ADVERTISEMENT

ಯಾದಗಿರಿ: ಕೋವಿಡ್‌ ಆಸ್ಪತ್ರೆಗಳ ಅವ್ಯವಸ್ಥೆ ಸರಿಪಡಿಸಿ

ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಅವ್ಯವಸ್ಥೆ ತಾಂಡವ: ತುನ್ನೂರ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 16:46 IST
Last Updated 7 ಆಗಸ್ಟ್ 2020, 16:46 IST
ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಒದಗಿಸುವಂತೆ ಆಗ್ರಹಿಸಿ ವಿಧಾನ ಪರಿಷತ್ ಮಾಜಿ ಸದಸ್ಯ ಚನ್ನಾರೆಡ್ಡಿ ಪಾಟೀಲ ತುನ್ನೂರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು
ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಒದಗಿಸುವಂತೆ ಆಗ್ರಹಿಸಿ ವಿಧಾನ ಪರಿಷತ್ ಮಾಜಿ ಸದಸ್ಯ ಚನ್ನಾರೆಡ್ಡಿ ಪಾಟೀಲ ತುನ್ನೂರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು   

ಯಾದಗಿರಿ: ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ ಮೂಲಸೌಕರ್ಯಗಳು ಇಲ್ಲದಿದ್ದರಿಂದ ಸೋಂಕಿತರು ಪರದಾಡುತ್ತಿದ್ದಾರೆ. ಹೀಗಾಗಿ ಕೋವಿಡ್‌ ಆಸ್ಪತ್ರೆಗಳಲ್ಲಿಸೂಕ್ತ ಸೌಲಭ್ಯಗಳನ್ನುಒದಗಿಸುವಂತೆ ಆಗ್ರಹಿಸಿ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್‌ ಜಿಲ್ಲಾ ಕೋವಿಡ್‌ ಟಾಸ್ಕ್ ಪೋರ್ಸ್‌ ಸಮಿತಿ ಅಧ್ಯಕ್ಷ ಚನ್ನಾರೆಡ್ಡಿ ಪಾಟೀಲ ತುನ್ನೂರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಶೌಚಾಲಯ ಸ್ವಚ್ಛತೆ ಇರುವುದಿಲ್ಲ. ಕಳಪೆ ಊಟ ನೀಡಲಾಗುತ್ತಿದೆ. ರೋಗಿಗಳಿಗೆ ದೂರದಿಂದಲೇ ಮಾತ್ರೆಗಳನ್ನು ಎಸೆಯುತ್ತಾರೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ. ಇದರಿಂದ ಜನಸಾಮಾನ್ಯರಿಗೆ ತೀವ್ರ ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ. ಶೀಘ್ರ ಈ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಇಲ್ಲದ ಕಾರಣ ಕೆಲವರು ದೂರ ಬೇರೆ ಜಿಲ್ಲೆಗಳಿಗೆ ತೆರಳಿ ಚಿಕಿತ್ಸೆ ಪಡೆಯುವ ಸ್ಥಿತಿ ನಿರ್ಮಾಣವಾಗಿದೆ. ಆದರೆ, ಬಡವರಿಗೆ ತೆರಳಲು ಆಗುವುದಿಲ್ಲ. ಇದರಿಂದ ಜಿಲ್ಲೆಯಲ್ಲಿರುವ ಎಲ್ಲ ಕೋವಿಡ್‌ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸಮರ್ಪಕ ಸೇವೆ ಸಿಗುವಂತೆ ಮಾಡಬೇಕು. ಅಲ್ಲದೆ ವೈದ್ಯರನ್ನು ಹೆಚ್ಚು ನಿಯೋಜನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT

ಜಿಲ್ಲಾಧಿಕಾರಿಎಂ.ಕೂರ್ಮಾರಾವ್‌ ಅವರು ಮನವಿ ಪತ್ರ ಸ್ವೀಕರಿಸಿ ಸೂಕ್ತ ಕ್ರಮದ ಭರವಸೆ ನೀಡಿದರು. ಈ ವೇಳೆ ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ರಜಾಕ್, ಉಪಾಧ್ಯಕ್ಷ ಅವಿನಾಶ ಜಗನ್ನಾಥ, ಅಂಬ್ರೇಶ ಜಾಕಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.