ಯಾದಗಿರಿ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಬುಧವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಜಿಲ್ಲಾ ಶಸ್ತ್ರ ಮೀಸಲು ಪಡೆ, ನಾಗರಿಕ ಪೊಲೀಸ್ ಪಡೆ, ಅರಣ್ಯ ಪಡೆ, ಅಗ್ನಿಶಾಮಕ ಪಡೆ, ಮಹಾತ್ಮ ಗಾಂಧಿ ಶಾಲೆ ಸ್ಕೌಟ್ ತಂಡ, ಆದರ್ಶ ವಿದ್ಯಾಲಯ ಭಾರತ ಸೇವಾದಾಳ ಹಾಗೂ ಸಭಾ ಪ್ರೌಢಶಾಲಾ ತಂಡಗಳ ಗೌರವ ವಂದನೆಯನ್ನು ಸ್ವೀಕರಿಸಿದರು.
ಬಳಿಕ ಮಾತನಾಡಿದ ಸಚಿವರು, 'ಈ ಹಿಂದಿನ ಹೈದರಾಬಾದ್ ಕರ್ನಾಟಕ ಈಗಿನ ಕಲ್ಯಾಣ ಕರ್ನಾಟಕದ ಭಾಗವು ಭಾರತ ಸ್ವತಂತ್ರದ ನಂತರದ ಒಂದು ವರ್ಷ ಒಂದು ತಿಂಗಳು ಎರಡು ದಿನಗಳ ಬಳಿಕ ಸ್ವಾತಂತ್ರ್ಯವನ್ನು ಪಡೆಯಿತು. ಈ ಸ್ವಾತಂತ್ರ್ಯ ಪಡೆಯುವ ಪ್ರಕ್ರಿಯೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ನಿರಂತರ ಹೋರಾಟಗಳು ನಡೆದುಕೊಂಡು ಬಂದಿದ್ದು, ಹೋರಾಟದ ಮುಂಚೂಣಿಯ ನಾಯಕತ್ವವನ್ನು ಮಹಾನ್ ನಾಯಕರಾದ ರಮಾನಂದ ತೀರ್ಥರು ವಹಿಸಿಕೊಂಡಿದ್ದರು' ಎಂದು ಸ್ಮರಿಸಿದರು.
'ರಾಜ್ಯ ಸರ್ಕಾರವು ರಾಜ್ಯದ ಎಲ್ಲ ವರ್ಗದ ಜನರಿಗೆ ಮಹತ್ವದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಅವರಲ್ಲಿ ಆಶಾಭಾವನೆ ಮೂಡಿಸಿದೆ. ಜನರ ಜೀವನದಲ್ಲಿ ಹಲವು ರೀತಿಯಲ್ಲಿ ನೆರವಾಗುತ್ತಿದೆ. ಅದರಂತೆ ಅಭಿವೃದ್ಧಿಗೂ ಸರ್ಕಾರ ವಿಶೇಷ ಒತ್ತನ್ನು ನೀಡಿದೆ' ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರ, ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಎಸ್‌ಪಿ ಪೃಥ್ವಿಕ್ ಶಂಕರ್, ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಡಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.