ADVERTISEMENT

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು: ಡಾ.ರಾಗಪ್ರಿಯಾ

ಶಹಾಪುರದ ಫಿಲ್ಟರ್ ಬೆಡ್ ಕೆರೆಗೆ ಭೇಟಿ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2021, 2:55 IST
Last Updated 3 ಮಾರ್ಚ್ 2021, 2:55 IST
ಶಹಾಪುರ ನಗರಸಭೆ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಆರ್.ರಾಗಪ್ರಿಯಾ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಯಿತು
ಶಹಾಪುರ ನಗರಸಭೆ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಆರ್.ರಾಗಪ್ರಿಯಾ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಯಿತು   

ಶಹಾಪುರ: ‘ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಡಾ.ಆರ್.ರಾಗಪ್ರಿಯಾ ತಿಳಿಸಿದರು.

ಇಲ್ಲಿನ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ನಂತರ ಅವರು ಫಿಲ್ಟರ್ ಬೆಡ್ ಕೆರೆ, ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ನಂತರ ಮಾಹಿತಿ ನೀಡಿದರು.

‘ಫಿಲ್ಟರ್ ಬೆಡ್ ಕೆರೆಯಲ್ಲಿ ನೀರು ಶುದ್ಧೀಕರಣ ಘಟಕ ಹಾಗೂ ಪೈಪ್‌ಲೈನ್‌ ವ್ಯವಸ್ಥೆಗೆ ನಗರ ನೀರು ಸರಬರಾಜು ಮಂಡಳಿ ಅನುದಾನಕ್ಕೆ ಕಾಯಲಾಗುತ್ತಿದೆ. ಅನುದಾನ ಬಿಡುಗಡೆಯಾದ ತಕ್ಷಣ ಕೆಲಸ ಆರಂಭಿಸಲಾಗುವುದು. ಕೆರೆಯಲ್ಲಿ ಹೆಚ್ಚು ನೀರು ಸಂಗ್ರಹಿಸಿ ಕುಡಿಯುವ ನೀರು ಪೂರೈಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಹೇಳಿದರು.

ADVERTISEMENT

‘ಅಧಿಕಾರಿಗಳು ಸಭೆಗೆ ಸ್ಪಷ್ಟ ಮಾಹಿತಿ ನೀಡಿದರೆ ಕ್ರಿಯಾ ಯೋಜನೆ ಸಿದ್ಧಪಡಿಸಲು ಅನುಕೂಲವಾಗುತ್ತದೆ. ವಾಜಪೇಯಿ, ಇಂದಿರಾ ಆವಾಜ್, ಆಶ್ರಯ ಯೋಜನೆ, ನಗರೋತ್ಥಾನ-3 ಹಂತ, ಪೌರ ಕಾರ್ಮಿಕರ ಗೃಹ ಭಾಗ್ಯ ಯೋಜನೆ ಸೇರಿ ಇನ್ನಿತರ ಕಾಮಗಾರಿಗಳು ಪ್ರಗತಿ ಕಂಡಿವೆ. ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತು ನಿಖರವಾದ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೆ, ನಗರದ ಎಲ್ಲ ಅಂಗಡಿ ಮುಂಗಟ್ಟುಗಳಿಂದ ಕಡ್ಡಾಯವಾಗಿ ತೆರಿಗೆ ವಸೂಲಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ತಿಳಿಸಿದರು.

ಘನತ್ಯಾಜ್ಯ ವಿಲೇವಾರಿ ಘಟಕ: ನಗರದ ಹೊರವಲಯದಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ₹1.30 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಸಿವಿಲ್ ಕಾಮಗಾರಿ ಪರಿಶೀಲಿಸಿದರು.

ಅಗತ್ಯವೆನಿಸಿದರೆ ಹೊರಗುತ್ತಿಗೆ ಆಧಾರದ ಮೇಲೆ ಪೌರಕಾರ್ಮಿಕರನ್ನು ನೇಮಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ನಗರ ಯೋಜನಾ ಪ್ರಭಾರ ನಿರ್ದೇಶಕ ಪ್ರಕಾಶ ರಜಪೂತ, ಪೌರಾಯುಕ್ತ ರಮೇಶ ಪಟ್ಟೆದಾರ, ಎಂಜಿನಿಯರ್‌ಗಳಾದ ಬಕ್ಕಪ್ಪ ಹಾಗೂ ಶರಣಪ್ಪ ಪೂಜಾರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.