ADVERTISEMENT

ಹೋಂ ಕ್ವಾರಂಟೈನ್‌ ಉಲ್ಲಂಘಿಸಿದರೆ ದೂರು

ಸಾಂಸ್ಥಿಕ ಕ್ವಾರಂಟೈನ್ ನಂತರ ಹೋಂ ಕ್ವಾರಂಟೈನ್ ಕಡ್ಡಾಯ: ಆರ್‌ಸಿ ಡಾ.ಪ್ರಸಾದ್ ಸೂಚನೆ

​ಪ್ರಜಾವಾಣಿ ವಾರ್ತೆ
Published 29 ಮೇ 2020, 17:04 IST
Last Updated 29 ಮೇ 2020, 17:04 IST
ಕೋವಿಡ್-19 ತಡೆಗೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತ ಪರಿಶೀಲನಾ ಸಭೆಯಲ್ಲಿ ಪ್ರಾದೇಶಿಕ ಆಯುಕ್ತ ಡಾ.ಎನ್.ವಿ. ಪ್ರಸಾದ್ ಮಾತನಾಡಿದರು
ಕೋವಿಡ್-19 ತಡೆಗೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತ ಪರಿಶೀಲನಾ ಸಭೆಯಲ್ಲಿ ಪ್ರಾದೇಶಿಕ ಆಯುಕ್ತ ಡಾ.ಎನ್.ವಿ. ಪ್ರಸಾದ್ ಮಾತನಾಡಿದರು   

ಯಾದಗಿರಿ: ಸರ್ಕಾರದ ಹೊಸ ಮಾರ್ಗಸೂಚಿಯಂತೆ ಹೊರ ರಾಜ್ಯಗಳಿಂದ ಬಂದ ಕಾರ್ಮಿಕರಿಗೆ ನಿಗದಿತ ಅವಧಿಯವರೆಗೆ ಇನ್‍ಸ್ಟಿಟ್ಯೂಶನಲ್ (ಸಾಂಸ್ಥಿಕ) ಕ್ವಾರಂಟೈನ್ ನಂತರ ಹೋಂ ಕ್ವಾರಂಟೈನ್ ಕಡ್ಡಾಯವಾಗಿದೆ. ಇದಕ್ಕಾಗಿ ಜಿಲ್ಲಾಡಳಿತ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರಾದೇಶಿಕ ಆಯುಕ್ತ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಡಾ.ಎನ್.ವಿ. ಪ್ರಸಾದ್ ಅವರು ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕೋವಿಡ್-19 ತಡೆಗೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಮನೆಗೆ ಕಳುಹಿಸುವ ಮುನ್ನ ಕ್ವಾರಂಟೈನ್‍ಗೆ ಒಳಪಟ್ಟವರ ಕೈ ಮೇಲೆ ಸ್ಟ್ಯಾಂಪಿಂಗ್ ಮತ್ತು ಹೆಲ್ತ್ ಸ್ಕ್ರೀನಿಂಗ್ ಮಾಡಬೇಕು. ಈ ವೇಳೆ ಅವರ ವಿಳಾಸ, ಮೊಬೈಲ್ ಸಂಖ್ಯೆ ಸೇರಿದಂತೆ ಇನ್ನಿತರ ವಿವರಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಬೇಕು. ಮನೆಯಲ್ಲಿ ವೃದ್ಧರು, ಮಕ್ಕಳು ಮತ್ತು ಗರ್ಭಿಣಿಯರಿದ್ದು, ಹೋಂ ಕ್ವಾರಂಟೈನ್ ಬದಲು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರುವುದಾಗಿ ಮನವಿ ಮಾಡಿದಲ್ಲಿ 14 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿರಲು ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶನ ನೀಡಿದರು.

ADVERTISEMENT

ಹೋಂ ಕ್ವಾರಂಟೈನ್‍ನಲ್ಲಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸುವಂತಿಲ್ಲ. ಅದೇ ರೀತಿ ಹೋಂ ಕ್ವಾರಂಟೈನ್‍ನಲ್ಲಿರುವವರು ಮನೆ ಬಿಟ್ಟು ಹೊರಗಡೆ ಬರತಕ್ಕದ್ದಲ್ಲ. ಒಂದು ವೇಳೆ ಹೊರಗಡೆ ಬಂದರೆ ಪ್ರಕರಣ ದಾಖಲಿಸಿ. ಇವರ ಮೇಲೆ ತೀವ್ರ ನಿಗಾ ವಹಿಸಲು ಈಗಾಗಲೇ ಗ್ರಾಮ ಮಟ್ಟದಲ್ಲಿ ರಚಿಸಿರುವ ಟಾಸ್ಕ್ ಫೋರ್ಸ್ ಸಮಿತಿಗಳನ್ನು ಸಕ್ರಿಯಗೊಳಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ, ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾರಾಯಣಪ್ಪ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ದತ್ತಪ್ಪ ಕಲ್ಲೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.