ADVERTISEMENT

ಸಾರಿಗೆ ನೌಕರರ ಮುಷ್ಕರಕ್ಕೆ ಯಾದಗಿರಿಯಲ್ಲಿ ಉತ್ತಮ ಬೆಂಬಲ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2025, 4:27 IST
Last Updated 5 ಆಗಸ್ಟ್ 2025, 4:27 IST
<div class="paragraphs"><p>ಯಾದಗಿರಿ ಬಸ್ ನಿಲ್ದಾಣದಲ್ಲಿ ಮಂಗಳವಾರ ಬಸ್‌ಗಳಿಗಾಗಿ ಕಾಯುತ್ತಿರುವ ಪ್ರಯಾಣಿಕರು</p></div>

ಯಾದಗಿರಿ ಬಸ್ ನಿಲ್ದಾಣದಲ್ಲಿ ಮಂಗಳವಾರ ಬಸ್‌ಗಳಿಗಾಗಿ ಕಾಯುತ್ತಿರುವ ಪ್ರಯಾಣಿಕರು

   

ಯಾದಗಿರಿ: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದ ಮುಷ್ಕರಕ್ಕೆ ಯಾದಗಿರಿಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ.

ಹೊಸ ಬಸ್ ನಿಲ್ದಾಣ ಹಾಗೂ ಹಳೇ ಬಸ್ ನಿಲ್ದಾಣದಲ್ಲಿ ಬೆರಳೆಣಿಕೆಯಷ್ಟು ಬಸ್‌ಗಳು ಮಾತ್ರವೇ ಕಾರ್ಯಚರಣೆ ನಡೆಸುತ್ತಿವೆ. ಮುಷ್ಕರದ ಬಗ್ಗೆ ತಿಳಿಯದೆ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರು ಪರದಾಡುತ್ತಿದ್ದಾರೆ.

ADVERTISEMENT

ನಗರದಲ್ಲಿನ ಶಾಲಾ- ಕಾಲೇಜಿಗೆ ಹೋಗಲು ಬಂದಿದ್ದ ನೂರಾರು ವಿದ್ಯಾರ್ಥಿಗಳು ಬಸ್‌ಗಾಗಿ ಗಂಟೆಗಟ್ಟಲೆ ಕಾಯುತ್ತಿದ್ದಾರೆ. ಬೆಂಗಳೂರು, ಮುಂಬೈ, ಪುಣೆಯಿಂದ ರೈಲಿನಲ್ಲಿ ಬಂದಿದ್ದ ವಲಸಿಗ ಕೂಲಿ ಕಾರ್ಮಿಕರು ಸ್ವಗ್ರಾಮಗಳಿಗೆ ತೆರಳಲು ಪರಿತಪಿಸಿದರು. ಸಾರಿಗೆ ಅಧಿಕಾರಿಗಳು ಖಾಸಗಿ ವಾಹನಗಳ ವ್ಯವಸ್ಥೆ ಮಾಡಿ ಪ್ರಯಾಣಿಕರನ್ನು ಕಳುಹಿಸಿಕೊಟ್ಟರು.

'ಖಾಸಗಿ ವಾಹನಗಳ ಸಂಘಟನೆಗಳ ಜೊತೆಗೆ ಮಾತುಕತೆ ನಡೆಸಿ ವಾಹನಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಶಾಲಾ ವಾಹನಗಳು, ಗ್ರಾಮೀಣ ಭಾಗದಿಂದ ಬಂದ ಬಸ್‌ಗಳನ್ನು ನಿಲ್ದಾಣದಲ್ಲಿ ನಿಲ್ಲಿಸುವ ಬದಲು ಹತ್ತಿರದ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ. ದುಪ್ಪಟ್ಟು ದರ ನಿಯಂತ್ರಣಕ್ಕೆ ಕಂಟ್ರೋಲ್ ರೂಮ್ ಸ್ಥಾಪಿಸಲಾಗಿದ್ದು, ಪ್ರಯಾಣಿಕರು ನಮ್ಮ ಗಮನಕ್ಕೆ ತರಬಹುದು' ಎಂದು ಸಾರಿಗೆ ಅಧಿಕಾರಿಯೊಬ್ಬರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.