ADVERTISEMENT

ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ರೈತ ಸಂಘಗಳ ಒಕ್ಕೂಟದಿಂದ ರಾಷ್ಟ್ರಪತಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 2 ಜನವರಿ 2020, 11:25 IST
Last Updated 2 ಜನವರಿ 2020, 11:25 IST
ಯಾದಗಿರಿಯ ರೈತ ಸಂಘಗಳ ಒಕ್ಕೂಟದ ಪದಾಧಿಕಾರಿಗಳು ಕನಿಷ್ಟ ಬೆಂಬಲ ಬೆಲೆ ಖಾತರಿ ಕಾಯ್ದೆ ಜಾರಿಗೆ ತರುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು
ಯಾದಗಿರಿಯ ರೈತ ಸಂಘಗಳ ಒಕ್ಕೂಟದ ಪದಾಧಿಕಾರಿಗಳು ಕನಿಷ್ಟ ಬೆಂಬಲ ಬೆಲೆ ಖಾತರಿ ಕಾಯ್ದೆ ಜಾರಿಗೆ ತರುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು   

ಯಾದಗಿರಿ: ಡಾ.ಎಂ.ಎಸ್.ಸ್ವಾಮಿನಾಥನ್ ವರದಿಯಂತೆ ರೈತರನ್ನು ಸಂಪೂರ್ಣ ಋಣಮುಕ್ತರಾಗಿಸುವ ಕನಿಷ್ಟ ಬೆಂಬಲ ಬೆಲೆ ಖಾತರಿ ಕಾಯ್ದೆ ಜಾರಿಗೆ ತರುವಂತೆ ಆಗ್ರಹಿಸಿ ರೈತ ಸಂಘಗಳ ಒಕ್ಕೂಟದ ಪದಾಧಿಕಾರಿಗಳು ಬುಧವಾರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ರೈತರು ನಿತ್ಯ ಹೀನಾಯ ಪರಿಸ್ಥಿತಿಗೆ ತಲುಪುತ್ತಿದ್ದಾರೆ. ಇದನ್ನು ತಡೆಯಲು ಸ್ವಾಮಿನಾಥನ್ ವರದಿಯ ಸಲಹೆಗಳನ್ನು ಜಾರಿಗೆ ತರಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೂಚಿಸಬೇಕು ಎಂದು ಆಗ್ರಹಿಸಿದರು.

‘ಆಳುವ ಸರ್ಕಾರಗಳ ರೈತ ವಿರೋಧಿ ನೀತಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದನ್ನು ತಡೆಯಲು ರೈತ ಪರವಾದ ಕಾನೂನುಗಳು ಜಾರಿಗೆ ತರಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.

ADVERTISEMENT

ಕೇರಳ ಮಾದರಿಯಲ್ಲಿ ಇಡೀ ದೇಶಕ್ಕೆ ಅನ್ವಯವಾಗುವ ಶಾಶ್ವತ ಋಣ ಮುಕ್ತ ಆಯೋಗ ರಚಿಸಬೇಕು. ಕೃಷಿ ಭೂಮಿ ಸ್ವಾಧೀನ ಮಾಡಿಕೊಳ್ಳುವ ದುಸ್ಸಾಹಸವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಬಿಡಬೇಕು. ಪ್ರವಾಹದಿಂದ ಹಾನಿಯಾದ ರೈತರ ಜಮೀನುಗಳಿಗೆ ಸೂಕ್ತ ಪರಿಹಾರ ನೀಡಬೇಕು. ಬೆಳೆ ಸಮೀಕ್ಷೆ ನಡೆಸಿ ಬೆಳೆ ಪರಿಹಾರ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.

ರೈತ ಸಂಘದ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಸತ್ಯಂಪೇಟೆ, ಆರ್.ಕೆ.ಎಸ್.ಜಿಲ್ಲಾಧ್ಯಕ್ಷ ಶರಣಗೌಡ ಗೂಗಲ್, ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಶರಣು ಮಂದರವಾಡ, ಕೆಪಿಆರ್‌ಎಸ್ ಜಿಲ್ಲಾ ಕಾರ್ಯದರ್ಶಿ ಎಸ್.ಎಂ.ಸಾಗರ, ಉಪಾಧ್ಯಕ್ಷ ಚೆನ್ನಪ್ಪ ಆನೆಗುಂದಿ, ಮಲ್ಲಣ್ಣ ಬೆಂಚಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.