ADVERTISEMENT

ಅನಾವಶ್ಯಕವಾಗಿ ಓಡಾಡುವವರಿಗೆ ದಂಡ ವಿಧಿಸಿ: ಯಾದಗಿರಿ ಜಿಲ್ಲಾಧಿಕಾರಿ ಸೂಚನೆ

ಲಾಕ್‌ಡೌನ್ ನಿಯಮ ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಮೇ 2021, 14:02 IST
Last Updated 6 ಮೇ 2021, 14:02 IST
ಯಾದಗಿರಿ ಹೊಸ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಕಲ್ ಆಮ್ಲಜನಕ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಭೇಟಿ ನೀಡಿ ಪರಿಶೀಲಿಸಿದರು
ಯಾದಗಿರಿ ಹೊಸ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಕಲ್ ಆಮ್ಲಜನಕ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಭೇಟಿ ನೀಡಿ ಪರಿಶೀಲಿಸಿದರು   

ಯಾದಗಿರಿ: ಕೊರೊನಾ ಎರಡನೇ ಅಲೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಲಾಕ್‌ಡೌನ್‌ ನಿಯಮಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಪಾಲನೆಗೆ ಕ್ರಮ ಕೈಗೊಳ್ಳವಂತೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿ ಪಾಲನೆ ಕುರಿತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಗ್ರಾಮಮಟ್ಟದ ಕಾರ್ಯಪಡೆ ಸಮಿತಿ ಸಭೆಯನ್ನು ಕಾಲಕಾಲಕ್ಕೆ ಕರೆದು, ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಅನಾವಶ್ಯಕವಾಗಿ ಓಡಾಡುವ ಜನರಿಗೆ ದಂಡ ವಿಧಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ADVERTISEMENT

ಪ್ರತಿನಿತ್ಯ ಬೆಳಿಗ್ಗೆ 6 ಗಂಟೆಯಿಂದ 12 ಗಂಟೆಯವರೆಗೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಅಂಗಡಿ ಮಾಲೀಕರು ನಿಯಮ ಉಲ್ಲಂಘಿಸಿ ವ್ಯಾಪಾರ- ವಹಿವಾಟು ಮಾಡುತ್ತಿದ್ದರೆ ಅಂಥ ಅಂಗಡಿ ಮಾಲೀಕರ ವಿರುದ್ಧ ದಂಡದ ಜೊತೆಗೆ ಕಟ್ಟಿನ ಕ್ರಮಕೈಗೊಳ್ಳಬೇಕೆಂದು ಹೇಳಿದರು.

ವೈಯಕ್ತಿಕ ಸ್ವಚ್ಛತೆಗೆ ಜಾಗೃತಿ ಮೂಡಿಸಬೇಕು. ಕರಪತ್ರ, ಧ್ವನಿಮುದ್ರಿಕೆ, ಬ್ಯಾನರ್ ಇನ್ನಿತರ ವಿಧಾನಗಳ ಮೂಲಕ ರೋಗ ಲಕ್ಷಣಗಳು ಹಾಗೂ ಕೊರೊನಾ ಹರಡುವಿಕೆ ತಡೆಯುವ ಕುರಿತು ಜಿಲ್ಲೆಯ ಜನರಲ್ಲಿ ವ್ಯಾಪಾಕ ಜಾಗೃತಿ ಮೂಡಿಸಬೇಕು. ಈ ಮೂಲಕ ಕೊರೊನಾ ಎರಡನೇ ಅಲೆಯಿಂದ ಮುಕ್ತಿ ಪಡೆಯಬೇಕಾಗಿದೆ ಎಂದರು.

ಬೆಡ್, ಆಕ್ಸಿಜನ್ ವ್ಯವಸ್ಥೆಗೆ ಸೂಚನೆ:ಕೋವಿಡ್ ಎರಡನೇ ಅಲೆ ಸೋಂಕು ರಾಜ್ಯದಲ್ಲಿ ವೇಗವಾಗಿ ಹರಡುತ್ತಿದೆ. ಹಲವಾರು ಮಂದಿ ಈ ಸೋಂಕಿಗೆ ಬಲಿಯಾಗುತ್ತಿದ್ದು, ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಅವರು ಸಂಬಂಧಿಸಿದ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ ಮಾತನಾಡಿದರು.

ಕೋವಿಡ್- 19 ಸೋಂಕನ್ನು ತಡೆಗಟ್ಟಲು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಮಾಸ್ಕ್, ಸ್ಯಾನಿಟೈಸರ್ ಬಳಕೆ ಹಾಗೂ ಅಂತರ ಕಾಯ್ದು ಕೊಳ್ಳುವನಿಟ್ಟಿನಲ್ಲಿ ಅಧಿಕಾರಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಅಧಿಕಾರಿಗಳು ಎಚ್ಚರವಹಿಸಬೇಕು. ಒಂದು ವೇಳೆ ತೊಂದರೆ ಕಂಡುಬಂದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತಂದು ಕೂಡಲೇ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಆಮ್ಲಜನಕ ಘಟಕಕ್ಕೆ ಭೇಟಿ: ನಗರದ ಹೊಸ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಕಲ್ ಆಮ್ಲಜನಕ ಘಟಕಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ ಇಲ್ಲಿಯವರೆಗೆ ಆಕ್ಸಿಜನ್ ಕೊರತೆ ಇಲ್ಲ ಎಂದರು.

ಇದೇ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ, ಹಿರಿಯ ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲೆಯ ತಹಶೀಲ್ದಾರರು, ನಗರಸಭೆಯ ಪೌರಾಯುಕ್ತರು, ಪುರಸಭೆಗಳ ಮುಖ್ಯಾಧಿಕಾರಿ ಸೇರಿದಂತೆ ಸಂಬಂಧಿಸಿದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.