ಶಹಾಪುರ: ‘ನಗರದ ಹೊಸ ಬಸ್ ನಿಲ್ದಾಣದ ಹತ್ತಿರ ₹87 ಲಕ್ಷ ವೆಚ್ಚದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲಾಗಿದೆ. ಅಗತ್ಯ ಸಾಮಗ್ರಿಗಳನ್ನು ಅಳವಡಿಸಲಾಗಿದೆ. ಆಹಾರ ಸರಬರಾಜು ಮಾಡುವ ಟೆಂಡರ್ ಪ್ರಕ್ರಿಯೆ ಮುಕ್ತಾಯಕ್ಕೆ ಬಂದಿದೆ. ಜೂ 5ರಂದು ಇಂದಿರಾ ಕ್ಯಾಂಟೀನ್ ಉದ್ಘಾಟಿಸುವ ನಿರೀಕ್ಷೆ ಇದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು.
ನಗರದ ಹೊಸ ಬಸ್ ನಿಲ್ದಾಣದ ಹತ್ತಿರ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿಯನ್ನು ಶನಿವಾರ ಪರಿಶೀಲಿಸಿ ಅವರು ಮಾತನಾಡಿದರು.
ಬೆಳಿಗ್ಗೆ 8ಗಂಟೆಯಿಂದ 10ಗಂಟೆಯವರೆಗೆ ಉಪಹಾರ, ಮಧ್ಯಾಹ್ನ 1ರಿಂದ 3ಗಂಟೆಯವೆರೆಗೆ ಊಟ ಹಾಗೂ ರಾತ್ರಿ 7.30ರಿಂದ 9ಗಂಟೆಯವರೆಗೆ ಊಟದ ವ್ಯವಸ್ಥೆ ಇರುತ್ತದೆ. ಉಪಹಾರಕ್ಕೆ ₹5 ಹಾಗೂ ಊಟಕ್ಕೆ ₹10 ನಿಗದಿಪಡಿಸಲಾಗಿದೆ. ಅಲ್ಲದೆ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಅದರ ಸುತ್ತ ಸ್ವಚ್ಛತೆ ಹಾಗೂ ಸುರಕ್ಷತೆ ನಿರ್ವಹಿಸಲು ಸೂಚಿಸಿದೆ’ ಎಂದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ಸ್ಥಗಿತಗೊಳಿಸಿತ್ತು. ಈಗ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಕ್ಯಾಂಟೀನ್ ಮಾಡಿದೆ. ಹಸಿದ ಹೊಟ್ಟೆಗೆ ಊಟ ಸಿಗಲಿದೆ. ಬಡ ಜನತೆಗೆ ಇದು ನೆರವಿನ ಆಸರೆಯಾಗುವುದು. ಸರ್ಕಾರಿ ಆಸ್ಪತ್ರೆ ಹಾಗೂ ಬಸ್ ನಿಲ್ದಾಣ ಪ್ರದೇಶದಲ್ಲಿ ಹೆಚ್ಚು ಜನತೆಯ ಓಡಾಟ ಇರುವುದರಿಂದ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಇದನ್ನು ಸದ್ಭಳಕೆ ಮಾಡಿಕೊಳ್ಳಬೇಕು’ ಎಂದರು.
ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ, ಎಂಜಿನಿಯರ್ ನಾನಾಸಾಹೇಬ್ ಮಡಿವಾಳಕರ್, ನಗರ ಆಶ್ರಯ ಸಮಿತಿ ಅಧ್ಯಕ್ಷ ವಸಂತಕುಮಾರ ಸುರಪುರಕರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.