ADVERTISEMENT

12 ಗ್ರಾಮಗಳಿಗೆ ಪ್ರವಾಹ: ಮುನ್ನೆಚ್ಚರಿಕೆ ವಹಿಸಿ

ಪ್ರವಾಹ ಸಂದರ್ಭ ಎದುರಿಸಲು ಸನ್ನದ್ಧರಾಗಿರಿ; ಅಧಿಕಾರಿಗಳಿಗೆ ಡಿಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2020, 3:50 IST
Last Updated 18 ಅಕ್ಟೋಬರ್ 2020, 3:50 IST
ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ತುರ್ತು ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಮಾತನಾಡಿದರು
ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ತುರ್ತು ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಮಾತನಾಡಿದರು   

ಯಾದಗಿರಿ: ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಸೊನ್ನ ಬ್ಯಾರೇಜ್‍ನಿಂದ ಸುಮಾರು 8 ಲಕ್ಷ ಕ್ಯುಸೆಕ್ ನೀರನ್ನು ಭೀಮಾ ನದಿಗೆ ಹರಿಸಲಾಗುತ್ತಿದೆ. ಹೀಗಾಗಿ ಜಿಲ್ಲೆಯ ನದಿ ದಂಡೆಯ ಗ್ರಾಮಗಳ ಜನ ಹಾಗೂ ಜಾನುವಾರುಗಳ ರಕ್ಷಣೆಗೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಅವರು ತಹಶೀಲ್ದಾರರು ಹಾಗೂ ನೋಡಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ತುರ್ತು ಸಭೆಯಲ್ಲಿ ಮಾತನಾಡಿದ ಅವರು,ಭೀಮಾ ನದಿಗೆ 8 ಲಕ್ಷ ಕ್ಯುಸೆಕ್ ನೀರು ಬಿಡುತ್ತಿರುವ ಕಾರಣ ನದಿ ದಂಡೆಯ ಗ್ರಾಮಗಳಲ್ಲಿ ಪ್ರವಾಹ ಎದುರಾಗಲಿದೆ. ಜನ ಹಾಗೂ ಜಾನುವಾರುಗಳನ್ನು ಕೂಡಲೇ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಬೇಕಿದೆ. ನೋಡಲ್ ಅಧಿಕಾರಿಗಳು ಹಾಗೂ ಸಂಬಂಧಿಸಿದ ತಹಶೀಲ್ದಾರರು ತಕ್ಷಣ ಕಾರ್ಯಪ್ರವೃತ್ತರಾಗಬೇಕು. ಪ್ರವಾಹ ಸಂಭವಿಸಬಹುದಾದ ಗ್ರಾಮಗಳ ಗ್ರಾಮಸ್ಥರನ್ನು ಸ್ಥಳಾಂತರಿಸಲು ಅನುಕೂಲವಾಗುವಂತೆ ವಾಹನಗಳನ್ನು ಕಾಯ್ದಿರಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಪ್ರವಾಹದಿಂದ ಸಂತ್ರಸ್ತರಾದವರಿಗೆ ಜಿಲ್ಲಾಡಳಿತದಿಂದ 14 ಕಾಳಜಿ ಕೇಂದ್ರಗಳನ್ನು ವ್ಯವಸ್ಥೆ ಮಾಡಿದೆ. ಅಲ್ಲಿ ಅವರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿಕೊಡಬೇಕು. ಯಾವುದೇ ಕಾರಣಕ್ಕೂ ವಿದ್ಯುತ್ ಸಂಪರ್ಕ ಕಡಿತಗೊಳ್ಳಬಾರದು. ಅವರ ಆರೋಗ್ಯ ತಪಾಸಣೆಗೆ ವೈದ್ಯರನ್ನು ನೇಮಿಸಬೇಕು. ಅಗತ್ಯವಿದ್ದಲ್ಲಿಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯಲು ಮಾಹಿತಿ ನೀಡುವಂತೆ ತಹಶೀಲ್ದಾರರಿಗೆ ತಿಳಿಸಿದರು.

ADVERTISEMENT

ಜಿಲ್ಲೆಯ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬಹುದು. ಅಲ್ಲಿ ಮುಂಜಾಗ್ರತಾ ಕ್ರಮವಾಗಿ ಸ್ವಚ್ಛತೆ ಕಾಪಾಡುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿಯೂ ಸ್ವಚ್ಛತೆ ಕಾಪಾಡುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ ಸೋನವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ಉಪವಿಭಾಗಾಧಿಕಾರಿ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸುನಿಲ್ ಬಿಸ್ವಾಸ್, ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್., ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

***

ಕಾಳಜಿ ಕೇಂದ್ರದಲ್ಲಿ ಉತ್ತಮ ಆಹಾರ ಪೂರೈಸಬೇಕು. ಸಂತ್ರಸ್ತರಿಗೆ ಸ್ಯಾನಿಟೈಸರ್‌, ಮಾಸ್ಕ್ ನೀಡುವುದರ ಜತೆಗೆ ಕಾಳಜಿ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು
ಡಾ. ರಾಗಪ್ರಿಯಾ,ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.