ADVERTISEMENT

ಯಾದಗಿರಿ: ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2025, 7:06 IST
Last Updated 5 ಆಗಸ್ಟ್ 2025, 7:06 IST
ಯಾದಗಿರಿಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಯೊಬ್ಬರಿಗೆ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಮುಖಂಡರು ಮನವಿ ಪತ್ರ ಸಲ್ಲಿಸಿದರು
ಯಾದಗಿರಿಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಯೊಬ್ಬರಿಗೆ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಮುಖಂಡರು ಮನವಿ ಪತ್ರ ಸಲ್ಲಿಸಿದರು   

ಯಾದಗಿರಿ: ರಾಜ್ಯ ಹಾಸ್ಟೆಲ್‌ಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರಿಗೆ ಮಾಸಿಕ ₹ 36 ಸಾವಿರ ವೇತನ ಕೊಡುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಹೊರಗುತ್ತಿಗೆ ನೌಕರರು ಸುಮಾರು 15 ವರ್ಷಗಳಿಂದ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದಾರೆ ಎಂದು ಪ್ರತಿಭಟನಕಾರರು ಹೇಳಿದರು. 

ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ‘ಡಿ’ ಗ್ರೂಪ್ ಅಟೆಂಡರ್, ಕಂಪ್ಯೂಟರ್ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್‌, ಹೊರಗುತ್ತಿಗೆ ಶಿಕ್ಷಕರು, ದಿನಗೂಲಿ ನೌಕರರಿಗೆ ಯಾವುದೇ ಭದ್ರತೆ ಇಲ್ಲ. ಗುತ್ತಿಗೆದಾರರು, ವಾರ್ಡನ್‌ಗಳು, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಅವರ ಮೇಲೆ ಶೋಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ADVERTISEMENT

ಹೊರಗುತ್ತಿಗೆ ನೌಕರರನ್ನು ಶೋಷಣೆಯಿಂದ ತಪ್ಪಿಸಲು ಇಲಾಖೆಯಿಂದ ನೇರವಾಗಿ ವೇತನ ಪಾವತಿಸಬೇಕು. ನಿವೃತ್ತಿವರೆಗೆ ಸೇವಾ ಭದ್ರತೆ ಕೊಡಬೇಕು. ಕಾರ್ಮಿಕ ಕಾನೂನು ಪ್ರಕಾರ ಕಡ್ಡಾಯವಾಗಿ ವಾರಕ್ಕೆ ಒಂದು ರಜೆ ನೀಡಬೇಕು. ಕೆಲಸದ ಸಮಯವನ್ನು ನಿಗಧಿ ಮಾಡಬೇಕು ಎಂದು ಒತ್ತಾಯಿಸಿದರು.

ಬೀದರ್ ಜಿಲ್ಲೆಯ ಮಾದರಿಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘವನ್ನು ಯಾದಗಿರಿಯಲ್ಲಿಯೂ ಮಾಡಬೇಕು. ಗುತ್ತಿಗೆದಾರರು ಸಂಬಳದ ಚೀಟಿ, ನೇಮಕಾತಿ ಆದೇಶ ಪತ್ರ, ಗುರುತಿನ ಚೀಟಿ, ಸೇವಾ ಪ್ರಮಾಣ ಪತ್ರ, ಇಎಸ್‌ಐ ಮತ್ತು ಪಿಎಫ್‌ ಹಣ ತುಂಬಿದ ರಶೀದಿ ಕೊಡಬೇಕು ಎಂದು ಆಗ್ರಹಿಸಿದರು.

ಹಿಂದುಳಿದ ವರ್ಗ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿ ಸಂಖ್ಯೆ ಕಡಿತ ಮಾಡಿರುವ ಆದೇಶವನ್ನು ರದ್ದು ಮಾಡಬೇಕು. 50 ವಿದ್ಯಾರ್ಥಿಗಳಿಗೆ 3 ಮೂವರು ಸಿಬ್ಬಂದಿಯಂತೆ ಈ ಹಿಂದಿನ ಪದ್ಧತಿ ಮುಂದುವರಿಸಬೇಕು. ಪ್ರತಿ ತಿಂಗಳು 5ನೇ ತಾರೀಖು ಸಂಬಳ ಕೊಡಬೇಕು. ಬಾಕಿ ಇರುವ ಸಂಬಳವನ್ನು ತಕ್ಷಣವೇ ಪಾವತಿ ಮಾಡಬೇಕು. 10 ವರ್ಷ ಸೇವೆ ಸಲ್ಲಿಸಿರುವ ಹೊರಗುತ್ತಿಗೆ ಸಿಬ್ಬಂದಿಯನ್ನು ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದ ಅಡಿಯಲ್ಲಿ ತರಬೇಕು ಎಂದರು.

ಬಿಸಿಎಂ ಇಲಾಖೆಯಲ್ಲಿ ಕೆಲಸ ಕಳೆದುಕೊಂಡಿರುವ ಹೊರಗುತ್ತಿಗೆ ಸಿಬ್ಬಂದಿಯನ್ನು ಮರು ನೇಮಕ ಮಾಡಿಕೊಳ್ಳಬೇಕು. ಹೊಸದಾಗಿ ಪ್ರಾರಂಭ ಮಾಡುವ ಹಾಸ್ಟೆಲ್‌ಗಳಿಗೆ ಕಡ್ಡಾಯವಾಗಿ ಕೆಲಸಕ್ಕೆ ತೆಗೆದುಕೊಳ್ಳಬೇಕು. ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರಿಂದ ಶೌಚಾಲಯ ಸ್ವಚ್ಛತೆ ಮಾಡಿಸಬಾರದು. ವಸತಿ ನಿಲಯ ಮತ್ತು ಹಾಸ್ಟೆಲ್‌ಗಳಿಗೆ ಅಡುಗೆಗೆ ಬೇಕಾದ ಗುಣಮಟ್ಟದ ಆಹಾರ ಸಾಮಾಗ್ರಿಗಳನ್ನು ಸರಿಯಾದ ಪ್ರಮಾಣದಲ್ಲಿ ತಂದು ಕೊಡಬೇಕು. ನಿವೃತ್ತಿ ನಂತರ ಜೀವನ ನಿರ್ವಹಣೆಗೆ ₹ 10 ಲಕ್ಷ ಪರಿಹಾರ ಕೊಡಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಅಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಪ್ರಧಾನ ಕಾರ್ಯದರ್ಶಿ ಕೆ.ಹನುಮೇಗೌಡ, ರಾಜ್ಯ ಉಪಾಧ್ಯಕ್ಷ ಹುಲಗಪ್ಪ ಛಲವಾದಿ, ಜಿಲ್ಲಾ ಅಧ್ಯಕ್ಷ ದಾವಲ್‌ಸಾಬ್ ನದಾಫ್, ಪ್ರಮುಖರಾದ ದುರ್ಗಮ್ಮ ಹಳ್ಳಿಸಗರ, ವಸಂತರಾಜ ಪೂಜಾರಿ, ಮಲ್ಲಿಕಾರ್ಜುನ ಯಕ್ಷಿಂತ, ಶಂಕರ ಕಡಗುಡ, ಅಯ್ಯಪ್ಪ ಅನಸೂರ, ಬಸಣ ಕೆಂಭಾವಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.