ADVERTISEMENT

ರೈತರನ್ನು ವಂಚಿಸುತ್ತಿರುವ ಸಮ್ಮಿಶ್ರ ಸರ್ಕಾರ: ಕೋಡಿಹಳ್ಳಿ ಚಂದ್ರಶೇಖರ್ ಆರೋಪ

'ಭೂ ತಿದ್ದುಪಡಿ ಕಾಯ್ದೆ ರೈತರಿಗೆ ಮರಣ ಶಾಸನ'

​ಪ್ರಜಾವಾಣಿ ವಾರ್ತೆ
Published 17 ಜೂನ್ 2019, 16:05 IST
Last Updated 17 ಜೂನ್ 2019, 16:05 IST
ಯಾದಗಿರಿಯ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಚೇರಿಯನ್ನು ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಉದ್ಘಾಟಿಸಿದರು
ಯಾದಗಿರಿಯ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಚೇರಿಯನ್ನು ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಉದ್ಘಾಟಿಸಿದರು   

ಯಾದಗಿರಿ: ‘ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಈಗ ರೈತರನ್ನು ವಂಚಿಸುತ್ತಿದ್ದಾರೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆರೋಪಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಕಚೇರಿ ಉದ್ಘಾಟಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ ರೈತ ಸಾಲ ₹1.20 ಸಾವಿರ ಕೋಟಿ ಇದೆ. ಆದರೆ, ಕುಮಾರಸ್ವಾಮಿ ಅವರು ₹1800 ಸಾವಿರ ಕೋಟಿ ಮನ್ನಾ ಮಾಡಲಾಗುತ್ತಿದೆ ಎಂದಿದ್ದಾರೆ. ಇದು ರೈತರಿಗೆ ಮಾಡುತ್ತಿರುವ ಅನ್ಯಾಯವಾಗಿದೆ’ ಎಂದರು.

‘ಕಳೆದ ಬಾರಿ ರಾಜ್ಯದಲ್ಲಿ ಅತಿವೃಷ್ಟಿಯಿಂದ 27000 ಸಾವಿರ ಹೆಕ್ಟೇರ್ ಬೆಳೆ ನಷ್ಟವಾಗಿದೆ. ಮುಂಗಾರು ವಿಫಲವಾಗಿ 27.32 ಲಕ್ಷ ಹೆಕ್ಟೇರ್, ಹಿಂಗಾರಿನಲ್ಲಿ 20.40 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ಬೆಳೆಯಲು ಸಾಧ್ಯವಾಗಿಲ್ಲ. ಈ ವರ್ಷವೂ ಬರಗಾಲ ಆವರಿಸಿದೆ. ಆದರೆ, ರೈತರಿಗೆ ಸಾಲ ತೀರಿಸಲು ನೋಟಿಸ್, ವಾರಂಟ್ ಜಾರಿ ಮಾಡುವುದರ ಮೂಲಕ ರೈತರನ್ನು ಶೋಷಿಸುತ್ತಿದ್ದಾರೆ’ ಎಂದು ಆರೋಪಿಸಿದರು.

ADVERTISEMENT

‘ಭೂ ಕಾಯ್ದೆ ಜಾರಿ ಮಾಡಿರುವುದು ರೈತರಿಗೆ ಮರಣ ಶಾಸನವಾಗಿದೆ. ಹೀಗಾಗಿ ಈ ಕಾಯ್ದೆಯನ್ನು ಹಿಂತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು.

ರಾಜ್ಯದ ಭೂಮಿಯನ್ನು ಭೂಗಳ್ಳರಿಗೆ ನೀಡಲು ಈ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಇದು ರೈತ ವಿರೋಧಿ ಕ್ರಮವಾಗಿದೆ. ಹೀಗಾಗಿ ರೈತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಆದರೆ ಇದಕ್ಕೆ ಸರ್ಕಾರ ಕಿವಿಗೊಟ್ಟಿಲ್ಲ. ಇದು ರೈತ ಪರ ಸರ್ಕಾರವಲ್ಲ. ಆದಾನಿ, ಅಂಬಾನಿ, ಜಿಂದಾಲ್, ದುಬೈ, ಸಿಂಗಾಪುರ ಉದ್ಯಮಿಗಳ ಪರವಾಗಿರುವ ಸರ್ಕಾರವಾಗಿದೆ’ ಎಂದು ಅಪಾದಿಸಿದರು.

ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಸಂಚಾಲಕ ಸುಭಾಷ ಐಕೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.