
ಯಾದಗಿರಿ: ‘ಮಕ್ಕಳನ್ನು ಕೂಲಿಗೆ ಕಳುಹಿಸುವ ಬದಲಿಗೆ ಶಾಲೆಗೆ ಕಳುಹಿಸುವ ಬಗ್ಗೆ ಪೋಷಕರು ಗಮನ ಹರಿಸಬೇಕು’ ಎಂದು ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಸೋಮವಾರ ಕಾರ್ಮಿಕ ಇಲಾಖೆಯ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಸಹಯೋಗದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಆಟೋ ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘2025-26ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಹಾಗೂ ಗಿರಿಜನ ಉಪಯೋಜನೆ (ಟಿಎಸ್‌ಪಿ)ಯಡಿ, ಪರಿಶಿಷ್ಟ ಸಮುದಾಯಗಳ ವಾಸ ಪ್ರದೇಶಗಳಲ್ಲಿ, ಮಕ್ಕಳನ್ನು ದುಡಿಮೆಗೆ ಕಳುಹಿಸದೆ ಶಾಲೆಗೆ ಕಳುಹಿಸುವ ಬಗ್ಗೆ, ಜಿಲ್ಲೆಯ 6 ತಾಲ್ಲೂಕಿನಲ್ಲಿ ಆಟೋ ಪ್ರಚಾರ ಪ್ರದರ್ಶಿಸಲಾಗಿದೆ’ ಎಂದರು.
ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ ಮಾತನಾಡಿ, ‘ನಮ್ಮ ಇಲಾಖೆಯಿಂದ ಜನ ಜಾಗೃತಿ, ಕಾನೂನು ಅರಿವು ನೆರವು ಕಾರ್ಯಕ್ರಮ, ಬೀದಿನಾಟಕ, ಆಟೋ ಪ್ರಚಾರ ಕಾರ್ಯಕ್ರಮಗಳನ್ನು ನಿರಂತರ ನಡೆಸಲಾಗುತ್ತಿದೆ. ಅದಾಗಿಯೂ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡರೆ, ಅಂತಹ ಅಂಗಡಿ ಮಾಲೀಕರ ವಿರುದ್ಧ ₹ 20 ಸಾವಿರ ದಿಂದ ₹ 50 ಸಾವಿರದವರೆಗೆ ದಂಡ ಮತ್ತು ಕನಿಷ್ಟ 6 ತಿಂಗಳಿಂದ ಗರಿಷ್ಠ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ಎರಡೂ ವಿಧಿಸಲಾಗುವುದು’ ಎಂದು ತಿಳಿಸಿದರು.
ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರು ರಿಯಾಜ್ ಪಟೇಲ್ ವರ್ಕನಳ್ಳಿ, ಕಾರ್ಮಿಕ ನಿರೀಕ್ಷಕಿ ಸಂಗೀತಾ ಹೊನ್ನೂರು, ವಕೀಲ ಬಿ.ಜಿ.ಪಾಟೀಲ, ಗುರುಪ್ರಸಾದ ವೈದ್ಯ, ಕಾರ್ಮಿಕ ಇಲಾಖೆ ಸಿಬ್ಬಂದಿಗಳಾದ ಬಾಲು ನಾಯಕ, ಶಿವರಾಜ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.