ADVERTISEMENT

ಪರೀಕ್ಷೆಯನ್ನು ಹಬ್ಬವೆಂದು ಸಂಭ್ರಮಿಸಿ: ಡಿಸಿ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2019, 16:08 IST
Last Updated 10 ಡಿಸೆಂಬರ್ 2019, 16:08 IST
ಯಾದಗಿರಿಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಉಚಿತ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ ಉದ್ಘಾಟಿಸಿದರು
ಯಾದಗಿರಿಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಉಚಿತ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ ಉದ್ಘಾಟಿಸಿದರು   

ಯಾದಗಿರಿ: ಜಿಲ್ಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ಉತ್ತಮ ಫಲಿತಾಂಶ ಪಡೆಯಬೇಕು. ಪರೀಕ್ಷೆ ಎಂದರೆ ಭಯಪಡದೆ ಹಬ್ಬವೆಂದು ಸಂಭ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಹೇಳಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಸ್ಟಿಸ್ ಶಿವರಾಜ ವಿ.ಪಾಟೀಲ ಫೌಂಡೇಷನ್ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ತಪ್ಪದೇ ಶಾಲೆಗೆ ಹಾಜರಾಗಬೇಕು. ಶಿಕ್ಷಕರು ಹೇಳುವ ಪಾಠಗಳನ್ನು ಚಿತ್ತವಿಟ್ಟು ಆಸಕ್ತಿಯಿಂದ ಕೇಳಬೇಕು. ಗುಂಪು ಚರ್ಚೆ ಮಾಡುವ ಮೂಲಕ ಪರೀಕ್ಷೆಗೆ ಸಿದ್ಧರಾಗಬೇಕು ಎಂದು ಸಲಹೆ ನೀಡಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾಶರ್ಮಾ ಮಾತನಾಡಿ, ಎಸ್ಸೆಸ್ಸೆಲ್ಸಿ ಹಂತವು ವಿದ್ಯಾರ್ಥಿ ಜೀವನದಲ್ಲಿ ಅತ್ಯಂತ ಮಹತ್ವದ ಘಟ್ಟವಾಗಿದೆ. ಕಠಿಣ ಪರಿಶ್ರಮ ಹಾಗೂ ತ್ಯಾಗದಿಂದ ಅಭ್ಯಾಸ ಮಾಡಿ ಜಿಲ್ಲೆಗೆ ಉತ್ತಮ ಫಲಿತಾಂಶ ತಂದುಕೊಡಬೇಕು ಎಂದು ಕಿವಿಮಾತು ಹೇಳಿದರು.

ಮನೋವೈದ್ಯ ಡಾ.ಸಿ.ಆರ್.ಚಂದ್ರಶೇಖರ್ ಅವರು ಯಶಸ್ಸಿನ ಗುಟ್ಟು ಬಗ್ಗೆ ಸುದೀರ್ಘ ಉಪನ್ಯಾಸ ನೀಡಿ, ಮಕ್ಕಳ ಮಾನಸಿಕ ಸಾಮರ್ಥ್ಯವನ್ನು ಸದೃಢಗೊಳಿಸಲು ಆತ್ಮಸ್ಥೈರ್ಯದ ಮಾತು ಹೇಳಿದರು. ಮಕ್ಕಳಲ್ಲಿರುವ ಪರೀಕ್ಷಾ ಭಯ ಎನ್ನುವ ಪ್ರಶ್ನೆಗಳಿಗೆ ಉತ್ತರಿಸಿ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಡಾ.ಸಿ.ಆರ್.ಚಂದ್ರಶೇಖರ್ ಅವರು ಬರೆದ ಪರೀಕ್ಷಾ ಸಂಭ್ರಮ ಪುಸ್ತಕ ಬಿಡುಗಡೆ ಮಾಡಲಾಯಿತು.

ಸರ್ವಜ್ಞ ಶಿಕ್ಷಣ ಸಂಸ್ಥೆಗಳ ಸಮೂಹ ಸಂಸ್ಥಾಪಕ ಪ್ರೊ.ಚನ್ನಾರೆಡ್ಡಿ ಪಾಟೀಲ, ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ಡಿ.ಎಂ.ಹೊಸಮನಿ, ಜಿಲ್ಲಾ ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಡಾ.ಮಲ್ಲಪ್ಪ ಕೆ.ಯರಗೋಳ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕನಕಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.