ADVERTISEMENT

ಬಾಲ್ಯ ವಿವಾಹ: ಎಫ್‌ಐಆರ್ ದಾಖಲಿಸಿ

ಬಾಲ್ಯವಿವಾಹ ಪ್ರೋತ್ಸಾಹಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2022, 16:24 IST
Last Updated 8 ಏಪ್ರಿಲ್ 2022, 16:24 IST
ಡಾ.ರಾಗಪ್ರಿಯಾ
ಡಾ.ರಾಗಪ್ರಿಯಾ   

ಯಾದಗಿರಿ: ಸಂಕಷ್ಟದಲ್ಲಿ ಇರುವ ಮಕ್ಕಳಿಗೆ ಕ್ರಮಬದ್ಧ ರೀತಿಯಲ್ಲಿ ಪಾಲನೆ ಮತ್ತು ಪೋಷಣೆ ಒದಗಿಸಿ, ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಬಾಲ ಕಾರ್ಮಿಕ, ಬಾಲ್ಯ ವಿವಾಹದಂಥ ಶಿಕ್ಷಾರ್ಹ ಅಪರಾಧಗಳು ಕಂಡು ಬಂದರೆ ತಕ್ಷಣ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಕಚೇರಿಯ ಸಭಾಂಗಣದಲ್ಲಿ ನಡೆದ ಮಕ್ಕಳ ರಕ್ಷಣಾ ಘಟಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಬಾಲ್ಯವಿವಾಹ ತಡೆಗಟ್ಟುವುದಕ್ಕೆ ಸಂಬಂಧಿಸಿದಂತೆ ಹಾಗೂ ಶಿಕ್ಷೆಯ ಕುರಿತು ಮಾಹಿತಿ ಫಲಕಗಳನ್ನು ಹಾಕಲು ಕ್ರಮ ಕೈಗೊಳ್ಳಲಾಗುವುದು. ಬಾಲ್ಯವಿವಾಹ ಪ್ರಕರಣ ಕಂಡುಬಂದಾಗ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ಬಾಲ್ಯ ವಿವಾಹ ನಿಷೇಧಾಧಿಕಾರಿ ಅದಕ್ಕೆ ತಡೆಯಾಜ್ಞೆ ತರಬೇಕು. ಪ್ರಕರಣ ಕಂಡುಬಂದಾಗ ಸಿಡಿಪಿಒಗಳು ತಕ್ಷಣವೇ ಮುಂದಾಳತ್ವ ವಹಿಸಿಕೊಂಡು ಸಂಬಂಧಿಸಿದ ಇಲಾಖೆಗಳ ಸಮನ್ವಯದ ಜೊತೆಗೆ ಬಾಲ್ಯವಿವಾಹ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.

ADVERTISEMENT

ಶಾಲೆಗಳ ಗೋಡೆಗಳ ಮೇಲೆ ಮಕ್ಕಳ ಸಹಾಯವಾಣಿ ಕುರಿತು ಅರಿವು ಮೂಡಿಸುವಂತಹ ಬರಹಗಳನ್ನು ಬರೆಸಬೇಕು. ಬಾಲಕಾರ್ಮಿಕ ಪದ್ಧತಿಗೆ ಕಡಿವಾಣ ಹಾಕಲು ಕೈಗಾರಿಕೆ ಮತ್ತು ಕಾರ್ಖಾನೆಗಳ ಮೇಲೆ ನಿಯಮಿತವಾಗಿ ದಾಳಿ ನಡೆಸಿ ಪರಿಶೀಲಿಸಬೇಕು ಎಂದರು.

ಮಕ್ಕಳ ಶೋಷಣೆ ತಪ್ಪಿಸುವುದು, ಮಕ್ಕಳ ಸ್ನೇಹಿ ವಾತಾವರಣ ನಿರ್ಮಿಸುವುದು ಹಾಗೂ ಕಾನೂನಿನ ಸಂಘರ್ಷಕ್ಕೆ ಒಳಪಟ್ಟ ಮತ್ತು ರಕ್ಷಣೆ, ಪೋಷಣೆ ಅಗತ್ಯವಿರುವ ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ಮಾಡುವುದು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಮಮತೆಯ ತೊಟ್ಟಿಲು: ಜಿಲ್ಲೆಯಲ್ಲಿ ಶಿಶು ಮಕ್ಕಳ ರಕ್ಷಣೆಗಾಗಿ ಸಾರ್ವಜನಿಕ ಜನದಟ್ಟಣೆ ಇರುವ ಸ್ಥಳಗಳಲ್ಲಿ, ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ, ರೈಲ್ವೆ ನಿಲ್ದಾಣಗಳಲ್ಲಿ ಮತ್ತು ಬಸ್ ನಿಲ್ದಾಣಗಳಲ್ಲಿ ಮಮತೆಯ ತೊಟ್ಟಿಲುಗಳನ್ನು ಇರಿಸಲಾಗಿದೆ. ಈ ಕುರಿತು ಅಧಿಕಾರಿಗಳು ಸಾರ್ವಜನಿಕರಿಗೆ ಅರಿವು ಜಾಗೃತಿ ಮೂಡಿಸಿ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಈ ವೇಳೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಾಹಿಲ್ ಅಹ್ಮದ್ ಕುನ್ನಿಬಾವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿ ಪ್ರಭಾಕರ್ ಕವಿತಾಳ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಬಿ.ಎಸ್.ರಾಠೋಡ್, ಮಕ್ಕಳ ರಕ್ಷಣಾ ಅಧಿಕಾರಿ ಮಲ್ಲಣ್ಣ ದೇಸಾಯಿ, ಡಿಎಚ್‌ಒ ಇಂದುಮತಿ ಪಾಟೀಲ, ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ ಹಾಗೂ ಜಿಲ್ಲಾ ಮಕ್ಕಳ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರುಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.