ADVERTISEMENT

ಭತ್ತ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2020, 16:18 IST
Last Updated 9 ಡಿಸೆಂಬರ್ 2020, 16:18 IST
ಯಾದಗಿರಿಯ ಎಪಿಎಂಸಿಯಲ್ಲಿ ಸ್ಥಾಪಿಸಲಾಗಿರುವ ಭತ್ತ ಖರೀದಿಯ ನೋಂದಣಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್., ಭೇಟಿ ನೀಡಿ ಪರಿಶೀಲಿಸಿದರು
ಯಾದಗಿರಿಯ ಎಪಿಎಂಸಿಯಲ್ಲಿ ಸ್ಥಾಪಿಸಲಾಗಿರುವ ಭತ್ತ ಖರೀದಿಯ ನೋಂದಣಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್., ಭೇಟಿ ನೀಡಿ ಪರಿಶೀಲಿಸಿದರು   

ಯಾದಗಿರಿ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಸ್ಥಾಪಿಸಲಾಗಿರುವ ಭತ್ತ ಖರೀದಿಯ ನೋಂದಣಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್., ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲೆಯ ರೈತರು ಬೆಳೆದ ಭತ್ತಕ್ಕೆ ಸರ್ಕಾರದಿಂದ ಬೆಂಬಲ ಬೆಲೆ ನೀಡಿ ಖರೀದಿಸಲು ಅನುಕೂಲವಾಗುವಂತೆ ಭತ್ತ ಖರೀದಿಯ ಒಟ್ಟು 5 ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದೆ. ರೈತರು ಈ ಕೇಂದ್ರಗಳಿಗೆ ತರುವ ಭತ್ತದ ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆಗಳು ಎದುರಾಗಬಾರದು. ಸಂಬಂಧಿಸಿದ ಅಧಿಕಾರಿಗಳು ಈ ದಿಸೆಯಲ್ಲಿ ಹೆಚ್ಚಿನ ಮುತುವರ್ಜಿ ವಹಿಸಬೇಕು. ಒಂದು ವೇಳೆ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದರೆ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ರೈತರು ಪಹಣಿಯಲ್ಲಿ ಭತ್ತದ ಬೆಳೆಯ ವಿವರ ಲಭ್ಯವಿಲ್ಲ ಎಂಬ ಕಾರಣಕ್ಕೆ ಹೆಚ್ಚಿನ ರೈತರಿಂದ ಭತ್ತ ಖರೀದಿಗೆ ನೋಂದಣಿ ಸಾಧ್ಯವಾಗುತ್ತಿಲ್ಲ. ಹೆಚ್ಚಿನ ರೈತರ ನೋಂದಣಿಗೆ ಅವಕಾಶ ಮಾಡಿಕೊಡುವಂತೆ ಸ್ಥಳದಲ್ಲಿದ್ದ ರೈತರು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಪಹಣಿಯಲ್ಲಿ ಕಂಡುಬಂದ ದೋಷವನ್ನು ಪರಿಹರಿಸಲು ಕೂಡಲೇ ಕ್ರಮವಹಿಸುವಂತೆ ಸ್ಥಳದಲ್ಲಿಯೇ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮೊಬೈಲ್ ಮೂಲಕವೇ ತಿಳಿಸಿದರು.

ಡಿ.8ರ ಕೊನೆಯಲ್ಲಿ ಯಾದಗಿರಿ ಭತ್ತ ಖರೀದಿ ಕೇಂದ್ರದಲ್ಲಿ 31, ಹುಣಸಗಿ 58, ಸುರಪುರ 40, ನಾಯ್ಕಲ್ 10 ಮಂದಿ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.