗಿ ಬುಧವಾರ ಬೆಳಿಗ್ಗೆ ಸಾಂಕೇತಿಕವಾಗಿ ಪೂಜೆ ಸಲ್ಲಿಸಿ ಕೃಷ್ಣಾ ನದಿಗೆ ನೀರು ಹರಿಸಲಾಗುತ್ತಿದೆ ಎಂದು ಡ್ಯಾಂ ಡಿವಿಜನ್ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ್ ನಾಯ್ಕೋಡಿ ತಿಳಿಸಿದರು.

ಬೆಳಿಗ್ಗೆ 10 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಯಿತು. ಆ ಬಳಿಕ ಹೆಚ್ಚಿನ ಪ್ರಮಾಣದಲ್ಲಿ 40 ಸಾವಿರಕ್ಕೂ ಹೆಚ್ಚು ಕ್ಯುಸೆಕ್‌ ಒಳಹರಿವು ದಾಖಲಾಗಿದ್ದರಿಂದಾಗಿ ಜಲಾಶಯದ ಮಟ್ಟ 489. 31 ಮೀ., ಕಾಯ್ದುಕೊಂಡು ಮಧ್ಯಾಹ್ನದ ಹೊತ್ತಿಗೆ 8 ಗೇಟ್‌ಗಳ ಮುಖಾಂತರ 42,960 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ ಎಂದು ತಿಳಿಸಿದರು.

ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ನದಿಗೆ ಹರಿಸುವ ಸಾಧ್ಯತೆ ಇರುವುದರಿಂದಾಗಿ ನದಿ ಪಾತ್ರದಲ್ಲಿರುವ ಜನರು ನದಿಯತ್ತ ತೆರಳಬಾರದು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ADVERTISEMENT

ತಾಲ್ಲೂಕಿನ ಜಂಗಿನಗಡ್ಡಿ, ಮೇಲಿನಗಡ್ಡಿ, ನಾರಾಯಣಪುರ, ಅಮ್ಮಾಪುರ, ಜುಮಾಲಪುರ, ಗೆದ್ದಲಮರಿ ಗ್ರಾಮಗಳಲ್ಲಿ ಈಗಾಗಲೇ ಡಂಗೂರ ಹಾಕಿಸಲಾಗಿದ್ದು, ತೀವ್ರ ನಿಗಾ ವಹಿಸಲಾಗಿದೆ ಎಂದು ಹುಣಸಗಿ ತಹಶೀಲ್ದಾರ್ ಮಹಾದೇವಪ್ಪಗೌಡ ಬಿರಾದಾರ ‘ಪ್ರಜಾವಾಣಿ‘ಗೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.