ADVERTISEMENT

‘ಗ್ರಾಹಕರು ತಮ್ಮ ಹಕ್ಕುಗಳನ್ನು ತಿಳಿದುಕೊಳ್ಳಿ’

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2020, 9:28 IST
Last Updated 18 ಫೆಬ್ರುವರಿ 2020, 9:28 IST
ಗ್ರಾಹಕರ ದಿನಾಚರಣೆಯಲ್ಲಿ ಭಾಗವಹಿಸಿದ್ದ ಜನಸ್ತೋಮ
ಗ್ರಾಹಕರ ದಿನಾಚರಣೆಯಲ್ಲಿ ಭಾಗವಹಿಸಿದ್ದ ಜನಸ್ತೋಮ   

ಯಾದಗಿರಿ: ಗ್ರಾಹಕರು ತಾವು ಖರೀದಿಸಿದ ವಸ್ತುವಿನಲ್ಲಿ ಕಂಡುಬರುವ ಅಸಂಪೂರ್ಣತೆ, ಕಳಪೆ ಗುಣಮಟ್ಟ, ಕಡಿಮೆ ಪ್ರಮಾಣ, ಶುದ್ಧತೆಯಲ್ಲಿರುವ ಲೋಪ ಇದ್ದರೆ ಅದಕ್ಕೆ ಕಾರಣವಾಗಿರುವ ವ್ಯಕ್ತಿ ಮತ್ತು ಸಂಸ್ಥೆಯ ವಿರುದ್ಧ ಕಾನೂನಿನ ಮೂಲಕ ಸೂಕ್ತ ಪರಿಹಾರ ಪಡೆಯುವ ಹಕ್ಕು ಗ್ರಾಹಕರಿಗಿದೆ. ಗ್ರಾಹಕರು ತಮ್ಮ ಹಕ್ಕುಗಳನ್ನು ತಿಳಿದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸಲಹೆ ನೀಡಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಮತ್ತು ವಿವಿಧ ಇಲಾಖೆಗಳ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯಾವುದೇ ಒಂದು ವಸ್ತುವನ್ನು ಖರೀದಿಸುವ ಮುನ್ನ ಆ ವಸ್ತುವಿನ ಉತ್ಪದನಾ ದಿನಾಂಕ, ಅದರ ಮುಕ್ತಾಯ ದಿನಾಂಕ ಅರಿತುಕೊಳ್ಳಬೇಕು. ಇದರಿಂದ ವಸ್ತುವಿನ ಬಳಕೆಯಿಂದಾಗುವ ಅನಾಹುತವನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಅಲ್ಲದೆ, ವಸ್ತು ಖರೀದಿಸಿದ ರಸೀದಿ ಇದ್ದರೆ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ. ಇತ್ತೀಚಿಗೆ ಜಿಲ್ಲೆಯಲ್ಲಿ ನಕಲಿ ಬಿತ್ತನೆ ಬೀಜಗಳ ಮಾರಾಟದ ಬಗ್ಗೆ ದೂರುಗಳು ಬರುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ ಮಾತನಾಡಿ, ಪ್ರತಿಯೊಬ್ಬ ಗ್ರಾಹಕ ಯಾವುದೇ ವಸ್ತುವನ್ನು ಖರೀದಿಸುವಾಗ ಸರ್ಕಾರಕ್ಕೆ ತೆರಿಗೆ ಕಟ್ಟುತ್ತಾನೆ. ಗ್ರಾಹಕರು ವಸ್ತುವಿನ ಗುಣಮಟ್ಟ ಅರಿತುಕೊಳ್ಳುವುದು ಅಗತ್ಯವಿದೆ. ಬಹಳಷ್ಟು ಗ್ರಾಹಕರು ತಾವು ಖರೀದಿಸಿದ ವಸ್ತುವಿನ ದೋಷದ ಕುರಿತು ಪೊಲೀಸ್ ಇಲಾಖೆಗೆ ದೂರು ಸಲ್ಲಿಸಲು ಬರುತ್ತಾರೆ. ನಮ್ಮಲಿ ದೂರು ಸಲ್ಲಿಸುವುದರಿಂದ ಯಾವುದೇ ಪರಿಹಾರ ಸಿಗುವುದಿಲ್ಲ. ಕೇವಲ ಕ್ರಿಮಿನಲ್ ಪ್ರಕರಣ ದಾಖಲಿಸುತ್ತೇವೆ. ಆದರೆ, ದೂರನ್ನು ಜಿಲ್ಲಾ ಗ್ರಾಹಕರ ರಕ್ಷಣಾ ವೇದಿಕೆಯಲ್ಲಿ ಸಲ್ಲಿಸಿದರೆ, ಪರಿಹಾರ ಪಡೆಯುವ ಜೊತೆಗೆ ವಸ್ತುವಿನ ಮಾರಾಟಗಾರನಿಗೆ ಶಿಕ್ಷೆ ಮತ್ತು ದಂಡ ಕೊಡಿಸಬಹುದು ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೊಡೆ ’ಭಾರತೀಯ ಗ್ರಾಹಕರಿಗೆ ಮಹತ್ವದ ತಿರುವು: ಗ್ರಾಹಕ ರಕ್ಷಣಾ ಕಾಯ್ದೆ-2019’ ಕರಪತ್ರ ಬಿಡುಗಡೆ ಮಾಡಿ ಮಾತನಾಡಿದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಸಹಾಯಕ ರಿಜಿಸ್ಟ್ರಾರ್ ಮತ್ತು ಸಹಾಯಕ ಆಡಳಿತಾಧಿಕಾರಿ ಪಿ.ಎಸ್.ಅಮರದೀಪ್ವಿ ವಿಶೇಷ ಉಪನ್ಯಾಸ ನೀಡಿದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷ ನೆಲ್ದಾಳ ಶರಣಪ್ಪ, ಜಿಲ್ಲಾ ಗ್ರಾಹಕರ ಪರಿಹಾರ ವೇದಿಕೆಯ ಸದಸ್ಯ ಅಶೋಕಕುಮಾರ, ನಂದಾ ಈಶ್ವರಚಂದ್ರ ಕೊಲ್ಲುರ ಇದ್ದರು.ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಇಲಾಖೆ ಉಪ ನಿರ್ದೇಶಕ ದತ್ತಪ್ಪ ಕಲ್ಲೂರ ಸ್ವಾಗತಿಸಿದರು. ಸುಬಮ ಪದವಿ ಕಾಲೇಜಿನ ಉಪನ್ಯಾಸಕ ಗುರುಪ್ರಸಾದ ವೈದ್ಯ ನಿರೂಪಿಸಿದರು. ಆಹಾರ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.