
ಯಾದಗಿರಿ: ಬಾಲಕಾರ್ಮಿಕ ಮಕ್ಕಳ ದುಡಿಮೆಯನ್ನು ನಿಷೇಧಿಸಲು ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾಯ್ದೆ ಜಾರಿಗೆ ತರಲಾಗಿದೆ. ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರ ಎಲ್.ಹೊನೋಲೆ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ–1986 ಮತ್ತು ತಿದ್ದುಪಡಿ 2016ರ ಕುರಿತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಬಾಲಕಾರ್ಮಿಕ ಅಧಿಕಾರಿ ಉಮಾಶ್ರೀ ಎಸ್.ಕೋಳಿ ಮಾತನಾಡಿ, ‘ಬಾಲಕರು ಮತ್ತು ಕಿಶೋರರನ್ನು ಕೆಲಸಕ್ಕೆ ಇಟ್ಟುಕೊಂಡಲ್ಲಿ ಅಂಥ ಅಂಗಡಿಗಳ ಮಾಲೀಕರಿಗೆ ₹20 ಸಾವಿರದಿಂದ ₹50 ಸಾವಿರ ವರೆಗೆ ದಂಡ ಮತ್ತು 6 ತಿಂಗಳಿಂದ 2 ವರ್ಷದ ವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನೂ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ’ ಎಂದರು.
ಇದೇ ವೇಳೆ ಬಾಲ ಕಾರ್ಮಿಕ ಪದ್ಧತಿ ನಿಷೇಧ ಕುರಿತು ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ಬಾಲಕಾರ್ಮಿಕ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲ ರುದ್ರಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ರಕ್ಷಣಾಧಿಕಾರಿ ಪ್ರೇಮ್‌ಮೂರ್ತಿ, ಯಾದಗಿರಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಶೆಟ್ಟಿ, ಯಾದಗಿರಿ ಕಾರ್ಮಿಕ ನಿರೀಕ್ಷಕ ವಿಜೇಂದ್ರ ಕೆ, ಬಿಆರ್‌ಪಿ ಮಲ್ಲಿಕಾರ್ಜುನ ಪೂಜಾರಿ, ಕಾಲೇಜಿನ ಶಿಕ್ಷಕ ಬಿ.ಎಸ್.ಜುಗೇರಿ, ಕಾರ್ಮಿಕ ಇಲಾಖೆಯ ಸಿಬ್ಬಂದಿ ಬಾಲುನಾಯಕ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.