ADVERTISEMENT

ಬ್ಯಾಂಕಿಂಗ್ ಉದ್ಯೋಗ| ಕನ್ನಡಿಗರಿಗೆ ಆದ್ಯತೆ ಸಿಗಲಿ: ಗುರುದೇವ್ ನಾರಾಯಣಕುಮಾರ್

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2025, 4:22 IST
Last Updated 12 ಅಕ್ಟೋಬರ್ 2025, 4:22 IST
ಗುರುದೇವ್ ನಾರಾಯಣಕುಮಾರ್
ಗುರುದೇವ್ ನಾರಾಯಣಕುಮಾರ್   

ಯಾದಗಿರಿ: ‘ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್‌ಗಳು ವ್ಯವಹಾರದಲ್ಲಿ ಕನ್ನಡಕ್ಕೆ ಆದ್ಯತೆ ನೀಡಿ, ಕನ್ನಡಿಗರಿಗೆ ಉದ್ಯೋಗ ಅವಕಾಶಗಳನ್ನು ಕೊಡಬೇಕು. ಇಲ್ಲದಿದ್ದರೆ ಹೋರಾಟ ಮಾಡಬೇಕಾಗುತ್ತದೆ’ ಎಂದು ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷ ಗುರುದೇವ್ ನಾರಾಯಣಕುಮಾರ್ ಹೇಳಿದರು.

‘ನೇಮಕಾತಿಯಲ್ಲಿ ಬ್ಯಾಂಕ್‌ಗಳು ಕನ್ನಡಿಗರನ್ನು ಕಡೆಗಣಿಸುತ್ತಿವೆ. ನೆರೆಯ ಮಹಾರಾಷ್ಟ್ರ, ಕೇರಳದಲ್ಲಿ ಇಲ್ಲದಂತಹ ಸ್ಥಿತಿ ಕರ್ನಾಟಕದಲ್ಲಿನ ಬಹುತೇಕ ಬ್ಯಾಂಕ್‌ಗಳಲ್ಲಿ ತೆಲಂಗಾಣದವರು ತುಂಬಿಕೊಂಡಿದ್ದಾರೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಇದನ್ನು ತಪ್ಪಿಸಲು ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ಕೊಡಬೇಕು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.‌

‘ಕರ್ನಾಟಕ ಸರ್ಕಾರದ ಆದೇಶದಂತೆ ಎಲ್ಲ ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಸೇರಿ ಅಂಗಡಿಗಳ ನಾಮಫಲಕಗಳಲ್ಲಿ ಕನ್ನಡದ ಹೆಸರು ಶೇ 60:40 ಅನುಪಾತದಲ್ಲಿ ಇರಬೇಕು ಎಂಬ ನಿಯಮವಿದೆ. ಆದರೆ, ಜಿಲ್ಲೆಯಲ್ಲಿ ಈ ನಿಯಮ ಪಾಲನೆ ಆಗುತ್ತಿಲ್ಲ. ಕ್ರಮ ತೆಗೆದುಕೊಳ್ಳಬೇಕಾದ ಜಿಲ್ಲಾಡಳಿತ ಏನು ಮಾಡುತ್ತಿದೆ’ ಎಂದು ಪ್ರಶ್ನಿಸಿದರು.

ADVERTISEMENT

‘ಕಲ್ಯಾಣ ಕರ್ನಾಟಕದ ಭಾಗಕ್ಕೆ 371 (ಜೆ) ವಿಶೇಷ ಸ್ಥಾನ ಕಲ್ಪಿಸಿ, ಅನುದಾನ ನೀಡಿದ್ದರೂ ಅಭಿವೃದ್ಧಿಯಿಂದ ದೂರವೇ ಉಳಿದಿದೆ. ಶಿಕ್ಷಣ, ಆರೋಗ್ಯ, ನೀರಾವರಿ, ಮೂಲಸೌಕರ್ಯಗಳಲ್ಲಿ ಪ್ರಗತಿ ಕಾಣುತ್ತಿಲ್ಲ. ಹೀಗಾಗಿ, ಈ ಭಾಗದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ನಮ್ಮ ಸಮಿತಿ ವತಿಯಿಂದ ಹೋರಾಟ ಮಾಡಲಾಗುವುದು. ಈಗ ಜಿಲ್ಲಾ ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ತಾಲ್ಲೂಕು ಮಟ್ಟದ ಪದಾಧಿಕಾರಿಗಳನ್ನು ನೇಮಿಸಿ ಸಂಘಟನೆ ಮಾಡಲಾಗುವುದು’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಸುಗಳಿದ್ದು, ಸಾಕಷ್ಟು ಪ್ರಮಾಣದಲ್ಲಿ ಹಾಲು ಉತ್ಪಾದನೆ ಆಗುತ್ತಿದೆ. ಹೀಗಾಗಿ, ಜಿಲ್ಲೆಯಲ್ಲಿ ಹೈನುಗಾರಿಕೆಯನ್ನು ಉತ್ತೇಜಿಸಲು ಡೈರಿ ಘಟಕ ನಿರ್ಮಾಣ ಮಾಡಬೇಕು. ಅತಿವೃಷ್ಟಿ ಮತ್ತು ನೆರೆಯಿಂದ ಬೆಳೆ ಕಳೆದುಕೊಂಡ ರೈತರ ಪ್ರತಿ ಎಕರೆಗೆ ₹ 50 ಸಾವಿರ ಪರಿಹಾರ ಕೊಡಬೇಕು. ಎಲ್ಲ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಸುರಪುರದ ಇತಿಹಾಸವು ಶಾಲಾ– ಕಾಲೇಜುಗಳ ಪಠ್ಯದಲ್ಲಿ ಸೇರ್ಪಡೆಯಾಗಬೇಕು’ ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಜಿಲ್ಲಾ ಅಧ್ಯಕ್ಷ ಭೀಮೇಶಪ್ಪ ಹಣಮಂತ, ಮುಖಂಡರಾದ ಹಣಮಂತ, ವೆಂಕಪ್ಪ ಚಟ್ನಿ, ಮಾನಪ್ಪ, ಚಾಂದ್‌ ಹುಸೇನ್, ಶ್ರೀನಿವಾಸ ಲಕ್ಷ್ಮಿಪುರ, ಮಲ್ಲಪ್ಪ, ಅನಿಲ್‌ ಸೇರಿ ಹಲವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.