ADVERTISEMENT

ಗಿರಿಜನ ಉಪಯೋಜನೆ ಪ್ರಗತಿ ಸಾಧಿಸಲು ಸೂಚನೆ

ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ; ಅನುದಾನ ಸಮರ್ಪಕವಾಗಿ ಬಳಸಿ; ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 24 ಜೂನ್ 2022, 3:44 IST
Last Updated 24 ಜೂನ್ 2022, 3:44 IST
ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆ ಅಡಿಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು
ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆ ಅಡಿಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು   

ಯಾದಗಿರಿ: ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆ ಅಡಿ ಅನುದಾನ ಸಮರ್ಪಕ ಬಳಕೆಯಾಗುವ ಜೊತೆಗೆ ಗುರಿಗೆ ತಕ್ಕಂತೆ ಸೂಕ್ತ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಸ್ನೇಹಲ್.ಆರ್ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆ ಅಡಿಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆ ಅಡಿ ಸರ್ಕಾರ ಮಂಜೂರು ಮಾಡಿರುವ ಅನುದಾನ ಸಮರ್ಪಕವಾಗಿ ಕೈಗೊಳ್ಳಬೇಕು. ಕಾಮಗಾರಿ ಕೈಗೊಳ್ಳದ ಹಾಗೂ ಫಲಾನುಭವಿಗಳಿಗೆ ಸಕಾಲಕ್ಕೆ ಈ ಯೋಜನೆಯಡಿ ಸೌಲಭ್ಯ ಒದಗಿಸದ ಹಾಗೂ ಸೂಕ್ತ ಪ್ರಗತಿ ಸಾಧಿಸಲು ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ADVERTISEMENT

ಸಾರ್ವಜನಿಕರ ಅನುಕೂಲಕ್ಕಾಗಿ ಜಾರಿಗೊಳಿಸಿದ ವಿವಿಧ ಯೋಜನೆ ಹಾಗೂ ಕಾರ್ಯಕ್ರಮಗಳ ಲಾಭ ಅವರಿಗೆ ಸಕಾಲಕ್ಕೆ ದೊರಕಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಅತ್ಯಂತ ಬಡ ಜನತೆಗಾಗಿ ಇರುವಂಥ ಈ ಕಾರ್ಯಕ್ರಮಗಳ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಪ್ರಥಮ ಆದ್ಯತೆ ಹಾಗೂ ಫಲಾನುಭವಿಗಳಿಗೆ ಸಕಾಲಕ್ಕೆ ಆಯ್ಕೆಮಾಡಿ ವಿವಿಧ ಸೌಲಭ್ಯಗಳನ್ನು ಇಲಾಖೆವಾರು ದೊರಕಿಸಿಕೊಡಬೇಕೆಂದು ಸೂಚಿಸಿದರು.

ಯಾವುದೇ ಪರಿಸ್ಥಿತಿಯಲ್ಲಿ ಅನುದಾನ ಲ್ಯಾಪ್ಸ್ ಆಗಿ ಮರಳಿ ಹೋಗದಂತೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಿದ ಅವರು, ವಿವಿಧ ಯೋಜನೆಗಳಡಿ ಫಲಾನುಭವಿ ಆಧಾರಿತ ಕಾರ್ಯಕ್ರಮಗಳಡಿ ಪ್ರಥಮ ತ್ರೈಮಾಸಿಕದಲ್ಲಿ ಕ್ರಿಯಾ ಯೋಜನೆ ರೂಪಿಸಬೇಕು. ಎರಡನೇ ತ್ರೈಮಾಸಿಕದಲ್ಲಿ ಯೋಜನೆಯ ಆರಂಭ, ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು, ಮೂರನೇ ತ್ರೈಮಾಸಿಕದಲ್ಲಿ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ನಾಲ್ಕನೇ ತ್ರೈಮಾಸಿಕದಲ್ಲಿ ಯೋಜನೆ ಪೂರ್ಣಗೊಳಿಸಿ ಸಂಪೂರ್ಣ ಅನುದಾನ ಬಳಕೆಯಾಗುವಂತೆ ನೋಡಿಕೊಂಡು ಎಲ್ಲ ಬಿಲ್ ಗಳ ಕ್ಲಿಯರನ್ಸ್ ಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೃಷಿ ಇಲಾಖೆ ವ್ಯಾಪ್ತಿಯಲ್ಲಿ ರೈತರ ಸಬಲೀಕರಣಕ್ಕೆ ಹೆಚ್ಚಿನ ಗಮನ ನೀಡಬೇಕು. ನರೇಗಾ ಯೋಜನೆಯಡಿ ಅನುದಾನ ಬಳಸಲು ಪ್ರಮಾಣಿಕವಾಗಿ ಪ್ರಯತ್ನಿಸಬೇಕು. ಸಭೆಗೆ ಗೈರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸುವಂತೆ ಸೂಚನೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಅಂಗನವಾಡಿಗಳಲ್ಲಿ ಮಕ್ಕಳ ಸಂಖ್ಯೆ, ಕಿಶೋರಿ ಹಾಗೂ ಅಪೌಷ್ಟಿಕ ಮಕ್ಕಳ ಸಂಖ್ಯೆ ಹಾಗೂ ಗರ್ಭಿಣಿ, ಬಾಣಂತಿಯರ ಸಮಗ್ರ ಅಂಕಿ ಅಂಶಗಳನ್ನು ಸಂಗ್ರಹಿಸಬೇಕು. ಗುರಿಗೆ ತಕ್ಕಂತೆ ಸಾಧನೆ ಮಾಡಲು ಸೂಚನೆ ನೀಡಿದರು.

ಈ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮರೇಶ ನಾಯ್ಕ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚನ್ನಬಸವ ಎಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಭಾಕರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಮಚಂದ್ರ ಗೋಳಾ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಘವೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ, ಕೈಗಾರಿಕ ಕೇಂದ್ರದ ಉಪನಿರ್ದೇಶಕಿ ರೇಖಾ ಮ್ಯಾಗೇರಿ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ರಾಜು ದೇಶಮುಖ್, ಬಾಲಕಾರ್ಮಿಕ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್, ನಗರಾಭಿವೃದ್ಧಿ ಕೋಶ ಕಾರ್ಯಪಾಲಕ ಎಂಜಿನಿಯರ್‌ ಬಕ್ಕಪ್ಪ ಸೇರಿದಂತೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.