ADVERTISEMENT

ಕೆಕೆಆರ್‌ಡಿಬಿ: ಕಾಲಾವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 16:45 IST
Last Updated 27 ನವೆಂಬರ್ 2020, 16:45 IST
ಯಾದಗಿರಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್., ಮಾತನಾಡಿದರು
ಯಾದಗಿರಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್., ಮಾತನಾಡಿದರು   

ಯಾದಗಿರಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಮಂಡಳಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು
ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ಅವುಗಳ ವಿವರವನ್ನು ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡುವಂತೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್., ಅವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಕೆಕೆಆರ್‌ಡಿಬಿಯಿಂದ ಕೈಗೊಳ್ಳಲಾಗಿರುವ ಕಟ್ಟಡಗಳು, ಭವನಗಳು ಸೇರಿದಂತೆ ವಿವಿಧ ನಿರ್ಮಾಣ ಕಾಮಗಾರಿಗಳಲ್ಲಿ ಕೆಲವು ಇಲಾಖೆಗಳ ಪ್ರಗತಿ ಕುಂಠಿತವಾಗಿದೆ. ಈ ಇಲಾಖೆಗಳ ಮುಖ್ಯಸ್ಥರು ಕೂಡಲೇ ನಿರ್ಮಾಣ ಕಾಮಗಾರಿಗಳನ್ನು ಕೈಗೊಂಡು ಅವುಗಳನ್ನು ಪೂರ್ಣಗೊಳಿಸಬೇಕು. ಇಲ್ಲದಿದ್ದಲ್ಲಿ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುವುದು. ಸಮಸ್ಯೆಗಳಿದ್ದಲ್ಲಿ ಅವುಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ADVERTISEMENT

ಲೋಕೋಪಯೋಗಿ ಇಲಾಖೆಯ ಮೂಲಕ ಕೆಕೆಆರ್‌ಡಿಬಿಯಿಂದ ಇದುವರೆಗೂ ಕೈಗೊಳ್ಳಲಾದ 513 ಕಾಮಗಾರಿಗಳ ಪೈಕಿ, 438 ಪೂರ್ಣಗೊಂಡಿವೆ. 65 ಕಾಮಗಾರಿಗಳು ಪ್ರಗತಿಯಲ್ಲಿವೆ. ಉಳಿದ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ದೇವಿದಾಸ್ ಚವ್ಹಾಣ್ ಸಭೆಗೆ ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ರಾಗಪ್ರಿಯಾ, ಕೆಕೆಆರ್‌ಡಿಬಿಯ ಕಾಮಗಾರಿಗಳಲ್ಲಿ ಬಾಕಿ ಉಳಿದವನ್ನು ಕೂಡಲೇ ಆರಂಭಿಸಬೇಕು. ಗುಣಮಟ್ಟದ ಕಾಮಗಾರಿಗಳನ್ನು ನಿರ್ವಹಿಸಬೇಕು ಹಾಗೂ ಅವುಗಳಲ್ಲಿ ಪೂರ್ಣಗೊಂಡ ಕಾಮಗಾರಿಗಳ ಪಟ್ಟಿಯನ್ನು ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡುವಂತೆ ಸೂಚಿಸಿದರು.

ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ದಿ ನಿಗಮದಿಂದ 378 ಕಾಮಗಾರಿಗಳನ್ನು ಕೈಗೊಂಡಿದ್ದು, ಅವುಗಳಲ್ಲಿ 265 ಪೂರ್ಣಗೊಂಡಿವೆ. 113 ಪ್ರಗತಿಯಲ್ಲಿವೆ ಎಂದು ಕಾರ್ಯಪಾಲಕ ಎಂಜಿನಿಯರ್ ಸಲೀಂ ಅಹಮದ್ ತಿಳಿಸಿದರು.

ಅದರಂತೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದಿಂದ 916 ವಿವಿಧ ಕಾಮಗಾರಿಗಳನ್ನು ನಿರ್ವಹಿಸಲಾಗುತ್ತಿದ್ದು, ಅವುಗಳಲ್ಲಿ 721 ಈಗಾಗಲೇ ಪೂರ್ಣಗೊಂಡಿವೆ. 124 ಕಾಮಗಾರಿಗಳು ಪ್ರಗತಿಯಲ್ಲಿವೆ. ಉಳಿದವು ಆರಂಭವಾಗಬೇಕು ಎಂದು ಕಾರ್ಯಪಾಲಕ ಎಂಜಿನಿಯರ್ ಮುಕ್ತರ್ ಮಾಹಿತಿ ನೀಡಿದರು.

ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.