ADVERTISEMENT

13 ರಿಂದ ಡಿಪ್ಲೊಮಾ,ಪಿಜಿ ಸಿಇಟಿ ಪರೀಕ್ಷೆ: ಜಿಲ್ಲಾಧಿಕಾರಿ ಮಾಹಿತಿ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2020, 16:39 IST
Last Updated 7 ಅಕ್ಟೋಬರ್ 2020, 16:39 IST
ಡಾ. ರಾಗಪ್ರಿಯಾ ಆರ್.,
ಡಾ. ರಾಗಪ್ರಿಯಾ ಆರ್.,   

ಯಾದಗಿರಿ: ಜಿಲ್ಲೆಯಲ್ಲಿ ಅಕ್ಟೋಬರ್ 13 ರಿಂದ 14ರ ವರೆಗೆ ನಡೆಯಲಿರುವ ಡಿಪ್ಲೊಮಾ, ಪಿಜಿ ಸಿಇಟಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್., ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪಿಜಿ ಸಿಇಟಿ ಪರೀಕ್ಷೆಗಳ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಸ್ಯಾನಿಟೈಜ್ ಮಾಡಬೇಕು. ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೂ ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡಿಸಬೇಕು. ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ತಿಳಿಸಿದರು.

ಪರೀಕ್ಷೆಗೆ ಜಿಲ್ಲೆಯಲ್ಲಿ 90 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದು, ಪರೀಕ್ಷಾ ಪ್ರಾಧಿಕಾರದಿಂದ ಈಗಾಗಲೇ ಹಾಜರಾಗುವ ಎಲ್ಲಾ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಆನ್‍ಲೈನ್ ಮೂಲಕ ಪಡೆದು ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ. ಪರೀಕ್ಷಾ ಕೇಂದ್ರದಲ್ಲಿ ಆಸನ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಇತರೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದರು.

ADVERTISEMENT

ಪ್ರತಿ ಪರೀಕ್ಷಾ ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷಾ ಆಸನಗಳನ್ನು ಮೀಸಲಿರಿಸಬೇಕು. ಪರೀಕ್ಷಾ ಸಮಯದಲ್ಲಿ ಸೋಂಕಿತರು ಪತ್ತೆಯಾದರೆ ಅವರಿಗೆ ಪ್ರತ್ಯೇಕ ಕೋಣೆಯನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು ಹಾಗೂ ಪರೀಕ್ಷಾ ಕೇಂದ್ರದಲ್ಲಿ ಬಂದೋಬಸ್ತ್‌ಗಾಗಿ ಪೊಲೀಸ್ ಸಿಬ್ಬಂದಿ ನಿಯೋಜಿಸಲು ನಿರ್ದೇಶನ ನೀಡಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಂಕರಗೌಡ ಎಸ್.ಸೋಮನಾಳ, ತಾಲ್ಲೂಕು ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ ಹಿಳ್ಳಿ, ಜಿಲ್ಲಾ ಖಜಾನಾಧಿಕಾರಿ ಮಾಳಿಂಗರಾಯ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಇದ್ದರು.

ಪರೀಕ್ಷಾ ಕೇಂದ್ರದ ವಿವರ: ನಿಗದಿ ಪಡಿಸಿದ ದಿನಾಂಕಗಳ ಬೆಳಿಗ್ಗೆ ಮತ್ತು ಮಧ್ಯಾಹ್ನದ 2 ಅವಧಿಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಜಿಲ್ಲೆಯ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಪರೀಕ್ಷೆಗೆ ಒಂದು ಪರೀಕ್ಷಾ ಕೇಂದ್ರವನ್ನು ರಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.