
ಯಾದಗಿರಿ: ‘ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ರಾಜ್ಯ ಸರ್ಕಾರದ ವಿರುದ್ಧ ಮಾತನಾಡುವ ಹಕ್ಕು ಇಲ್ಲ. ಕೇಂದ್ರ ಸರ್ಕಾರವು ಹೋರಾಟ ನಡೆಸಿದ ರೈತರ ಮೇಲೆ ದಬ್ಬಾಳಿಕೆ ಮಾಡಿದ್ದು, ಮೊದಲು ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮಾತನಾಡಲಿ’ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ್‌ಸಿಂಗ್ ಹೇಳಿದರು.
ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಪ್ರಧಾನಿ ಮೋದಿ ಅವರ ಸರ್ಕಾರ ರೈತರ ಪರವಾಗಿ ಒಂದೂ ಉತ್ತಮ ಕೆಲಸ ಮಾಡಿಲ್ಲ. ರೈತರ ಮೇಲೆ ದಬ್ಬಾಳಿಕೆ ಮಾಡಿದ ಸರ್ಕಾರದಲ್ಲಿ ಸಚಿವರಾಗಿರುವ ಕುಮಾರಸ್ವಾಮಿ ಅವರಿಗೆ ರೈತರ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ’ ಎಂದರು.
‘ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ರಾಜ್ಯ ಸರ್ಕಾರ ಹಾಗೂ ರಾಜ್ಯದ ಹಿತ ಕಾಪಾಡುವ ಬದಲು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ನಡೆದುಕೊಂಡಿದ್ದಾರೆ. ಸಚಿವ ಸಂಪುಟದಲ್ಲಿ ತೆಗದುಕೊಂಡ ನಿರ್ಣಯದಂತೆ ಸಿದ್ಧಪಡಿಸಿದ ಭಾಷಣ ಓದಲಿಲ್ಲ. ಕೊನೆಯಲ್ಲಿ ರಾಷ್ಟ್ರಗೀತೆಗೂ ಅವಮಾನ ಮಾಡಿದ್ದಾರೆ. ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿಯಾಗಿದೆ’ ಎಂದು ಆರೋಪಿಸಿದರು.
‘ಕೆಕೆಆರ್‌ಡಿಬಿಗೆ ಹೆಚ್ಚುವರಿಯಾಗಿ ₹1 ಸಾವಿರ ಕೋಟಿ ಅನುದಾನ ನೀಡುವಂತೆ ಸಿಎಂಗೆ ಮನವಿ ಮಾಡಿದ್ದೇನೆ. ಮಂಡಳಿಗೆ ಮುಂದಿನ ದಿನ ₹ 6 ಸಾವಿರ ಕೋಟಿ ಅನುದಾನ ಬರಬಹುದು. ಇದರಿಂದ ನಮ್ಮ ಭಾಗದ ಸಮಗ್ರ ಅಭಿವೃದ್ಧಿಗೆ ನೆರವಾಗಲಿದೆ’ ಎಂದರು.
ಕಾಂಗ್ರೆಸ್ ಮುಖಂಡರಾದ ಭೀಮರಾಯ ಠಾಣಗುಂದಿ, ರಾಘವೇಂದ್ರ ಹಾಗಣಗೇರಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.