ADVERTISEMENT

‘ಪ್ರಕೃತಿ ವಿಕೋಪ ನಿರ್ವಹಣೆಗೆ ಸಜ್ಜಾಗಿ’

ಜಿಲ್ಲಾ ವಿಕೋಪ ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2019, 17:09 IST
Last Updated 16 ಜುಲೈ 2019, 17:09 IST
ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಮಾತನಾಡಿದರು
ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಮಾತನಾಡಿದರು   

ಯಾದಗಿರಿ: ‘ಜಿಲ್ಲೆಯ ಕೃಷ್ಣಾ ಮತ್ತು ಭೀಮಾ ನದಿಗಳಲ್ಲಿ ಪ್ರವಾಹ ಉಂಟಾದರೆ ಯಾವ ಗ್ರಾಮಗಳಿಗೆ ತೊಂದರೆ ಆಗಬಹುದು ಎಂಬುದನ್ನು ಪಟ್ಟಿ ಮಾಡಿ, ಗ್ರಾಮಸ್ಥರಿಗೆ ಮುನ್ಸೂಚನೆ ನೀಡಬೇಕು. ಅಲ್ಲದೆ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರವಾಹದ ಕುರಿತು ಕೈಗೊಳ್ಳಬೇಕಾದ ಅವಶ್ಯಕ ಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಆಲಮಟ್ಟಿ ಜಲಾಶಯದಿಂದ ನಾರಾಯಣಪುರ ಜಲಾಶಯಕ್ಕೆ ಮಂಗಳವಾರ 40 ಸಾವಿರ ಕ್ಯೂಸೆಕ್ ಒಳಹರಿವು ಇದೆ. ಜಲಾಶಯಕ್ಕೆ ಒಳಹರಿವು ಹೆಚ್ಚಾದಂತೆ ನಾರಾಯಣಪುರ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರು ಹರಿಬಿಡುವ ಸಾಧ್ಯತೆ ಇದೆ. 1 ಲಕ್ಷ ಕ್ಯೂಸೆಕ್ ನೀರು ಬಿಟ್ಟರೆ ಕೃಷ್ಣಾ ನದಿ ಪಾತ್ರದ ಗ್ರಾಮಗಳ ಜನರು ಹಾಗೂ ಮೀನುಗಾರರು ನದಿ ಹತ್ತಿರ ಹೋಗುವುದು, ನದಿಗೆ ಇಳಿಯುವುದು ಮಾಡಬಾರದು ಮತ್ತು ಜಾನುವಾರುಗಳನ್ನು ನದಿಗೆ ಬಿಡದಂತೆ ನೋಡಿಕೊಳ್ಳಬೇಕು’ ಎಂದರು.

ADVERTISEMENT

ಜಲಾಶಯದಿಂದ 1.50 ಲಕ್ಷ ಕ್ಯೂಸೆಕ್ ನೀರು ಬಿಟ್ಟರೆ ಸುರಪುರ ತಾಲ್ಲೂಕಿನ ನೀಲಕಂಠರಾಯನಗಡ್ಡಿ ಗ್ರಾಮ ನಡುಗಡ್ಡೆಯಾಗುತ್ತದೆ. 2 ಲಕ್ಷ ಕ್ಯೂಸೆಕ್ ವರೆಗೆ ನೀರು ಬಿಟ್ಟರೆ ಕೊಳ್ಳುರ (ಎಂ) ಸೇತುವೆ ಮೇಲಿನ ಸಂಚಾರ ಸ್ಥಗಿತವಾಗುತ್ತದೆ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ‘2009ರಲ್ಲಿ ಪ್ರವಾಹ ಉಂಟಾದ ಸಂದರ್ಭದಲ್ಲಿ ಬಂಡೊಳ್ಳಿ ಗ್ರಾಮದ ಜನರನ್ನು ಸ್ಥಳಾಂತರಿಸಿದರೂ ಕೆಲವು ಜನ ಅಲ್ಲಿಯೇ ವಾಸವಾಗಿದ್ದಾರೆ. ಜಾನುವಾರುಗಳನ್ನು ಕಟ್ಟುತ್ತಿದ್ದಾರೆ. ಕೃಷ್ಣಾ ನದಿಗೆ ನೀರು ಬಿಟ್ಟಾಗ ಇವರಿಗೂ ಮುನ್ಸೂಚನೆ ನೀಡಬೇಕು’ ಎಂದು ಹೇಳಿದರು.

ಕಿಸಾನ್ ಸಮ್ಮಾನ್:‘ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನೋಂದಣಿಯಾಗದ ರೈತರ ಹೆಸರುಗಳನ್ನು ಗ್ರಾಮ ಪಂಚಾಯಿತಿಗಳಲ್ಲಿ ನೋಂದಾಯಿಸಲು ಸಲಹೆ ನೀಡಬೇಕು. ಅನರ್ಹರ ಪಟ್ಟಿಯನ್ನು ಅಂತಿಮಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಕೃಷಿ ಅಧಿಕಾರಿಗೆ ನೋಟಿಸ್:‌ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಸಂಬಂಧಪಟ್ಟಂತೆ ಮಾಹಿತಿ ಪಡೆಯಲು ಹೆಚ್ಚುವರಿ ಜಿಲ್ಲಾಧಿಕಾರಿ ಕರೆ ಮಾಡಿದರೆ ಕರೆ ಸ್ವೀಕರಿಸುವುದಿಲ್ಲ ಎಂಬ ಕಾರಣಕ್ಕೆ ಸಹಾಯಕ ಕೃಷಿ ಅಧಿಕಾರಿ ಧೂಳಪ್ಪ ಅವರನ್ನು ಜಿಲ್ಲಾಧಿಕಾರಿ ತರಾಟೆಗೆ ತೆಗೆದುಕೊಂಡರು. ಕೆಲಸದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕಾಗಿ ನ್ಯಾಯಿಕ ಅಧಿಕಾರ (ಮ್ಯಾಜಿಸ್ಟ್ರೇಟ್ ಪವರ್) ಬಳಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಜಂಟಿ ಕೃಷಿ ನಿರ್ದೇಶಕ ಆರ್.ದೇವಿಕಾ, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ, ಕೃಷಿ ಇಲಾಖೆ ಉಪನಿರ್ದೇಶಕ ಸಮದ್ ಪಟೇಲ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹನುಮನಗೌಡ ಪಾಟೀಲ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಆರ್.ಗೋಪಾಲ ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.