ADVERTISEMENT

ಧರ್ಮದ ಆಧಾರದ ಮೇಲೆ ರಾಜಕೀಯ ಮಾಡಬೇಡಿ: ವಿಶ್ವನಾಥ ಸಿರವಾರ

​ಪ್ರಜಾವಾಣಿ ವಾರ್ತೆ
Published 23 ಜನವರಿ 2020, 16:08 IST
Last Updated 23 ಜನವರಿ 2020, 16:08 IST
ವಿಶ್ವನಾಥ ಸಿರವಾರ
ವಿಶ್ವನಾಥ ಸಿರವಾರ   

ಯಾದಗಿರಿ: ಧರ್ಮದ ಆಧಾರದ ಮೇಲೆ ರಾಜಕೀಯ ಮಾಡಬೇಡಿ ಎಂದು ಜೆಡಿಎಸ್ ನಗರ ಘಟಕ ಅಧ್ಯಕ್ಷ ವಿಶ್ವನಾಥ ಸಿರವಾರ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯೂ ಆದ ಶಾಸಕ ಎಂ.ಪಿ.ರೇಣುಕಾಚಾರ್ಯರಿಗೆ ಎಚ್ಚರಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ತಮ್ಮ ಕ್ಷೇತ್ರ ಹೊನ್ನಾಳಿಯನ್ನು ಕೇಸರಿ ಕರಣಗೊಳಿಸುವುದು, ಮುಸ್ಲಿಮರ ಅನುದಾನಕ್ಕೆ ಕತ್ತರಿ ಹಾಕುವ ಹೇಳಿಕೆಗಳು ಸರಿಯಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜನರ ಮತ್ತು ಸಮುದಾಯಗಳ ಅಭಿವೃದ್ಧಿಗೆ ಅನುದಾನ ಮೀಸಲಿಡುತ್ತವೆ. ಅದನ್ನು ರಾಜಕೀಯ ಮಾಡಲೋಸುಗ ಧರ್ಮ ಆಧಾರಿತವಾಗಿ ಬಳಕೆ ಮಾಡಿಕೊಳ್ಳಬಾರದು ಎಂದು ಹೇಳಿದ್ದಾರೆ.

ಮಸೀದಿಗಳಲ್ಲಿ ಮದ್ದು ಗುಂಡುಗಳ ಸಂಗ್ರಹಿಸಲಾಗುತ್ತಿದೆ ಎಂಬ ಆರೋಪ ಮಾಡುವ ಮೂಲಕ ಒಂದು ಸಮುದಾಯವನ್ನು ಅವಹೇಳನ ಮಾಡಲಾಗುತ್ತಿದೆ. ಸಮಾಜಘಾತುಕ ಶಕ್ತಿಗಳ ಮಟ್ಟ ಹಾಕಲು ಪೊಲೀಸ್ ಇಲಾಖೆ ಇದೆ. ಅದನ್ನು ಒಂದು ಸಮುದಾಯವನ್ನು ವಿರೋಧಿಸುವ ಉದ್ದೇಶದಿಂದ ಬಳಸಿಕೊಳ್ಳಬಾರದು ಎಂದು ತಿಳಿಸಿದ್ದಾರೆ.

ADVERTISEMENT

ಪ್ರಧಾನ ಮಂತ್ರಿ ನರೇಂದ್ರ ಮೋದಿವಯರು ಒಂದೆಡೆ ಸಬ್ಕಾ ಸಾಥ್ ಸಬ್ಕಾ ವಿಕಾಸ್‌ ಎಂದು ಹೇಳುತ್ತಾರೆ. ಕೇಂದ್ರ ಗೃಹ ಸಚಿವರು ಸಿಎಎ ಕಾಯ್ದೆಯಿಂದ ಮುಸ್ಲಿಂ ಸಮುದಾಯದವರಿಗೆ ಯಾವುದೇ ಸಮಸ್ಯೆಯಿಲ್ಲ ಎನ್ನುತ್ತಾರೆ. ಆದರೆ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯೂ ಆದ ಶಾಸಕ ರೇಣುಕಾಚಾರ್ಯ ಈ ರೀತಿ ಹೇಳಿಕೆ ನೀಡುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ.

ರೇಣುಕಾಚಾರ್ಯ ಅವರ ಇತಿಹಾಸ ಎಂತಹದ್ದು ಎನ್ನುವುದು ರಾಜ್ಯದ ಜನರಿಗೆ ಗೊತ್ತಿದೆ. ಇಂಥವರ ಬಾಯಿಂದ ಮತ್ತೆಂತಹ ಮಾತು ಬರಲು ಸಾಧ್ಯ. ಮೊದಲು ಅವರು ತಮ್ಮ ವ್ಯಕ್ತಿತ್ವವನ್ನು ಅಭಿವೃದ್ಧಿ ಪಡಿಸಿಕೊಳ್ಳಲಿ. ನಂತರ ದೇಶದ ಅಭಿವೃದ್ಧಿ ಬಗ್ಗೆ ಮಾತಾಡಲಿ ಎಂದು ಕಿವಿಮಾತು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.